ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಪಕ್ಷದಲ್ಲಿ ಅಧಿಕಾರಾಕಾಂಕ್ಷಿಗಳಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ. “ಯಾರಿಗೆ ಅಧಿಕಾರ ಮತ್ತು ಸ್ಥಾನಮಾನ ಬೇಕೋ ಅವರು ಡಿ.ಕೆ. ಶಿವಕುಮಾರ್ ಜೊತೆಗೆ ಹೋಗಿ, ಪಕ್ಷವನ್ನು ಸದೃಢವಾಗಿ ಬೆಳೆಸಬೇಕು ಅನ್ನೋರು ನಮ್ಮ ಜೊತೆಗೆ ಬನ್ನಿ” ಎಂದು ಹೇಳುವ ಮೂಲಕ ಪಕ್ಷದಲ್ಲಿ ಎರಡು ಬಣಗಳ ನಡುವಿನ ವ್ಯತ್ಯಾಸವನ್ನು ಸ್ಪಷ್ಟಪಡಿಸಿದ್ದಾರೆ.
ಹೊಸ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಟ್ವಿಟ್ಟರ್ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡ ಹರಿಪ್ರಸಾದ್ ಅವರು, ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. “ಸರ್ಕಾರದಲ್ಲಿ ಈಗಾಗಲೇ ಬೇರೆ ಬೇರೆ ಕೆಲಸ ಮಾಡಿದವರು ಈಗ ಪಕ್ಷದ ಸಂಘಟನೆಗೆ ಒತ್ತು ನೀಡಬೇಕು. ನಾವೆಲ್ಲರೂ ಸೇರಿ ರಾಹುಲ್ ಗಾಂಧಿ ಅವರ ಹೋರಾಟಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕಿದೆ” ಎಂದು ಹೇಳಿದ್ದಾರೆ.
ಈ ನಿರ್ಧಾರವು ಕೇವಲ ಒಬ್ಬ ವ್ಯಕ್ತಿಗೆ ನೀಡಿರುವ ಹುದ್ದೆಯಲ್ಲ ಎಂದು ಬಣ್ಣಿಸಿದ ಹರಿಪ್ರಸಾದ್, “ಇದು ಕಾಂಗ್ರೆಸ್ ಪಕ್ಷದ ಮೂಲ ಸಿದ್ಧಾಂತಗಳಾದ ಸಾಮಾಜಿಕ ನ್ಯಾಯ, ಜಾತ್ಯತೀತತೆ, ಪ್ರಜಾಪ್ರಭುತ್ವ ಮತ್ತು ದುರ್ಬಲ ವರ್ಗಗಳ ಸಬಲೀಕರಣಕ್ಕೆ ಸಂದ ಜಯ” ಎಂದು ಹೇಳಿದ್ದಾರೆ. ತಮ್ಮ ಜೀವನ ಪೂರ್ತಿ ಕಾಂಗ್ರೆಸ್ ತತ್ವಗಳಿಗಾಗಿ ಮೀಸಲಿಟ್ಟಿದ್ದೇನೆ ಎಂದು ಭರವಸೆ ನೀಡಿದ ಅವರು, “ನನಗೆ ಅಧಿಕಾರಕ್ಕಿಂತ ಸಿದ್ಧಾಂತ ದೊಡ್ಡದು, ಹುದ್ದೆಗಿಂತ ಜನರ ಹಿತ ಮುಖ್ಯ” ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಸ್ತುತ ದೇಶದಲ್ಲಿ ದ್ವೇಷದ ರಾಜಕಾರಣ ಮತ್ತು ಧರ್ಮದ ಹೆಸರಿನಲ್ಲಿ ಧ್ರುವೀಕರಣ ನಡೆಯುತ್ತಿರುವ ಸಂದರ್ಭದಲ್ಲಿ ಈ ಹುದ್ದೆಗೆ ಆಯ್ಕೆಯಾಗಿರುವುದು ದೊಡ್ಡ ಸವಾಲು ಎಂದು ಹರಿಪ್ರಸಾದ್ ಅವರು ಅಭಿಪ್ರಾಯಪಟ್ಟಿದ್ದಾರೆ. ಹಿಂದುಳಿದ ವರ್ಗಗಳು, ದಲಿತರು, ಅಲ್ಪಸಂಖ್ಯಾತರು, ರೈತರು ಮತ್ತು ಯುವಜನರ ಆಶೋತ್ತರಗಳನ್ನು ತಾವು ಬಲ್ಲೆ ಎಂದು ಹೇಳಿದ ಅವರು, ಸಂವಿಧಾನವೇ ನಮ್ಮ ದಾರಿ, ಸಾಮಾಜಿಕ ನ್ಯಾಯವೇ ನಮ್ಮ ಗುರಿ ಎಂದು ಒತ್ತಿ ಹೇಳಿದ್ದಾರೆ.
ಹೈಕಮಾಂಡ್ ನಾಯಕರಿಗೆ ಧನ್ಯವಾದಗಳನ್ನು ಅರ್ಪಿಸಿದ ಹರಿಪ್ರಸಾದ್, ಎಲ್ಲಾ ನಾಯಕರು ಮತ್ತು ಪ್ರಜಾಪ್ರಭುತ್ವವಾದಿಗಳು ತಮ್ಮೊಂದಿಗೆ ಕೈಜೋಡಿಸುವರೆಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಮಾತುಗಳು ಕಾಂಗ್ರೆಸ್ ಪಕ್ಷದಲ್ಲಿ ಹೊಸ ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ.




