ಬೆಂಗಳೂರು, ಆಗಸ್ಟ್ 11: ಕಳೆದ ಕೆಲವು ದಿನಗಳಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಅಬ್ಬರಿಸಿದೆ. ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಇದರೊಂದಿಗೆ ಕೆಲವು ಒಳನಾಡು ಜಿಲ್ಲೆಗಳಲ್ಲೂ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಆಗಸ್ಟ್ 11ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಜೊತೆಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಹೀಗಾಗಿ ಕರಾವಳಿ ಭಾಗದ ಜನರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವುದು ಸೂಕ್ತವಾಗಿದೆ.
ಉತ್ತರ ಒಳನಾಡಿನಲ್ಲೂ ಮಳೆ ಸಾಧ್ಯತೆ
ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ಮುಂದುವರಿದಿದೆ. ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕೊಪ್ಪಳ, ಬಾಗಲಕೋಟೆ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ಈ ಪ್ರದೇಶಗಳಲ್ಲೂ ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಮಳೆ
ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಆಗಸ್ಟ್ 11ರಂದು ಮಳೆಯ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಬಹುದು.
ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮಳೆಯ ಸಂದರ್ಭದಲ್ಲಿ ಗಾಳಿಯ ವೇಗವೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಆಗಸ್ಟ್ 12ರಂದು ಹೇಗಿರಲಿದೆ ಹವಾಮಾನ?
ನಾಳೆ, ಆಗಸ್ಟ್ 12ರಂದು ಕೂಡ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡಿನ ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕೊಪ್ಪಳ, ಬಾಗಲಕೋಟೆ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗಬಹುದು.





