ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ಇದೀಗ ರಾಜ್ಯ ರಾಜಕೀಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ. ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದೆ ಎಂದು ಆರೋಪಿಸಿರುವ ಬಿಜೆಪಿ-ಜೆಡಿಎಸ್ ನಿಯೋಗ, ಅವರ ರಾಜೀನಾಮೆಯನ್ನು ಅಂಗೀಕರಿಸದಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದೆ.
ಬಿಜೆಪಿ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹಾಗೂ ಜೆಡಿಎಸ್ ನಾಯಕ ಶರವಣ ಅವರ ನೇತೃತ್ವದಲ್ಲಿ ಬಿಜೆಪಿ-ಜೆಡಿಎಸ್ ನಿಯೋಗ ಭಾನುವಾರ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿದ್ದು, ಈ ವೇಳೆ ಹೊರಟ್ಟಿ ಅವರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಅಂಶಗಳನ್ನು ರಾಜ್ಯಪಾಲರ ಗಮನಕ್ಕೆ ತಂದ ನಿಯೋಗ, ರಾಜೀನಾಮೆಯನ್ನು ಅಂಗೀಕರಿಸಬಾರದು ಎಂದು ಮನವಿ ಸಲ್ಲಿಸಿದೆ.
ಸದನದ ನಡಾವಳಿ ಹಾಗೂ ನಿಯಮಗಳ ಪ್ರಕಾರ ಬಸವರಾಜ ಹೊರಟ್ಟಿ ಅವರು ರಾಜೀನಾಮೆ ಸಲ್ಲಿಸಿಲ್ಲ. ಹೀಗಾಗಿ ಅವರ ರಾಜೀನಾಮೆಯನ್ನು ಅಂಗೀಕರಿಸುವ ಮುನ್ನ ಈ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಬೇಕು ಎಂದು ನಿಯೋಗ ಒತ್ತಾಯಿಸಿದೆ. ಅಲ್ಲದೆ, ಕಾಂಗ್ರೆಸ್ ಲೆಟರ್‌ಹೆಡ್‌ನಲ್ಲಿ ಸಭಾಧ್ಯಕ್ಷರು ಹಾಗೂ ಸಭಾಪತಿಗಳ ಹೆಸರುಗಳನ್ನು ಆಯ್ಕೆ ಮಾಡಿರುವ ವಿಚಾರದ ಬಗ್ಗೆಯೂ ರಾಜ್ಯಪಾಲರಿಗೆ ದೂರು ನೀಡಲಾಗಿದೆ.
ಈ ನಡುವೆ, ಬಸವರಾಜ ಹೊರಟ್ಟಿ ಅವರೇ ರಾಜ್ಯಪಾಲರಿಗೆ ಪತ್ರ ಬರೆದು ತಮ್ಮ ರಾಜೀನಾಮೆ ವಿಚಾರದ ಕುರಿತು ಸ್ಪಷ್ಟನೆ ನೀಡಿದ್ದಾರೆ. ಆಗಸ್ಟ್ 7ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ ಕೆಲ ನಾಯಕರು ತಮ್ಮ ಕೊಠಡಿಗೆ ಬಂದಿದ್ದರು. ಈ ವೇಳೆ ಅಂದೇ ರಾಜೀನಾಮೆ ನೀಡಬೇಕು ಎಂದು ತಮ್ಮ ಮೇಲೆ ಒತ್ತಡ ಹೇರಲಾಗಿತ್ತು ಎಂದು ಹೊರಟ್ಟಿ ಪತ್ರದಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.
ನಾಯಕರು ಒತ್ತಡ ಹೇರಿದ ಹಿನ್ನೆಲೆಯಲ್ಲಿ ತಾವು ರಾಜೀನಾಮೆ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ಹೀಗಾಗಿ ತಮ್ಮಿಂದ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದೆ ಎಂಬ ಅಂಶವನ್ನು ರಾಜ್ಯಪಾಲರಿಗೆ ಸಲ್ಲಿಸಿರುವ ಪತ್ರದಲ್ಲಿ ಹೊರಟ್ಟಿ ವಿವರಿಸಿದ್ದಾರೆ.
ಹೊರಟ್ಟಿ ಅವರ ರಾಜೀನಾಮೆ ವಿಚಾರ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಬಿಜೆಪಿ ಮತ್ತು ಜೆಡಿಎಸ್ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿವೆ. ಸಭಾಪತಿ ಸ್ಥಾನಕ್ಕೆ ಸಂಬಂಧಿಸಿದಂತೆ ನಿಯಮಗಳನ್ನು ಪಾಲಿಸಲಾಗಿದೆಯೇ ಎಂಬ ಪ್ರಶ್ನೆಯನ್ನೂ ಪ್ರತಿಪಕ್ಷಗಳು ಎತ್ತಿವೆ.
ಒಂದೆಡೆ ಹೊರಟ್ಟಿ ಅವರ ರಾಜೀನಾಮೆ ಸ್ವಯಂಪ್ರೇರಿತವೇ ಅಥವಾ ಒತ್ತಡದಿಂದ ಪಡೆದದ್ದೇ ಎಂಬ ಚರ್ಚೆ ನಡೆಯುತ್ತಿದ್ದರೆ, ಮತ್ತೊಂದೆಡೆ ರಾಜೀನಾಮೆ ಅಂಗೀಕಾರದ ವಿಚಾರ ರಾಜ್ಯಪಾಲರ ಮುಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.





