ಸದಾ ಸುದ್ದಿಯಲ್ಲಿರುವ ಮಂಡ್ಯ, ಸುಮಲತಾ ಕಾರಣದಿಂದ ಮತ್ತೊಮ್ಮೆಸದ್ದು ಮಾಡುತ್ತಿದೆ. ತಮ್ಮ ಸ್ಪರ್ಧೆ ಬಗ್ಗೆ ನಾಳೆ ಸಭೆ ನಡೆಸಲಿರುವ ಸಂಸದೆ ಸುಮಲತಾ, ಬೆಂಬಲಿಗರು, ಆಪ್ತರು, ಕ್ಷೇತ್ರದ, ಮುಖಂಡರೊಂದಿಗೆ ಸಭೆ ನಡೆಸುವುದಾಗಿ ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಚುನಾವಣೆಗೆ ಸ್ಪರ್ಧಿಸುವ ಕುರಿತಂತೆ ನನ್ನ ನಿಲುವಿಗಾಗಿ ಅನೇಕರು ಕಾಯುತ್ತಿದ್ದಾರೆ. ಈಗಾಗಲೇ ಆ ಕುರಿತಂತೆ ಗಂಭೀರ ಚಿಂತನೆ ಕೂಡ ಮಾಡಲಾಗಿದೆ. ನಿಮ್ಮೆಲ್ಲರ ನೆಚ್ಚಿನ ರೆಬಲ್ ಸ್ಟಾರ್ ಅಂಬರೀಶ್ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತವರಲ್ಲ. ಮಂಡ್ಯಗಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ. ಹಾಗಾಗಿಯೇ ಏನೇ ನಿರ್ಧಾರ ತಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರೆಯುವೆ ಎಂದು ಹೇಳಿದ್ದೇನೆ. ನಿಮ್ಮ ಭಾವನೆಗಳನ್ನು ನನ್ನೊಂದಿಗೆ ಹಂಚಿಕೊಳ್ಳಲು ನಿಮ್ಮ ಸಮಯವನ್ನು ನನಗೆ ಕೊಟ್ಟು ಮನೆವರೆಗೂ ಬಂದಿದ್ದೀರಿ. ಕೆಲವರು ತಾವು ಇದ್ದಲ್ಲೇ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದೀರಿ. ನಿಮ್ಮೆಲ್ಲರಿಗೂ ಧನ್ಯವಾದಗಳು. ನಿಮ್ಮ ಪ್ರೀತಿ ದೊಡ್ಡದು. ಯಾವತ್ತೂ ಅದು ಹಾಗೆಯೇ ಇರಲಿ ಎಂದು ಆಶಿಸುವೆ ಅಂತ ಬರೆದುಕೊಂಡಿದ್ದಾರೆ.ಅಲ್ಲದೇ ನಾಳಿನ ಸಭೆಯಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಅಭಿಷೇಕ್ ಅಂಬರೀಶ್ ಭಾಗಿಯಾಗಲಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಸುಮಲತಾ ನಿವಾಸಕ್ಕೆ ಭೇಟಿ ನೀಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ, ಬೆಂಬಲವನ್ನೂ ಕೋರಿದ್ರು. ಆದರೆ ಈಗ ಸುಮಲತಾ ಪೋಸ್ಟ್ ನೋಡಿದ್ರೆ, ಅವರ ನಿರ್ಧಾರ ಮೈತ್ರಿ ಪಕ್ಷಗಳಿಗೆ ವ್ಯತಿರಿಕ್ತವಾಗಿರಲಿದ್ಯಾ ಎಂಬ ಅನುಮಾನ ಮೂಡಿಸುತ್ತಿದೆ.