ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಚರ್ಚೆಗೆ ಗ್ರಾಸವಾಗಿರುವ ‘ಕಾಕ್ರೋಚ್ ಕರ್ನಾಟಕ ಜನತಾ ಪಾರ್ಟಿ’ ವತಿಯಿಂದ ನೀಡಲಾಗಿರುವ ಮಾನವ ಸರಪಳಿ ಪ್ರತಿಭಟನೆ ಕರೆ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ಮೇ 24ರಂದು ಬೆಂಗಳೂರಿನ ಟೌನ್‌ಹಾಲ್ ಮುಂಭಾಗದಲ್ಲಿ ಶಾಂತಿಯುತ ಮಾನವ ಸರಪಳಿ ಪ್ರತಿಭಟನೆ ನಡೆಸಲಾಗುತ್ತದೆ ಎಂಬ ಪೋಸ್ಟ್‌ಗಳು ವಾಟ್ಸಾಪ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಹಾಗೂ ಎಕ್ಸ್ (ಟ್ವಿಟರ್) ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಬೆಂಗಳೂರು ನಗರ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ ಸಂದೇಶ ರವಾನಿಸಿದೆ.
ಈ ಸಂಬಂಧ ಅಧಿಕೃತ ಪ್ರಕಟಣೆ ಹೊರಡಿಸಿರುವ ಬೆಂಗಳೂರು ಪೊಲೀಸರು, ಟೌನ್‌ಹಾಲ್ ಬಳಿ ಯಾವುದೇ ರೀತಿಯ ಪ್ರತಿಭಟನೆ ನಡೆಸಲು ಅನುಮತಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸಂಘಟಕರಿಂದ ಯಾವುದೇ ಅಧಿಕೃತ ಅರ್ಜಿ ಸಲ್ಲಿಕೆಯಾಗಿಲ್ಲ ಎಂದು ತಿಳಿಸಿದ್ದಾರೆ. ಸ್ಥಳೀಯ ಆಡಳಿತ ಅಥವಾ ಸಂಬಂಧಿತ ಪ್ರಾಧಿಕಾರದಿಂದಲೂ ಟೌನ್‌ಹಾಲ್ ಪ್ರದೇಶವನ್ನು ಪ್ರತಿಭಟನೆಗಾಗಿ ಬಳಸಲು ಅನುಮತಿ ದೊರೆತಿಲ್ಲ ಎಂಬ ಮಾಹಿತಿಯನ್ನು ಪೊಲೀಸರು ಹಂಚಿಕೊಂಡಿದ್ದಾರೆ.
ಪೊಲೀಸರ ಪ್ರಕಾರ, ಕರ್ನಾಟಕ ಹೈಕೋರ್ಟ್ ಆದೇಶದ ಅನ್ವಯ ಬೆಂಗಳೂರು ನಗರದಲ್ಲಿ ‘ಫ್ರೀಡಂ ಪಾರ್ಕ್’ ಹೊರತುಪಡಿಸಿ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ ನಡೆಸಲು ಅವಕಾಶವಿಲ್ಲ. ಹೀಗಾಗಿ ಟೌನ್‌ಹಾಲ್ ಮುಂಭಾಗದಲ್ಲಿ ಮಾನವ ಸರಪಳಿ ಅಥವಾ ಸಾರ್ವಜನಿಕ ಪ್ರತಿಭಟನೆ ಆಯೋಜಿಸುವುದು ಕಾನೂನುಬಾಹಿರವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇದೇ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ಈ ಪ್ರತಿಭಟನೆಗೆ ಸಂಬಂಧಿಸಿದ ಪೋಸ್ಟ್‌ಗಳನ್ನು ಹಂಚಿಕೊಳ್ಳುವವರ ಮೇಲೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ. ಕೇವಲ ಪೋಸ್ಟ್ ಮಾಡುವುದು ಮಾತ್ರವಲ್ಲದೆ, ವಾಟ್ಸಾಪ್ ಅಥವಾ ಇತರ ವೇದಿಕೆಗಳಲ್ಲಿ ಇಂತಹ ಸಂದೇಶಗಳನ್ನು ಫಾರ್ವರ್ಡ್ ಮಾಡುವವರನ್ನೂ ಕಾನೂನು ವ್ಯಾಪ್ತಿಗೆ ತರಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರು ತಿಳಿದೋ ತಿಳಿಯದೆಯೋ ಇಂತಹ ಪೋಸ್ಟ್‌ಗಳನ್ನು ಹಂಚಿಕೊಳ್ಳಬಾರದು ಎಂದು ಮನವಿ ಮಾಡಲಾಗಿದೆ.
ಮೇ 24ರಂದು ಟೌನ್‌ಹಾಲ್ ಪ್ರದೇಶದಲ್ಲಿ ಯಾವುದೇ ರೀತಿಯ ಗುಂಪುಗೂಡುವಿಕೆ ನಡೆಯಬಾರದು ಎಂದು ಪೊಲೀಸರು ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಲವು ಪೋಸ್ಟ್‌ಗಳು ಸುಳ್ಳು ಹಾಗೂ ದಾರಿ ತಪ್ಪಿಸುವ ಮಾಹಿತಿಯನ್ನು ಒಳಗೊಂಡಿರಬಹುದು ಎಂದು ಎಚ್ಚರಿಕೆ ನೀಡಿರುವ ಪೊಲೀಸರು, ಜನರು ಇಂತಹ ಸಂದೇಶಗಳನ್ನು ನಂಬದೆ ಜಾಗೃತಿಯಿಂದ ವರ್ತಿಸಬೇಕು ಎಂದು ಮನವಿ ಮಾಡಿದ್ದಾರೆ.





