ಗಾಂಧಿನಗರ: ಗುಜರಾತ್‌ನ ಗಾಂಧಿನಗರದ ಕುಡಾಸನ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ವಾಣಿಜ್ಯ ಕಟ್ಟಡದ ಒಂದು ಭಾಗ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ ಅಡಿಯಲ್ಲಿ ಸಿಲುಕಿದ್ದ ಎಲ್ಲಾ ಕಾರ್ಮಿಕರನ್ನು ರಕ್ಷಣಾ ಸಿಬ್ಬಂದಿ ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬುಧವಾರ ರಾತ್ರಿ ಸುಮಾರು 9.30ರ ವೇಳೆಗೆ ‘ಬಾಸ್ಕಿ ದಿ ಎಂಪೈರ್’ ಹೆಸರಿನ ವಾಣಿಜ್ಯ ಕಟ್ಟಡದ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಮೆಟಲ್ ಸ್ಲಾಬ್ ಹಾಗೂ ಸೆಂಟ್ರಿಂಗ್‌ಗೆ ಬಳಸಲಾಗಿದ್ದ ಆಧಾರ ಸ್ತಂಭಗಳು ಹಠಾತ್ತನೆ ಕುಸಿದುಬಿದ್ದಿವೆ. ಇದರಿಂದ ಕಾಮಗಾರಿ ಸ್ಥಳದಲ್ಲಿದ್ದ ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು.
ತಕ್ಷಣ ಕಾರ್ಯಾಚರಣೆಗೆ ಇಳಿದ ರಕ್ಷಣಾ ತಂಡಗಳು
ಕಟ್ಟಡ ಕುಸಿದ ಮಾಹಿತಿ ಲಭ್ಯವಾಗುತ್ತಿದ್ದಂತೆ ಸ್ಥಳೀಯ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿದರು. ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ NDRF ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ SDRF ತಂಡಗಳನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದರು.
ಶಿಥಿಲಾವಶೇಷಗಳ ನಡುವೆ ಕಾರ್ಮಿಕರು ಸಿಲುಕಿರುವುದರಿಂದ ಅತ್ಯಂತ ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಸಲಾಯಿತು. ಕ್ರೇನ್‌ಗಳ ಸಹಾಯದಿಂದ ಭಾರವಾದ ಲೋಹದ ಸ್ಲಾಬ್‌ಗಳನ್ನು ತೆರವುಗೊಳಿಸಲಾಯಿತು. ಅಗತ್ಯವಿರುವ ಕಡೆಗಳಲ್ಲಿ ಪ್ಲಾಸ್ಮಾ ಹಾಗೂ ಗ್ಯಾಸ್ ಕಟರ್‌ಗಳನ್ನು ಬಳಸಿ ಲೋಹದ ರಚನೆಗಳನ್ನು ಕತ್ತರಿಸಿ ಕಾರ್ಮಿಕರನ್ನು ಹಂತ ಹಂತವಾಗಿ ಹೊರತೆಗೆಯಲಾಯಿತು.
ದೀರ್ಘಕಾಲದ ರಕ್ಷಣಾ ಕಾರ್ಯಾಚರಣೆಯ ಬಳಿಕ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಯಿತು. ರಕ್ಷಣಾ ಕಾರ್ಯಾಚರಣೆ ವೇಳೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಸ್ಥಳಕ್ಕೆ ಸಚಿವರ ಭೇಟಿ
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗುಜರಾತ್ ಉಪಮುಖ್ಯಮಂತ್ರಿ ಹರ್ಷ ಸಂಘವಿ, ಆರೋಗ್ಯ ಸಚಿವ ಪ್ರಫುಲ್ ಪನ್ನೇರಿಯಾ ಹಾಗೂ ಗಾಂಧಿನಗರ ಶಾಸಕಿ ರೀಟಾಬೆನ್ ಪಟೇಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ರಕ್ಷಣಾ ಕಾರ್ಯಾಚರಣೆಯ ಪ್ರಗತಿ ಹಾಗೂ ಕಾರ್ಮಿಕರ ಸ್ಥಿತಿಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಹರ್ಷ ಸಂಘವಿ, ಶಿಥಿಲಾವಶೇಷಗಳ ಅಡಿಯಲ್ಲಿ ಸಿಲುಕಿದ್ದ ಎಲ್ಲಾ ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಜೀವಹಾನಿಯಾಗಿಲ್ಲ ಎಂದು ತಿಳಿಸಿದ್ದಾರೆ.
15 ಕಾರ್ಮಿಕರ ರಕ್ಷಣೆ
ಅಧಿಕಾರಿಗಳ ಮಾಹಿತಿ ಪ್ರಕಾರ, ಘಟನಾ ಸ್ಥಳದಿಂದ ಒಟ್ಟು 15 ಕಾರ್ಮಿಕರನ್ನು ರಕ್ಷಿಸಲಾಗಿದೆ. ಅವರಲ್ಲಿ 12 ಮಂದಿಯನ್ನು ಹೆಚ್ಚಿನ ಚಿಕಿತ್ಸೆ ಮತ್ತು ವೈದ್ಯಕೀಯ ತಪಾಸಣೆಗಾಗಿ ಗಾಂಧಿನಗರದ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಮೂವರು ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.





