ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವಾದ ಸೋಮವಾರ ರಾಷ್ಟ್ರ ರಾಜಧಾನಿ ನವದೆಹಲಿ ಪ್ರತಿಭಟನೆ ಮತ್ತು ಉದ್ವಿಗ್ನ ವಾತಾವರಣಕ್ಕೆ ಸಾಕ್ಷಿಯಾಯಿತು. ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ನೇತೃತ್ವದಲ್ಲಿ ಆಯೋಜಿಸಲಾಗಿದ್ದ ‘ಚಲೋ ಸಂಸದ್’ ಮೆರವಣಿಗೆಯನ್ನು ತಡೆಯಲು ಪೊಲೀಸರು ಮುಂದಾದ ವೇಳೆ ಪ್ರತಿಭಟನಾಕಾರರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ತೀವ್ರ ಘರ್ಷಣೆ ನಡೆಯಿತು. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ಕೆಲವರನ್ನು ವಶಕ್ಕೆ ಪಡೆದಿರುವ ವರದಿಗಳು ಲಭ್ಯವಾಗಿವೆ.
ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರು ಜಂತರ್ ಮಂತರ್‌ನಿಂದ ಸಂಸತ್ ಭವನದತ್ತ ಮೆರವಣಿಗೆ ಆರಂಭಿಸಿದ್ದರು. ಸಾವಿರಾರು ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಸಂಸತ್‌ಗೆ ತೆರಳಲು ಯತ್ನಿಸಿದ ಹಿನ್ನೆಲೆಯಲ್ಲಿ, ಭದ್ರತಾ ಸಿಬ್ಬಂದಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡರು.
ದೆಹಲಿ ಪೊಲೀಸರು ಈ ಮೆರವಣಿಗೆಗೆ ಯಾವುದೇ ಪೂರ್ವಾನುಮತಿ ನೀಡಿರಲಿಲ್ಲ. ಸಂಸತ್ ಅಧಿವೇಶನದ ಹಿನ್ನೆಲೆ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಜಂತರ್ ಮಂತರ್‌ನಂತಹ ನಿಗದಿತ ಪ್ರತಿಭಟನಾ ಸ್ಥಳಗಳನ್ನು ಹೊರತುಪಡಿಸಿ, ಐದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದು, ಮೆರವಣಿಗೆ ನಡೆಸುವುದು ಹಾಗೂ ಸಂಸತ್ ಭವನದತ್ತ ಸಾಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಈ ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಪ್ರತಿಭಟನಾಕಾರರು ಮುಂದೆ ಸಾಗಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು.
ಆದರೆ ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ದಾಟಲು ಯತ್ನಿಸಿದ ಪರಿಣಾಮ ಪರಿಸ್ಥಿತಿ ಉದ್ವಿಗ್ನಗೊಂಡಿತು. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಮೊದಲು ಎಚ್ಚರಿಕೆ ನೀಡಿದರು. ಬಳಿಕ ಪರಿಸ್ಥಿತಿ ನಿಯಂತ್ರಣ ಮೀರುತ್ತಿದ್ದಂತೆ ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದರು. ಈ ವೇಳೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಮಾಹಿತಿ ಲಭ್ಯವಾಗಿದೆ.
ಸಂಸತ್ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ದೆಹಲಿಯಾದ್ಯಂತ ವ್ಯಾಪಕ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿತ್ತು. ಪ್ರಮುಖ ರಸ್ತೆಗಳಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ಸಂಸತ್ ಸುತ್ತಮುತ್ತ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಯಿತು. ಸಂಚಾರ ವ್ಯವಸ್ಥೆಯಲ್ಲೂ ಕೆಲಕಾಲ ವ್ಯತ್ಯಯ ಉಂಟಾದ ಕಾರಣ ಸಾರ್ವಜನಿಕರು ಪರದಾಡಬೇಕಾಯಿತು.
ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ದೆಹಲಿ ಪೊಲೀಸರು, ಕಾನೂನು ಸುವ್ಯವಸ್ಥೆ ಕಾಪಾಡುವುದು ತಮ್ಮ ಪ್ರಮುಖ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ. ಸಾರ್ವಜನಿಕರು ಅನಧಿಕೃತ ಪ್ರತಿಭಟನೆಗಳು ಅಥವಾ ಅನುಮತಿ ಇಲ್ಲದ ಮೆರವಣಿಗೆಗಳಲ್ಲಿ ಭಾಗವಹಿಸಬಾರದು. ಕಾನೂನು ಪಾಲಿಸಿ ಪೊಲೀಸರೊಂದಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿ ಸಾರ್ವಜನಿಕ ಶಾಂತಿಗೆ ಧಕ್ಕೆ ಉಂಟುಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಈ ಘಟನೆಯಿಂದ ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವೇ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು, ನೀಟ್ ಪರೀಕ್ಷೆ ವಿಚಾರ ಮತ್ತೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ.





