ಮೈಸೂರಿನ ದಟ್ಟಗಳ್ಳಿ 4ನೇ ಹಂತದ ಬಳಿಯಿರುವ ಫಾಕ್ಸ್ ಡೆನ್ ಲಿಕ್ಕರ್ ಗ್ಯಾರೇಜ್’ ಪಬ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಈ ದುರಂತದಲ್ಲಿ ಇಬ್ಬರು ಸಜೀವ ದಹನವಾಗಿದ್ದಾರೆ. ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಶಾಹಿಲ್, ಪ್ರಕಾಶ್ ಮೃತ ದುರ್ವೈವಿಗಳು. ಇನ್ನು ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಬ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಮೊದಲು ಪಬ್‌ನ ಅಡುಗೆ ಕೋಣೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಕ್ಷಣಾರ್ಧದಲ್ಲಿ ಇಡೀ ಪಬ್ ಗೆ ವ್ಯಾಪಿಸಿದ್ದು, ದಟ್ಟವಾದ ಕಪ್ಪು ಹೊಗೆ ಇಡೀ ಕಟ್ಟಡವನ್ನು ಆವರಿಸಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಏಕಾಏಕಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದೆ ಅಂದರೆ ಮೇಲ್ನೋಟಕ್ಕೆ ಸಿಲಿಂಡರ್ ಸ್ಫೋಟ ಗೊಂಡಿರಬಹುದು ಎಂದು ಶಂಕಿಸಲಾಗಿದೆ. ಅಗ್ನಿ ಅವಘಡ ಸಂದರ್ಭದಲ್ಲಿ ಪಬ್ ನಲ್ಲಿ 25ಕ್ಕೂ ಹೆಚ್ಚು ಜನರಿದ್ದರು. ಸದ್ಯ 15 ಜನರನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಹಲವಾರು ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿದರು. ಬೆಂಕಿಯನ್ನು ನಂದಿಸಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಸದ್ಯ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲಾಗಿದೆ. ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ.
ಸಿಲಿಂಡರ್ ಸ್ಫೋಟದಿಂದಾಗಿ ದೇಹದ ವಿವಿಧ ಭಾಗಗಳಲ್ಲಿ ಸುಟ್ಟಗಾಯಗಳಾಗಿದ್ದ ಪಬ್‌ನ ಸಿಬ್ಬಂದಿ ಮತ್ತು ಗ್ರಾಹಕರನ್ನು ತಕ್ಷಣವೇ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ದುರಂತ ಸಂಭವಿಸಿದ ಸ್ಥಳಕ್ಕೆ ಮೈಸೂರು ನಗರದ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸದ್ಯ ಪ್ರಕರಣ ದಾಖಲಾಗಿದ್ದು, ಮೃತರ ಕುಟುಂಬದವರಿಗೆ ಮಾಹಿತಿ ರವಾನಿಸಲಾಗಿದೆ.





