ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕು ಕೊನೆಗೂ ತೀವ್ರ ಬರ ಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಸರ್ಕಾರದ ನಿರ್ಧಾರದಿಂದ ಸಂತಸಗೊಂಡಿರುವ ಸ್ಥಳೀಯರು ಹಾಗೂ ಶಾಸಕ ಬಿ. ದೇವೇಂದ್ರಪ್ಪ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.
ಜಗಳೂರು ಪಟ್ಟಣದ ಮಹಾತ್ಮ ಗಾಂಧಿ ಸರ್ಕಲ್ ಬಳಿ ಅಭಿಮಾನಿಗಳು ಹಾಗೂ ಸ್ಥಳೀಯರು ಜಮಾಯಿಸಿ ಪಟಾಕಿ ಸಿಡಿಸಿ, ಸಂಭ್ರಮಿಸಿದರು. ಈ ವೇಳೆ ಜಗಳೂರು ಶಾಸಕ ಬಿ. ದೇವೇಂದ್ರಪ್ಪ ಅವರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತು.
ಶಾಸಕರು ಕಾರಿನಿಂದ ಇಳಿಯುತ್ತಿದ್ದಂತೆ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಜೈಕಾರ ಕೂಗಿ ಸ್ವಾಗತಿಸಿದರು. ಬಳಿಕ ಶಾಸಕರಿಗೆ ಡೊಳ್ಳು ಬಾರಿಸಿ, ಹೂವಿನ ಹಾರ ಹಾಕಿ ಗೌರವ ಸಲ್ಲಿಸಲಾಯಿತು. ಶಾಸಕರ ಸುತ್ತಲೂ ಸೇರಿದ್ದ ಅಭಿಮಾನಿಗಳು ಘೋಷಣೆಗಳನ್ನು ಕೂಗಿ ತಮ್ಮ ಸಂತಸ ವ್ಯಕ್ತಪಡಿಸಿದರು.
ಜಗಳೂರು ತಾಲೂಕು ತೀವ್ರ ಬರ ಪಟ್ಟಿಗೆ ಸೇರ್ಪಡೆಯಾಗಬೇಕೆಂದು ರೈತರು ಹಾಗೂ ಸ್ಥಳೀಯರು ಹಲವು ದಿನಗಳಿಂದ ಒತ್ತಾಯಿಸುತ್ತಿದ್ದರು. ಮಳೆಯ ಕೊರತೆ ಹಾಗೂ ಬರ ಪರಿಸ್ಥಿತಿಯಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ತಾಲೂಕನ್ನು ತೀವ್ರ ಬರ ಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸುವಂತೆ ಸರ್ಕಾರದ ಮೇಲೆ ಒತ್ತಡವೂ ಇತ್ತು.
ಈ ಹಿಂದೆ ಜಗಳೂರು ತಾಲೂಕು ಬರ ಪಟ್ಟಿಯಿಂದ ಕೈಬಿಟ್ಟಿದ್ದ ಹಿನ್ನೆಲೆಯಲ್ಲಿ ರೈತರು ಹಾಗೂ ವಿವಿಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು. ತಾಲೂಕಿನಲ್ಲಿ ಬರ ಪರಿಸ್ಥಿತಿಯ ವಾಸ್ತವಿಕ ಚಿತ್ರಣವನ್ನು ಸರ್ಕಾರ ಪರಿಗಣಿಸಬೇಕು ಎಂದು ಆಗ್ರಹಿಸಿದ್ದರು.
ಇದೀಗ ಜಗಳೂರು ತಾಲೂಕು ತೀವ್ರ ಬರ ಪಟ್ಟಿಗೆ ಸೇರ್ಪಡೆಯಾಗಿರುವುದರಿಂದ ಬರ ಪರಿಹಾರ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಸೇರಿದಂತೆ ಸರ್ಕಾರದ ವಿವಿಧ ಪರಿಹಾರ ಕ್ರಮಗಳು ದೊರೆಯುವ ನಿರೀಕ್ಷೆ ಸ್ಥಳೀಯರಲ್ಲಿ ಮೂಡಿದೆ. ಸರ್ಕಾರದ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿರುವ ರೈತರು ಹಾಗೂ ಸಾರ್ವಜನಿಕರು, ಬರ ಪರಿಸ್ಥಿತಿಯಿಂದ ಸಂಕಷ್ಟದಲ್ಲಿರುವ ಜನರಿಗೆ ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.





