ಕರ್ನಾಟಕ ಕಾಂಗ್ರೆಸ್ ಪಕ್ಷವು ರಾಜ್ಯದ ವಿವಿಧ ಜಿಲ್ಲೆಗಳಿಗೆ ಉಸ್ತುವಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಪಕ್ಷದ ಸಂಘಟನೆ ಬಲಿಷ್ಠಗೊಳಿಸುವ ಮತ್ತು ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಅನುವು ಮಾಡಿಕೊಡುವ ಉದ್ದೇಶದಿಂದ ಈ ಹೊಣೆಗಾರಿಕೆಗಳನ್ನು ವಿತರಿಸಲಾಗಿದೆ.

ನೇಮಕಗೊಂಡಿರುವ ಪ್ರಮುಖ ನಾಯಕರು ಮತ್ತು ಅವರಿಗೆ ವಹಿಸಲಾದ ಜಿಲ್ಲೆಗಳ ವಿವರ ಇಲ್ಲಿದೆ
ಡಾ. ಜಿ. ಪರಮೇಶ್ವರ್ ಅವರಿಗೆ ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಅವರು ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ.
ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣ ಮತ್ತು ಮಂಡ್ಯ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ. ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಉಸ್ತುವಾರಿಯಾಗಿದ್ದಾರೆ.
ಇನ್ನೊಂದೆಡೆ, ಸಚಿವ ಕೆ.ಜೆ. ಜಾರ್ಜ್ ಅವರಿಗೆ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ ಜವಾಬ್ದಾರಿ ವಹಿಸಲಾಗಿದೆ. ಸಚಿವ ಕೃಷ್ಣ ಬೈರೇಗೌಡ ಅವರು ಬೆಂಗಳೂರು ನಗರ ಹಾಗೂ ಹಾಸನ ಜಿಲ್ಲೆಗಳ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.
ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೆ ಬೀದರ್ ಮತ್ತು ಗದಗ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದ್ದು, ಸಚಿವ ಸತೀಶ್ ಜಾರಕಿಹೊಳಿ ಅವರು ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ.
ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಉಸ್ತುವಾರಿಯಾಗಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ. ಯು.ಟಿ. ಖಾದರ್ ಅವರು ದಕ್ಷಿಣ ಕನ್ನಡ, ಉಡುಪಿ, ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.





