ಬೆಂಗಳೂರು, ಮೇ 27: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ದಿನಗಳಿಂದ ನಡೆಯುತ್ತಿದ್ದ ನಾಯಕತ್ವ ಬದಲಾವಣೆಯ ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ನಾಳೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಈ ಕುರಿತು ಅವರು ಈಗಾಗಲೇ ರಾಜ್ಯಪಾಲರ ಭೇಟಿಗೆ ಸಮಯಾವಕಾಶ ಕೋರಿ ಪತ್ರ ರವಾನಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಗುರುವಾರ ಬೆಳಿಗ್ಗೆ 10:30ಕ್ಕೆ ರಾಜ್ಯಪಾಲರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸುವ ಸಾಧ್ಯತೆ ಇದೆ. ಈ ಸಂಬಂಧ ಈಗಾಗಲೇ ಮುಖ್ಯಮಂತ್ರಿ ಕಚೇರಿಯಿಂದ ರಾಜಭವನಕ್ಕೆ ಅಧಿಕೃತವಾಗಿ ಸಮಯಾವಕಾಶ ಕೋರಲಾಗಿದೆ ಎಂದು ತಿಳಿದುಬಂದಿದೆ.
ಇದರ ನಡುವೆ, ನಾಳೆ ಬೆಳಿಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಚಿವರು ಮತ್ತು ಶಾಸಕರಿಗಾಗಿ ಉಪಹಾರ ಕೂಟವನ್ನು ಆಯೋಜಿಸಿದ್ದಾರೆ. ಈ ಸಭೆಯಲ್ಲಿ ಮಹತ್ವದ ರಾಜಕೀಯ ಚರ್ಚೆಗಳು ನಡೆಯುವ ಸಾಧ್ಯತೆ ಇದ್ದು, ಮುಂದಿನ ನಾಯಕತ್ವ ಬದಲಾವಣೆ ಕುರಿತಂತೆ ಅಂತಿಮ ಮಾತುಕತೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.
ಕಳೆದ ಕೆಲವು ದಿನಗಳಿಂದ ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿತ್ತು. ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಒಪ್ಪಿಸುವ ಕುರಿತು ಕಾಂಗ್ರೆಸ್ ಹೈಕಮಾಂಡ್ ಗಂಭೀರ ಚಿಂತನೆ ನಡೆಸಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ದೆಹಲಿಯಲ್ಲಿ ನಡೆದ ಹಲವು ಸುತ್ತಿನ ಸಭೆಗಳ ಬಳಿಕ ಇದೀಗ ನಾಯಕತ್ವ ಬದಲಾವಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ ಎನ್ನಲಾಗಿದೆ.
ಸಿದ್ದರಾಮಯ್ಯ ಅವರ ರಾಜೀನಾಮೆ ಕುರಿತ ಸುದ್ದಿಗಳು ಹರಿದಾಡುತ್ತಿದ್ದಂತೆಯೇ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿದೆ. ಕಾಂಗ್ರೆಸ್ ಪಕ್ಷದ ಹಲವು ನಾಯಕರು ಈ ಬೆಳವಣಿಗೆ ಕುರಿತು ಮೌನ ವಹಿಸಿದ್ದು, ಅಧಿಕೃತ ಘೋಷಣೆಯವರೆಗೆ ಯಾವುದೇ ಪ್ರತಿಕ್ರಿಯೆ ನೀಡಲು ಮುಂದಾಗಿಲ್ಲ. ಆದರೆ ಪಕ್ಷದ ವಲಯದಲ್ಲಿ ನಾಯಕತ್ವ ಬದಲಾವಣೆ ಈಗ ಅಂತಿಮ ಹಂತ ತಲುಪಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಇನ್ನೊಂದೆಡೆ, ಡಿ.ಕೆ. ಶಿವಕುಮಾರ್ ಬೆಂಬಲಿಗರು ಈಗಾಗಲೇ ರಾಜಕೀಯ ಚಟುವಟಿಕೆಗಳನ್ನು ಚುರುಕುಗೊಳಿಸಿದ್ದು, ಹೊಸ ಸಿಎಂ ಆಗಿ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕರಿಸುವ ಸಾಧ್ಯತೆಗಳ ಕುರಿತು ಚರ್ಚೆಗಳು ಜೋರಾಗಿವೆ. ಕೆಲ ಶಾಸಕರು ಮತ್ತು ಸಚಿವರು ಡಿಕೆ ಪರವಾಗಿ ತೆರೆಯಾಗಿ ಬೆಂಬಲ ಸೂಚಿಸುತ್ತಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ.





