ಬೆಂಗಳೂರು: ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Water) ಹರಿಸುವ ವಿವಾದ ಹಾಗೂ ರಾಜ್ಯದ ಹಿತರಕ್ಷಣೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಗೃಹಕಚೇರಿ ‘ಕೃಷ್ಣಾ’ದಲ್ಲಿ (Krishna) ಮಹತ್ವದ ಸರ್ವಪಕ್ಷ ಸಭೆಯು ಇಂದು ಆರಂಭವಾಗಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಈ ಉನ್ನತ ಮಟ್ಟದ ಸಭೆಯು ಕಾವೇರಿ ವಿವಾದದ ಪ್ರಸ್ತುತ ಸ್ಥಿತಿ ಮತ್ತು ಮುಂದಿನ ಕಾನೂನು ಕ್ರಮಗಳ ಕುರಿತು ನಿರ್ಣಾಯಕ ಚರ್ಚೆ ನಡೆಯುತ್ತಿದೆ.. ರಾಜ್ಯದ ಪ್ರಮುಖ ನಾಯಕರು, ಕಾನೂನು ತಜ್ಞರು, ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸುಪ್ರೀಂ ಕೋರ್ಟ್ನಲ್ಲಿ ಕರ್ನಾಟಕದ ಪರ ವಾದ ಮಂಡಿಸುತ್ತಿರುವ ಹಿರಿಯ ವಕೀಲರು ಈ ಸಭೆಯಲ್ಲಿ ಭಾಗವಹಿಸಿದ್ದಾರೆ.
ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ, ರಾಜ್ಯದ ಹಿತಾಸಕ್ತಿಗಾಗಿ ಒಂದೇ ವೇದಿಕೆಯಲ್ಲಿ ರಾಜ್ಯದ ಪ್ರಮುಖ ನಾಯಕರು ಈ ಸಭೆಯಲ್ಲಿ ಭಾಗವಹಿಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಎಂ. ವೀರಪ್ಪ ಮೊಯ್ಲಿ, ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಡಿ.ವಿ. ಸದಾನಂದಗೌಡ ಹಾಗೂ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದಾರೆ. ಕರ್ನಾಟಕದ ಪರವಾಗಿ ಒಂದೇ ಧ್ವನಿಯಲ್ಲಿ ನಿಲುವು ವ್ಯಕ್ತಪಡಿಸುವ ಕುರಿತು ಚರ್ಚೆ ನಡೆಸುತ್ತಿದ್ದಾರೆ.
ಇದರ ಜೊತೆಗೆ ಕೇಂದ್ರ ಮತ್ತು ರಾಜ್ಯ ಮಟ್ಟದ ಸಂಸದರು, ಸಚಿವರು, ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸುಪ್ರೀಂ ಕೋರ್ಟ್ನಲ್ಲಿ ಕರ್ನಾಟಕದ ಪರವಾಗಿ ವಾದ ಮಂಡಿಸುತ್ತಿರುವ ಹಿರಿಯ ವಕೀಲರ ತಂಡವೂ ಸಭೆಯಲ್ಲಿ ಪಾಲ್ಗೊಂಡಿದೆ. ಕಾನೂನು ಹೋರಾಟವನ್ನು ಮತ್ತಷ್ಟು ಬಲಪಡಿಸುವುದು, ಮುಂದಿನ ನ್ಯಾಯಾಂಗ ಪ್ರಕ್ರಿಯೆಯಲ್ಲಿ ಯಾವ ರೀತಿಯ ದಾಖಲೆಗಳು ಹಾಗೂ ವಾದಗಳನ್ನು ಮಂಡಿಸಬೇಕು ಎಂಬ ಕುರಿತು ಕಾನೂನು ತಜ್ಞರು ಸರ್ಕಾರಕ್ಕೆ ಸಲಹೆ ನೀಡುತ್ತಿದ್ದಾರೆ.
ಸಭೆಯಲ್ಲಿ ಪ್ರಮುಖವಾಗಿ ಕಾವೇರಿ ಕಣಿವೆಯ ನಾಲ್ಕು ಪ್ರಮುಖ ಜಲಾಶಯಗಳಾದ ಕೃಷ್ಣರಾಜಸಾಗರ (KRS), ಕಬಿನಿ, ಹಾರಂಗಿ ಹಾಗೂ ಹೇಮಾವತಿ ಜಲಾಶಯಗಳ ಪ್ರಸ್ತುತ ನೀರಿನ ಮಟ್ಟದ ಕುರಿತು ವಿವರವಾದ ಮಾಹಿತಿ ಮಂಡಿಸಲಾಗಿದೆ. ಮುಂಗಾರು ಮಳೆಯ ಪ್ರಮಾಣ, ಒಳಹರಿವು, ಮುಂದಿನ ತಿಂಗಳುಗಳಲ್ಲಿ ಕುಡಿಯುವ ನೀರಿನ ಬೇಡಿಕೆ, ರೈತರ ನೀರಾವರಿ ಅಗತ್ಯತೆ ಹಾಗೂ ನಗರ ಪ್ರದೇಶಗಳಿಗೆ ನೀರು ಪೂರೈಕೆಯ ಸ್ಥಿತಿಗತಿಗಳನ್ನು ಅಧಿಕಾರಿಗಳು ಅಂಕಿ-ಅಂಶಗಳೊಂದಿಗೆ ವಿವರಿಸಿದ್ದಾರೆ.
ರಾಜ್ಯದ ಹಲವೆಡೆ ಮಳೆಯ ಪ್ರಮಾಣದಲ್ಲಿ ಏರಿಳಿತ ಕಂಡುಬಂದಿರುವ ಕಾರಣ, ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಗಳನ್ನೂ ಅಧಿಕಾರಿಗಳು ಸಭೆಯ ಗಮನಕ್ಕೆ ತಂದಿದ್ದಾರೆ. ಈ ಹಿನ್ನೆಲೆ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ವಿಚಾರದಲ್ಲಿ ರಾಜ್ಯದ ವಾಸ್ತವ ಸ್ಥಿತಿಯನ್ನು ಸುಪ್ರೀಂ ಕೋರ್ಟ್ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಸಮರ್ಥವಾಗಿ ಮಂಡಿಸುವ ಅಗತ್ಯವಿದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ.
ರಾಜ್ಯದ ಹಿತಾಸಕ್ತಿಗೆ ಯಾವುದೇ ಧಕ್ಕೆಯಾಗದಂತೆ ಕಾನೂನುಬದ್ಧ ಹೋರಾಟ ಮುಂದುವರಿಸಲು ಎಲ್ಲ ರಾಜಕೀಯ ಪಕ್ಷಗಳ ಸಹಕಾರ ಪಡೆಯುವ ಉದ್ದೇಶದಿಂದಲೇ ಈ ಸರ್ವಪಕ್ಷ ಸಭೆ ಆಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.





