ಬೀದರ್ (ಆ. 12): ತೆಲಂಗಾಣದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬೀದರ್ ಮೂಲದ ಆರು ಜನರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಈ ಹಣವನ್ನು ಒದಗಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಕೂಲಿಕೆಲಸಕ್ಕಾಗಿ ತೆಲಂಗಾಣದ ಜಹೀರಾಬಾದ್‌ಗೆ ತೆರಳಿದ್ದ ಬೀದರ್ ತಾಲೂಕಿನ ರಾಜಗೀರಾ ಗ್ರಾಮದ ಮಹಿಳೆಯರು ಕೆಲಸ ಮುಗಿಸಿಕೊಂಡು ಆಟೋದಲ್ಲಿ ಮನೆಗೆ ಮರಳುತ್ತಿದ್ದ ವೇಳೆ ಮಂಗಳವಾರ ಭೀಕರ ಅಪಘಾತ ಸಂಭವಿಸಿತ್ತು. ಜಹೀರಾಬಾದ್ ಸಮೀಪದ ಮೊಗುಡಂಪಳ್ಳಿ ಮಂಡಲದ ಸತ್ವಾರ್ ಗ್ರಾಮದ ಹೊರವಲಯದಲ್ಲಿ ಟ್ಯಾಂಕರ್ ಲಾರಿ ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿದ್ದರು.
ಈ ದುರ್ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಈಶ್ವರ್ ಖಂಡ್ರೆ, ಮೃತರ ಕುಟುಂಬಗಳೊಂದಿಗೆ ಸರ್ಕಾರ ನಿಂತಿದೆ ಎಂದು ಭರವಸೆ ನೀಡಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಅವರೊಂದಿಗೆ ಮಾತನಾಡಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮೃತ ಆರು ಜನರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಮೃತರ ಕುಟುಂಬಗಳಿಗೆ ವೈಯಕ್ತಿಕವಾಗಿಯೂ ನೆರವು ನೀಡುವುದಾಗಿ ಸಚಿವರು ಹೇಳಿದ್ದಾರೆ. ಅಲ್ಲದೆ, ಮೃತರ ಮಕ್ಕಳಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿರುವವರಿಗೆ ಸರ್ಕಾರದ ನಿಯಮಾನುಸಾರ ಸರ್ಕಾರಿ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಮೃತರ ಮನೆಗಳಿಗೆ ಭೇಟಿ ನೀಡುವುದಾಗಿ ಭರವಸೆ
ಅಪಘಾತದ ಹಿನ್ನೆಲೆಯಲ್ಲಿ ಮೃತರ ಮನೆಗಳಿಗೆ ಭೇಟಿ ನೀಡಿ ಕುಟುಂಬಗಳ ಸಮಸ್ಯೆಗಳನ್ನು ಆಲಿಸುವುದಾಗಿ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಸರ್ಕಾರದಿಂದ ಸಿಗಬೇಕಾದ ಎಲ್ಲ ರೀತಿಯ ಪರಿಹಾರ ಹಾಗೂ ನೆರವನ್ನು ಕುಟುಂಬಗಳಿಗೆ ತಲುಪಿಸುವ ಕೆಲಸ ಮಾಡಲಾಗುವುದು ಎಂದಿದ್ದಾರೆ.
ಇದೇ ವೇಳೆ, ಒಂದು ಆಟೋದಲ್ಲಿ 15ರಿಂದ 20 ಮಂದಿ ಪ್ರಯಾಣಿಸುವುದು ಅತ್ಯಂತ ಅಪಾಯಕಾರಿ ಮತ್ತು ತಪ್ಪು ಎಂದು ಸಚಿವರು ಹೇಳಿದ್ದಾರೆ. ಪ್ರಯಾಣಿಕರ ಸುರಕ್ಷತೆ ಹಾಗೂ ರಸ್ತೆ ನಿಯಮಗಳ ಪಾಲನೆಗೆ ಹೆಚ್ಚಿನ ಗಮನ ನೀಡಬೇಕಾದ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.
ಈ ಅಪಘಾತದಲ್ಲಿ ಮೃತಪಟ್ಟ ಆರು ಮಂದಿ ಬೀದರ್ ತಾಲೂಕಿನ ರಾಜಗೀರಾ ಗ್ರಾಮದವರು ಎಂದು ತಿಳಿದುಬಂದಿದೆ. ಕೂಲಿ ಕೆಲಸಕ್ಕಾಗಿ ಮಹಿಳೆಯರು ಜಹೀರಾಬಾದ್‌ಗೆ ತೆರಳಿದ್ದರು. ಕೆಲಸ ಮುಗಿಸಿ ವಾಪಸ್ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಒಂದೇ ಗ್ರಾಮದ ಆರು ಮಂದಿ ಮೃತಪಟ್ಟಿರುವುದು ಗ್ರಾಮಸ್ಥರು ಹಾಗೂ ಕುಟುಂಬಸ್ಥರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.
ಅಪಘಾತದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ಸರ್ಕಾರ ಅಗತ್ಯ ನೆರವು ನೀಡಲಿದೆ ಎಂದು ಸಚಿವರು ಮತ್ತೊಮ್ಮೆ ಭರವಸೆ ನೀಡಿದ್ದಾರೆ.





