ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 17ನೇ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 199 ರನ್ ಕಲೆಹಾಕಿತು. ಟೈಟಾನ್ಸ್ ತಂಡವು ಆರಂಭದಲ್ಲೇ ವೃದ್ದಿಮಾನ್ ಸಾಹ ವಿಕೆಟ್ ಕಳೆದು ಸಂಕಷ್ಟಕ್ಕೆ ಸಿಲುಕಿತು. ನಂತರ ಜೊತೆಯಾದ ಶುಭ್ಮನ್ ಗಿಲ್ ಹಾಗೂ ಸಾಯಿ ಸುದರ್ಶನ್ ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಶುಭ್ಮನ್ ಗಿಲ್ 48 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 89 ರನ್ ಬಾರಿಸಿ ಅಜೇಯರಾಗುಳಿದರೆ, ಸಾಯಿ ಸುದರ್ಶನ್ 33 ರನ್ ಸಿಡಿಸಿದರು. ಇನ್ನು ಕೊನೆಯಲ್ಲಿ ರಾಹುಲ್ ತೆವಾಟಿಯಾ ಕೇವಲ 8 ಎಸೆತಗಳಲ್ಲಿ 3 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ ಅಜೇತ 23 ರನ್ ಸಿಡಿಸಿದರು.

ಬೃಹತ್ ಮೊತ್ತದ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 19.5 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 200 ರನ್ ಪೂರೈಸಿ ಗೆಲುವು ಸಾಧಿಸಿತು. ಇದರೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದ ಪಂಜಾಬ್, ಐಪಿಎಲ್ನಲ್ಲಿ ಹೆಚ್ಚುಬಾರಿ 200 ರನ್ ಗುರಿ ಬೆನ್ನಟ್ಟಿದ ಯಶಸ್ವಿ ತಂಡ ಎಂಬ ಹೆಗ್ಗಳಿಕೆಯನ್ನೂ ಪಡೆದುಕೊಂಡಿತು. ಬ್ಯಾಟ್ಸ್ಮನ್ ಶಶಾಂಕ್ ಸಿಂಗ್ ಪಂಜಾಬ್ ತಂಡವನ್ನು ಗೆಲುವಿನ ಗೆರೆ ದಾಟಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
