ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಯಾವಾಗ ನಡೆಯಲಿದೆ ಎಂಬ ಪ್ರಶ್ನೆಗೆ ಇನ್ನೂ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಆದರೆ, ರಾಜಧಾನಿ ಬೆಂಗಳೂರಿನ ಲೋಕಭವನದಲ್ಲಿ ನಡೆಯುತ್ತಿರುವ ಸಿದ್ಧತೆಗಳು ಮಾತ್ರ ಸಚಿವ ಸಂಪುಟ ವಿಸ್ತರಣೆ ಸನ್ನಿಹಿತವಾಗಿರುವ ಸುಳಿವು ನೀಡುತ್ತಿವೆ. ಲೋಕಭವನದ ಆವರಣದಲ್ಲಿ ಕಾರ್ಯಕ್ರಮಕ್ಕೆ ಅಗತ್ಯವಿರುವ ಎಲ್ಲ ರೀತಿಯ ವ್ಯವಸ್ಥೆಗಳು ಭರದಿಂದ ನಡೆಯುತ್ತಿದೆ.
ಲೋಕಭವನದ ಮುಂಭಾಗ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದ್ದು, ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಕಾರ್ಯಕ್ರಮಕ್ಕಾಗಿ ಶಾಮಿಯಾನ, ಆಸನ ವ್ಯವಸ್ಥೆ ಸೇರಿದಂತೆ ವೇದಿಕೆ ನಿರ್ಮಾಣದ ಕೆಲಸಗಳು ನಡೆಯುತ್ತಿವೆ. ಇದರಿಂದ ಸಚಿವರ ಪ್ರಮಾಣವಚನ ಸಮಾರಂಭಕ್ಕೆ ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಆದರೆ, ಅಂತಿಮ ನಿರ್ಧಾರ ಮಾತ್ರ ಇನ್ನೂ ದೆಹಲಿಯ ಕಾಂಗ್ರೆಸ್ ಹೈಕಮಾಂಡ್ ಕೈಯಲ್ಲಿದೆ. ಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರು ಹೈಕಮಾಂಡ್ ಜೊತೆ ಮಹತ್ವದ ಸಭೆ ನಡೆಸಿ ಸಚಿವರ ಪಟ್ಟಿಗೆ ಅಂತಿಮ ಮುದ್ರೆ ಪಡೆಯಬೇಕಿದೆ. ಈ ಸಭೆಯ ನಂತರವೇ ಸಂಪುಟ ವಿಸ್ತರಣೆಯ ದಿನಾಂಕ ಅಧಿಕೃತವಾಗಿ ಪ್ರಕಟವಾಗುವ ಸಾಧ್ಯತೆ ಇದೆ.
ಮೂಲಗಳ ಪ್ರಕಾರ, ಮೊದಲಿಗೆ ಇಂದು ರಾತ್ರಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಮಹತ್ವದ ಸಭೆ ನಡೆಯಬೇಕಿತ್ತು. ಆ ಸಭೆಯಲ್ಲಿ ಸುಮಾರು 20 ಮಂದಿ ಹೊಸ ಸಚಿವರ ಪಟ್ಟಿಗೆ ಅಂತಿಮ ಒಪ್ಪಿಗೆ ದೊರೆಯಲಿದೆ ಎಂಬ ನಿರೀಕ್ಷೆ ಇತ್ತು. ಸಭೆ ಯಶಸ್ವಿಯಾಗಿ ನಡೆದಿದ್ದರೆ, ನಾಳೆಯೇ ಹೊಸ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಸುವ ಯೋಜನೆಯೂ ಇತ್ತು ಎನ್ನಲಾಗಿದೆ.
ಆದರೆ ದೆಹಲಿಯಲ್ಲಿ ನಡೆದ ರಾಜಕೀಯ ಬೆಳವಣಿಗೆಗಳಿಂದ ಈ ಪ್ರಕ್ರಿಯೆಗೆ ತಾತ್ಕಾಲಿಕ ಅಡ್ಡಿಯಾಗಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ಸೂಚಿಸಿ ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆಯ ಹಿನ್ನೆಲೆ ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರಿಂದ ಹೈಕಮಾಂಡ್ ಸಭೆ ನಿಗದಿತ ಸಮಯದ ಬದಲು ತಡವಾಗುವ ಸಾಧ್ಯತೆ ಇದೆ. ಹೀಗಾಗಿ ಸಚಿವರ ಪಟ್ಟಿಯೂ ವಿಳಂಬವಾಗಲಿದೆ ಎನ್ನಲಾಗಿದೆ.
ಹೈಕಮಾಂಡ್ ಸಭೆ ತಡರಾತ್ರಿಯಲ್ಲಿ ನಡೆದರೆ, ನಾಳೆಯೇ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆಯನ್ನು ಸಂಪೂರ್ಣವಾಗಿ ತಳ್ಳಿಹಾಕಲು ಸಾಧ್ಯವಿಲ್ಲ. ಒಂದು ವೇಳೆ ಸಭೆ ನಾಳೆಗೆ ಮುಂದೂಡಿಕೆಯಾದರೆ, ಸಚಿವ ಸಂಪುಟ ವಿಸ್ತರಣೆ ಇನ್ನೆರಡು ದಿನಗಳ ಬಳಿಕ ನಡೆಯುವ ಸಾಧ್ಯತೆ ಹೆಚ್ಚಿದೆ.





