ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಬೆಂಗಳೂರಿನ ಜನತೆಗೆ ತಡರಾತ್ರಿ ಸುರಿದ ಭಾರಿ ಮಳೆ ಕೊಂಚ ನೆಮ್ಮದಿ ನೀಡಿದೆ. ನಗರದ ಹಲವು ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಕೆಲವೆಡೆ ರಸ್ತೆಗಳ ಮೇಲೆ ನೀರು ನಿಂತು ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು. ನಗರದಲ್ಲಿ ಮಳೆಯ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಹಲವು ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿಧಾನಗೊಂಡಿತ್ತು.
ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ಹವಾಮಾನ ವ್ಯವಸ್ಥೆಯ ಪ್ರಭಾವದಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಬೆಂಗಳೂರಿನಲ್ಲೂ ಮುಂದಿನ ದಿನಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಮಳೆಯ ಮುನ್ಸೂಚನೆ ಇದೆ. ರಾಜ್ಯದಲ್ಲಿ ಸೆಪ್ಟೆಂಬರ್ 20ರಿಂದ 24ರವರೆಗೆ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಗರದ ಹಲವು ಪ್ರದೇಶಗಳಲ್ಲಿ ಮಳೆ
ಬೆಂಗಳೂರಿನ ಶಾಂತಿನಗರ, ವಸಂತನಗರ, ಕಾರ್ಪೊರೇಷನ್ ಪ್ರದೇಶ, ಮೆಜೆಸ್ಟಿಕ್, ಕೋರಮಂಗಲ, ಸಿಟಿ ಮಾರ್ಕೆಟ್, ಮಲ್ಲೇಶ್ವರಂ, ಯಶವಂತಪುರ, ಜಯನಗರ, ವಿಜಯನಗರ, ಜೆ.ಪಿ.ನಗರ, ರಾಜಾಜಿನಗರ, ಚಂದ್ರಾಲೇಔಟ್, ನಾಗರಬಾವಿ, ಸುಂಕದಕಟ್ಟೆ, ಕಾಮಾಕ್ಷಿಪಾಳ್ಯ, ಬಸವೇಶ್ವರನಗರ ಹಾಗೂ ಹೆಬ್ಬಾಳ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ.
ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು, ರಸ್ತೆಗಳಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಮಳೆಯ ನಡುವೆಯೇ ವಾಹನ ಸವಾರರು ನಿಧಾನವಾಗಿ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಇಂದೂ ಮಳೆಯ ಸಾಧ್ಯತೆ
ಬೆಂಗಳೂರಿನಲ್ಲಿ ಮಳೆಯ ಪ್ರಮಾಣದಲ್ಲಿ ತುಸು ಇಳಿಕೆಯಾಗಿದ್ದರೂ, ಭಾನುವಾರ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆ ಅಥವಾ ತುಂತುರು ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಕನಿಷ್ಠ ತಾಪಮಾನ ಸುಮಾರು 21 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್‌ನ ಆಸುಪಾಸಿನಲ್ಲಿ ಇರಬಹುದು.
ಮಂಗಳವಾರದಿಂದ ಮಳೆ ಮತ್ತಷ್ಟು ಚುರುಕು?
ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ವಾಯುಭಾರ ಕುಸಿತದ ಪ್ರದೇಶ ಮುಂದಿನ ದಿನಗಳಲ್ಲಿ ಬಲಗೊಳ್ಳುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯ ಪ್ರಕಾರ, ಈ ವ್ಯವಸ್ಥೆ ಪಶ್ಚಿಮ-ವಾಯವ್ಯ ದಿಕ್ಕಿನಲ್ಲಿ ಚಲಿಸಿ ಡಿಪ್ರೆಶನ್ ಆಗಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಬಳಿಕ ದಕ್ಷಿಣ ಒಡಿಶಾ ಮತ್ತು ಉತ್ತರ ಆಂಧ್ರಪ್ರದೇಶ ಕರಾವಳಿ ಭಾಗದತ್ತ ಸಾಗುವ ಮುನ್ಸೂಚನೆ ಇದೆ.
ಈ ಹವಾಮಾನ ವ್ಯವಸ್ಥೆಯಿಂದ ಕರ್ನಾಟಕದತ್ತ ತೇವಾಂಶದ ಹರಿವು ಹೆಚ್ಚಾಗುವ ಸಾಧ್ಯತೆ ಇದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗಬಹುದು.
ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಮುನ್ನೆಚ್ಚರಿಕಾ ಕ್ರಮವಾಗಿ ಕರಾವಳಿ ಕರ್ನಾಟಕದ ಜಿಲ್ಲೆಗಳು ಸೇರಿದಂತೆ ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ ಭಾಗದಲ್ಲೂ ಸೆಪ್ಟೆಂಬರ್ 20 ಮತ್ತು 21ರಂದು ಮಳೆಯ ಸಾಧ್ಯತೆ ಇದ್ದು, ಕೆಲವೆಡೆ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ.
ಹೀಗಾಗಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳ ಜನರು ಮುಂದಿನ ಕೆಲವು ದಿನಗಳ ಕಾಲ ಹವಾಮಾನ ಇಲಾಖೆಯ ಮುನ್ಸೂಚನೆ ಗಮನಿಸಿ, ಗುಡುಗು-ಸಿಡಿಲು ಹಾಗೂ ಬಲವಾದ ಗಾಳಿಯ ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ.





