ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಗಣ್ಯರ ದಂಡೇ ಆಗಮಿಸುತ್ತಿದೆ. ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯುವ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಹಲವು ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ನಿಂದ ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿ ವಾದ್ರಾ ಮತ್ತು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರುಗಳು ಆಗಮಿಸುವ ಸಾಧ್ಯತೆಯಿದೆ. ಇದರ ಜೊತೆಗೆ ಕೇರಳ ಸಿಎಂ ಸತೀಶನ್, ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ, ಛತ್ತೀಸ್ಗಢದ ಮುಖ್ಯಮಂತ್ರಿ ಭೂಪೇಂದ್ರ ಬಘೇಲ್, ಮಧ್ಯಪ್ರದೇಶದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್, ಹರಿಯಾಣದ ಭೂಪೇಂದ್ರ ಸಿಂಗ್ ಹೂಡಾ, ಮಹಾರಾಷ್ಟ್ರದ ಸುಶೀಲ್ ಕುಮಾರ್ ಶಿಂಧೆ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪ್ರಮುಖ ನಾಯಕರು ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಜನರಲ್ ಸೆಕ್ರಟರಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸುರ್ಜೇವಾಲಾ ಸಹ ಆಹ್ವಾನ ಪಡೆದಿದ್ದಾರೆ. ಸುಮಾರು 50 ಮಂದಿ ವಿವಿಐಪಿಗಳು ಲೋಕಭವನಕ್ಕೆ ಆಗಮಿಸುವ ನಿರೀಕ್ಷೆ ಇದೆ. ಈ ಸಮಾರಂಭವು ಸರಳವಾಗಿ ನಡೆಯಲಿದ್ದರೂ, ರಾಷ್ಟ್ರೀಯ ಮಟ್ಟದ ನಾಯಕರ ಉಪಸ್ಥಿತಿಯಿಂದ ವಿಶೇಷ ಮಹತ್ವ ಪಡೆದಿದೆ.
ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡುವಲ್ಲಿ ಕಾಂಗ್ರೆಸ್ ಹೈಕಮಾಂಡ್ನ ಪೂರ್ಣ ಬೆಂಬಲವಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇಂದಿನ ಸಮಾರಂಭದಲ್ಲಿ ಡಿ.ಕೆ.ಶಿವಕುಮಾರ್ ಅವರ ಜೊತೆಗೆ ಸುಮಾರು 9-10 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಭದ್ರತಾ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಲೋಕಭವನದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಟ್ರಾಫಿಕ್ ನಿಯಂತ್ರಣ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಸಮಾರಂಭವನ್ನು ನೇರ ಪ್ರಸಾರ ಮಾಡುವ ಎಲ್ಲಾಏರ್ಪಾಟುಗಳನ್ನೂ ಮಾಡಲಾಗಿದೆ.
ಡಿ.ಕೆ.ಶಿವಕುಮಾರ್ ಅವರ ನಾಯಕತ್ವದಲ್ಲಿ ಹೊಸ ಸರ್ಕಾರ ರಚನೆಯಾಗುತ್ತಿರುವುದು ಕರ್ನಾಟಕ ಕಾಂಗ್ರೆಸ್ಗೆ ಹೊಸ ಶಕ್ತಿ ತುಂಬುವುದು ಎಂದು ಪಕ್ಷದ ಕಾರ್ಯಕರ್ತರು ಭಾವಿಸಿದ್ದಾರೆ.
ರಾಜ್ಯದ ಅಭಿವೃದ್ಧಿ, ರೈತರು, ಯುವಕರು ಮತ್ತು ಸಾಮಾಜಿಕ ನ್ಯಾಯದ ಕಡೆಗೆ ಗಮನ ಹರಿಸುವುದಾಗಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.ಇಂದು ಸಂಜೆ ನಡೆಯುವ ಈ ಪಟ್ಟಾಭಿಷೇಕ ಸಮಾರಂಭವು ಕರ್ನಾಟಕ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭಿಸುವ ಸೂಚನೆಯಾಗಿದೆ. ರಾಜ್ಯದ ಜನತೆಯೂ ಉತ್ಸುಕತೆಯಿಂದ ಈ ಕಾರ್ಯಕ್ರಮವನ್ನು ನಿರೀಕ್ಷಿಸುತ್ತಿದೆ.




