ಬೀದರ್, ಜುಲೈ 1: ಬೀದರ್ ಜಿಲ್ಲೆಯಲ್ಲಿನ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೀದರ್ ಜಿಲ್ಲಾ ಆಡಳಿತ ಮಹತ್ವದ ಕ್ರಮ ಕೈಗೊಂಡಿದ್ದು, ಅಪರಾಧ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿದ್ದ ಇಬ್ಬರು ರೌಡಿಶೀಟರ್‌ಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ ಹೊರಡಿಸಿದ್ದಾರೆ.
- ಬೀದರ್‌ನ ಇಬ್ಬರು ರೌಡಿಶೀಟರ್‌ಗಳ ಗಡಿಪಾರು
- ಎಸ್‌ಪಿ ಪ್ರದೀಪ್ ಗುಂಟಿ ಅವರ ಶಿಫಾರಸಿನ ಮೇರೆಗೆ ಕ್ರಮ
- ರೆಹಮತ್ ಹುಸೇನ್ ಅವರನ್ನು ಕಾರವಾರ ಜಿಲ್ಲೆಗೆ, ಜಾವಿದ್ ಅಲಿಯನ್ನು ಚಾಮರಾಜನಗರ ಜಿಲ್ಲೆಗೆ ಗಡಿಪಾರು
- ಇಬ್ಬರೂ ಮಾದಕ ವಸ್ತುಗಳ ಮಾರಾಟ ಹಾಗೂ ಇತರೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪ
- ಇಬ್ಬರ ವಿರುದ್ಧ 5 ರಿಂದ 6 ಪ್ರಕರಣಗಳು ದಾಖಲಾಗಿದ್ದು, ಸಾರ್ವಜನಿಕ ಶಾಂತಿ ಕಾಪಾಡುವ ಉದ್ದೇಶದಿಂದ ಕ್ರಮ
ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಪ್ರದೀಪ್ ಗುಂಟಿ ಅವರ ಶಿಫಾರಸಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಗಡಿಪಾರುಗೊಂಡಿರುವವರು ಬೀದರ್ ನಗರದ ಇರಾನಿ ಕಾಲನಿಯ ನಿವಾಸಿಗಳಾದ ರೆಹಮತ್ ಹುಸೇನ್ ಹಾಗೂ ಜಾವಿದ್ ಅಲಿ. ಜಿಲ್ಲಾಧಿಕಾರಿಗಳ ಆದೇಶದಂತೆ ರೆಹಮತ್ ಹುಸೇನ್ ಅವರನ್ನು ಕಾರವಾರ ಜಿಲ್ಲೆಗೆ ಹಾಗೂ ಜಾವಿದ್ ಅಲಿಯನ್ನು ಚಾಮರಾಜನಗರ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ಇವರಿಬ್ಬರೂ ನಿರಂತರವಾಗಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಹಿನ್ನೆಲೆ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಪೊಲೀಸರ ಮಾಹಿತಿಯ ಪ್ರಕಾರ, ಇಬ್ಬರೂ ಮಾದಕ ವಸ್ತುಗಳ ಮಾರಾಟ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಪದೇ ಪದೇ ಭಾಗಿಯಾಗುತ್ತಿದ್ದರು. ಇವರ ವಿರುದ್ಧ ಸುಮಾರು 5 ರಿಂದ 6 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಹಲವು ಬಾರಿ ಎಚ್ಚರಿಕೆ ನೀಡಿದರೂ ಅಪರಾಧ ಚಟುವಟಿಕೆಗಳನ್ನು ನಿಲ್ಲಿಸಿರಲಿಲ್ಲ ಈ ಕಾರಣಕ್ಕೆ ಇವರಿಬ್ಬರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ ಎನ್ನಲಾಗಿದೆ.
ಅಪರಾಧಗಳನ್ನು ತಡೆಯಲು ಹಾಗೂ ಸಾರ್ವಜನಿಕರಲ್ಲಿ ಭದ್ರತೆಯ ಭಾವನೆ ಮೂಡಿಸಲು ಗಡಿಪಾರು ಕ್ರಮ ಅನಿವಾರ್ಯವಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಈ ಕ್ರಮದ ಮೂಲಕ ಜಿಲ್ಲೆಯಲ್ಲಿ ಮಾದಕ ವಸ್ತುಗಳ ಅಕ್ರಮ ಜಾಲಕ್ಕೆ ಕಡಿವಾಣ ಹಾಕುವ ಜೊತೆಗೆ ಸಮಾಜಘಾತುಕ ಚಟುವಟಿಕೆಗಳನ್ನು ನಿಯಂತ್ರಿಸುವ ಉದ್ದೇಶ ಹೊಂದಲಾಗಿದೆ.
ಜಿಲ್ಲಾ ಪೊಲೀಸ್ ಇಲಾಖೆ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುವವರ ವಿರುದ್ಧ ಮುಂದೆಯೂ ಇದೇ ರೀತಿಯ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ಸಾರ್ವಜನಿಕರು ಕೂಡ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುವ ಮೂಲಕ ಪೊಲೀಸರಿಗೆ ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ.





