ಬೆಂಗಳೂರು: ರಾಜಧಾನಿಯ ಕಂಠೀರವ ಸ್ಟುಡಿಯೋ ಮುಂಭಾಗ ಹಾಗೂ ಡಾ. ರಾಜ್ಕುಮಾರ್ ಪುಣ್ಯಭೂಮಿ ಬಳಿ ನಡೆಯುತ್ತಿದ್ದ ರಸ್ತೆ ಮತ್ತು ಅಂಡರ್‌ಪಾಸ್ ನಿರ್ಮಾಣ ಕಾಮಗಾರಿ ವೇಳೆ ಭೀಕರ ದುರಂತವೊಂದು ಸಂಭವಿಸಿದೆ. ಅಂಡರ್‌ಪಾಸ್ ನಿರ್ಮಾಣಕ್ಕಾಗಿ ತೋಡಲಾಗಿದ್ದ ಬೃಹತ್ ಗುಂಡಿಯ ಮಣ್ಣಿನ ತಡೆಗೋಡೆ ಏಕಾಏಕಿ ಕುಸಿದು ಬಿದ್ದು, iಬ್ಬರು ಕಾರ್ಮಿಕ ಮೃತಪಟ್ಟಿದ್ದು, ಹಲವು ಕಾರ್ಮಿಕರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ.
ಕಾಮಗಾರಿ ವೇಳೆ ದುರಂತ
ಬೆಂಗಳೂರಿನ ಪ್ರಮುಖ ಸ್ಥಳಗಳಲ್ಲೊಂದಾದ ಕಂಠೀರವ ಸ್ಟುಡಿಯೋ ಮುಂಭಾಗದಲ್ಲಿ ಅಂಡರ್‌ಪಾಸ್ ನಿರ್ಮಾಣ ಕಾಮಗಾರಿಗಾಗಿ ಸುಮಾರು 20 ಅಡಿ ಆಳದವರೆಗೆ ಮಣ್ಣನ್ನು ತೋಡಲಾಗಿತ್ತು. ಇಂದು ಎಂದಿನಂತೆ ಕಾರ್ಮಿಕರು ಕಾಮಗಾರಿಯಲ್ಲಿ ತೊಡಗಿಸಿಕೊಂಡಿದ್ದಾಗ, ಮೇಲಿನಿಂದ ಏಕಾಏಕಿ ಮಣ್ಣಿನ ತಡೆಗೋಡೆ ಕುಸಿದು ಬಿದ್ದಿದೆ. ಈ ವೇಳೆ ಸ್ಥಳದಲ್ಲಿದ್ದ ಐವರು ಕಾರ್ಮಿಕರು ಮಣ್ಣಿನ ಅಡಿಯಲ್ಲಿ ಸಿಲುಕಿ ಉಸಿರಾಡಲಾಗದೆ ನರಳಾಡಿದ್ದಾರೆ.
ಘಟನಾ ಸ್ಥಳಕ್ಕೆ ತಕ್ಷಣವೇ ಸ್ಥಳೀಯ ಪೊಲೀಸರು ಹಾಗೂ ಹೆಚ್ಚುವರಿ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದಾರೆ. ಸ್ಥಳದಲ್ಲಿದ್ದ ಸಿಬ್ಬಂದಿ ಹಾಗೂ ಸಾರ್ವಜನಿಕರ ಸಮಯಪ್ರಜ್ಞೆಯಿಂದ ಮಣ್ಣಿನಡಿಯಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ಆದರೆ, ಓರ್ವ ಕಾರ್ಮಿಕ ಮಣ್ಣಿನ ಅಡಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಿಸುವ ಕಾರ್ಯ ಇನ್ನೂ ಮುಂದುವರಿದಿದೆ.
ರಕ್ಷಣಾ ಕಾರ್ಯಾಚರಣೆ ತೀವ್ರ
ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಯಂತ್ರೋಪಕರಣಗಳ ನೆರವಿನಿಂದ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ. ಮಣ್ಣಿನಡಿಯಲ್ಲಿ ಇನ್ನು ಯಾರಾದರೂ ಸಿಲುಕಿದ್ದಾರೆಯೇ ಎಂಬ ಶಂಕೆಯ ಮೇಲೆ ವಿಶೇಷ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ಗಂಭೀರವಾಗಿ ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಿಂದಾಗಿ ಆ ಪ್ರದೇಶದಲ್ಲಿ ಸಂಚಾರ ವ್ಯತ್ಯಯ ಉಂಟಾಗಿದ್ದು, ಪೊಲೀಸರು ವಾಹನಗಳನ್ನು ಬೇರೆ ಮಾರ್ಗಗಳಿಗೆ ನಿರ್ದೇಶಿಸಿದ್ದಾರೆ.
ಮೃತ ಕಾರ್ಮಿಕನ ಕುಟುಂಬಕ್ಕೆ ಸಂತಾಪ
ಮೃತ ಕಾರ್ಮಿಕನ ಕುಟುಂಬಕ್ಕೆ ಧನಸಹಾಯ ಮತ್ತು ಪರಿಹಾರ ನೀಡಬೇಕೆಂದು ಹಲವು ಸಂಘಟನೆಗಳು ಆಗ್ರಹಿಸಿವೆ. ಕಾಮಗಾರಿ ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ ಕೇಳಿಬಂದಿದೆ.





