ಇಂಫಾಲ್ ಆ.27: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಬಂಡುಕೋರರು ವಾಹನವನ್ನು ಗುರಿಯಾಗಿಸಿಕೊಂಡು ಹೊಂಚು ಹಾಕಿ ದಾಳಿ ನಡೆಸಿದ್ದು, ಘಟನೆಯಲ್ಲಿ ನಾಲ್ವರು ನಾಗರಿಕರು ಮೃತಪಟ್ಟಿದ್ದಾರೆ. ಮತ್ತೋರ್ವ ವ್ಯಕ್ತಿ ನಾಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ನಾಲ್ವರು ನಾಗರಿಕರು ಸಾವು
ಮಕ್ಯೂಯಿ ಆಶಾಂಗ್ ಮತ್ತು ಥಬಂಬಾ ನಾಗಾ ನಡುವಿನ ನಿರ್ಜನ ಪ್ರದೇಶದಲ್ಲಿ ಈ ದಾಳಿ ನಡೆದಿದೆ. ಮೃತಪಟ್ಟ ನಾಲ್ವರೂ ಲಿಯಾಂಗ್‌ಮೈ ನಾಗಾ ಸಮುದಾಯಕ್ಕೆ ಸೇರಿದವರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದಾಳಿಯ ತೀವ್ರತೆಗೆ ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತದೇಹಗಳನ್ನು ಸೇನಾಪತಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆಯ ಬಳಿಕ ನಾಗಾ ಸಮುದಾಯದ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ದಾಳಿಯನ್ನು ಖಂಡಿಸಿರುವ ನಾಗಾ ಪೀಪಲ್ಸ್ ಆರ್ಗನೈಸೇಷನ್, ಸೇನಾಪತಿ ಜಿಲ್ಲಾ ಕೇಂದ್ರದಲ್ಲಿರುವ ಅಂಗಡಿ-ಮುಂಗಟ್ಟುಗಳು ಹಾಗೂ ವಾಣಿಜ್ಯ ಸಂಸ್ಥೆಗಳನ್ನು ಬಂದ್ ಮಾಡುವಂತೆ ಕರೆ ನೀಡಿದೆ. ಇದರಿಂದ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ವಾಹನದ ಮೇಲೆ ದಾಳಿ ನಡೆಸಿದವರು ಯಾರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ದಾಳಿಯ ಹಿಂದಿನ ಉದ್ದೇಶವೇನು, ಯಾವ ಕಾರಣಕ್ಕಾಗಿ ವಾಹನವನ್ನು ಗುರಿಯಾಗಿಸಲಾಯಿತು ಹಾಗೂ ನಾಪತ್ತೆಯಾಗಿರುವ ವ್ಯಕ್ತಿಯ ಸ್ಥಿತಿ ಏನು ಎಂಬುದರ ಕುರಿತು ಭದ್ರತಾ ಪಡೆಗಳು ತನಿಖೆ ನಡೆಸುತ್ತಿವೆ. ದಾಳಿಯ ಹಿನ್ನೆಲೆ ಮತ್ತು ಸಂಬಂಧಿತ ವ್ಯಕ್ತಿಗಳ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಅಕ್ಟೋಬರ್‌ನಲ್ಲಿ ಅಮಿತ್ ಶಾ ಮಣಿಪುರ ಭೇಟಿ
ಮಣಿಪುರದಲ್ಲಿ ಮತ್ತೆ ಹಿಂಸಾಚಾರದ ಘಟನೆ ವರದಿಯಾಗಿರುವ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಕ್ಟೋಬರ್ ತಿಂಗಳ ಮೊದಲ ವಾರದಲ್ಲಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ತಿಳಿಸಿದೆ ಎಂದು ವರದಿಯಾಗಿದೆ.
ನವದೆಹಲಿಯಲ್ಲಿ ನಿನ್ನೆ ಬುಧವಾರ ಮಣಿಪುರ ಮುಖ್ಯಮಂತ್ರಿ ವೈ. ಖೇಮಚಂದ್ ಸಿಂಗ್ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಅಮಿತ್ ಶಾ ಅವರು ರಾಜ್ಯ ಪ್ರವಾಸದ ಕುರಿತು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿನ ಭದ್ರತಾ ಪರಿಸ್ಥಿತಿ ಹಾಗೂ ಮುಂದಿನ ಕ್ರಮಗಳ ಕುರಿತು ಈ ಭೇಟಿಯಲ್ಲಿ ಮಹತ್ವದ ಚರ್ಚೆ ನಡೆಯುವ ಸಾಧ್ಯತೆಯಿದೆ.
ನಾಲ್ವರು ನಾಗರಿಕರ ಹತ್ಯೆ ಹಾಗೂ ಓರ್ವ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ಮಣಿಪುರದಲ್ಲಿ ಭದ್ರತಾ ಪರಿಸ್ಥಿತಿ ಕುರಿತು ಮತ್ತೊಮ್ಮೆ ಆತಂಕ ಮೂಡಿಸಿದೆ.





