ಲಕ್ನೋ: ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಹಣದ ದುರ್ಬಳಕೆ ಹಾಗೂ ಕಳ್ಳತನಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ತನಿಖಾ ತಂಡ (SIT) ನೀಡಿದ ಪ್ರಾಥಮಿಕ ವರದಿಯ ಶಿಫಾರಸಿನ ಮೇರೆಗೆ ಉತ್ತರ ಪ್ರದೇಶ ಸರ್ಕಾರ 8 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ..
ಪ್ರಕರಣದ ತನಿಖೆ ವೇಳೆ 6 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಈ ವೇಳೆ ಕೆಲವು ಮೊತ್ತದ ಹಣವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬಳಿಕ ಅನುಕಲ್ಪ್ ಮಿಶ್ರಾ ಮತ್ತು ಲವಕುಶ್ ಮಿಶ್ರಾ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳ ಪತ್ತೆ ಮತ್ತು ಬಂಧನಕ್ಕಾಗಿ ತನಿಖೆ ಮುಂದುವರಿದಿದೆ.
ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸದಸ್ಯ ಕೃಷ್ಣ ಮೋಹನ್ ಅವರು ನೀಡಿದ ದೂರಿನ ಆಧಾರದ ಮೇಲೆ ಅಯೋಧ್ಯೆಯ ರಾಮ ಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 306, 316(5), 317(4), 317(5), 61 ಹಾಗೂ 3(5) ಅಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ.
SIT ತನಿಖೆಯಲ್ಲಿ ದೇಣಿಗೆ ಹಣದ ಸಂಗ್ರಹಣೆ, ಲೆಕ್ಕಪತ್ರ ನಿರ್ವಹಣೆ ಮತ್ತು ಹಣ ವರ್ಗಾವಣೆಯ ಪ್ರಕ್ರಿಯೆಯಲ್ಲಿ ಹಲವು ಅಕ್ರಮಗಳು ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆ ತನಿಖಾ ತಂಡ ತನ್ನ ಪ್ರಾಥಮಿಕ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿತ್ತು. ವರದಿಯಲ್ಲಿ ಕೆಲ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಶಿಫಾರಸು ಮಾಡಲಾಗಿತ್ತು.
ಎಫ್‌ಐಆರ್‌ನಲ್ಲಿ ಹೆಸರು ಉಲ್ಲೇಖಗೊಂಡಿರುವ ಪ್ರಮುಖ ಆರೋಪಿಗಳಲ್ಲಿ ಅವಿನಾಶ್ ಶುಕ್ಲಾ, ಅನುಕಲ್ಪ್ ಮಿಶ್ರಾ, ಮನೀಶ್ ಯಾದವ್, ರಾಮಶಂಕರ್ ಮಿಶ್ರಾ, ರಾಮಶಂಕರ್ ಯಾದವ್ ಅಲಿಯಾಸ್ ಟಿನ್ನು, ಸುಭಾಷ್ ಚಂದ್ರ, ಕರುಣೇಶ್ ಪಾಂಡೆ ಸೇರಿದಂತೆ ಒಟ್ಟು 8 ಮಂದಿ ಸೇರಿದ್ದಾರೆ. ಜೊತೆಗೆ, ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆಯಿರುವ ಹಲವಾರು ಅಪರಿಚಿತ ವ್ಯಕ್ತಿಗಳ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.





