ಹೊಸಪೇಟೆ, ಆ.16: ಇತ್ತೀಚಿನ ದಿನಗಳಲ್ಲಿ ಕೊಲೆ, ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದೆ. ಕೆಲವೊಂದು ಅನುಮಾನಗಳು ಕೊಲೆಯಲ್ಲಿ ಅಂತ್ಯವಾಗುವ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಶೀಲ ಶಂಕಿಸಿ ಪತ್ನಿಯ ಕೊಲೆ ಎಂಬ ಸುದ್ದಿಗಳನ್ನು ನಾವು ಅಧಿಕವಾಗಿ ಕೇಳುತ್ತಿದ್ದೇವೆ. ಅಂತಹದ್ದೇ ಘಟನೆ ಈಗ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಹೊಸಪೇಟೆ ತಾಲೂಕಿನ ಭುವನಹಳ್ಳಿ ಗ್ರಾಮದಲ್ಲಿ ಶೀಲ ಶಂಕಿಸಿ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಪ್ರಕರಣ ಸಂಬಂಧ ಆರೋಪಿಯಾದ ಪತಿಯನ್ನು ಹೊಸಪೇಟೆ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೃತ ಮಹಿಳೆಯನ್ನು ಶಶಿಕಲಾ (35) ಎಂದು ಗುರುತಿಸಲಾಗಿದ್ದು, ಆರೋಪಿ ಪತಿ ಬಸವರಾಜ್ (36) ಎನ್ನಲಾಗಿದೆ. ದಾಂಪತ್ಯ ಜೀವನದಲ್ಲಿ ಶೀಲದ ವಿಚಾರವಾಗಿ ಆಗಾಗ್ಗೆ ಜಗಳ ನಡೆಯುತ್ತಿತ್ತು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಇಂದು ಭಾನುವಾರ ಬೆಳಿಗ್ಗೆ ಮನೆದಲ್ಲೇ ಇಬ್ಬರ ನಡುವೆ ಈ ಕುರಿತಂತೆ ವಾಗ್ವಾದ ನಡೆದಿದ್ದು ಎನ್ನಲಾಗಿದೆ, ಇದೇ ವಿಚಾರಕ್ಕೆ ಆಕ್ರೋಶಗೊಂಡ ಬಸವರಾಜ್ ಕೊಡಲಿಯಿಂದ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ತೀವ್ರ ರಕ್ತ ಸ್ರಾವದಿಂದ ಶಶಿಕಲಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹೊಸಪೇಟೆ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಆರೋಪಿ ಬಸವರಾಜ್‌ನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
ಈ ಸಂಬಂಧ ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಘಟನೆಯ ನಿಖರ ಕಾರಣ ಹಾಗೂ ಇತರೆ ಹಿನ್ನೆಲೆ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.





