ನಾಡಹಬ್ಬ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದ್ದು, ಈ ಬಾರಿ ದಸರಾ ಸಂಭ್ರಮಕ್ಕೆ ಕನ್ನಡ ಚಿತ್ರರಂಗವೂ ವಿಶೇಷ ಮೆರುಗು ನೀಡಲಿದೆ. ಇದೇ ಮೊದಲ ಬಾರಿಗೆ ಕನ್ನಡ ಚಿತ್ರರಂಗದ ಕಲಾವಿದರು, ನಿರ್ದೇಶಕರು, ನಿರ್ಮಾಪಕರು ಸೇರಿದಂತೆ ಚಿತ್ರರಂಗದ ಹಲವು ಪ್ರಮುಖರು ಒಟ್ಟಾಗಿ ದಸರಾ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ. ಈ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲ, ಈ ಬಾರಿ ದಸರಾ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಎಲ್ಲರೂ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ದಸರಾ ಸಂಭ್ರಮಕ್ಕೆ ಚಿತ್ರರಂಗದ ಪಾಲ್ಗೊಳ್ಳುವಿಕೆ ವಿಶೇಷ ರಂಗು ತರಲಿದೆ. ಎಲ್‌ಇಡಿ ಪರದೆಯಲ್ಲಿ ಕನ್ನಡ ಚಿತ್ರರಂಗ ನಡೆದು ಬಂದ ಹಾದಿಯನ್ನು ಪ್ರದರ್ಶಿಸಲಾಗುತ್ತದೆ. ಚಿತ್ರರಂಗದ ಕಲಾವಿದರು ಮತ್ತು ಗಣ್ಯರಿಗಾಗಿ ಎರಡು ಬಸ್‌ಗಳ ವ್ಯವಸ್ಥೆಯನ್ನೂ ಮಾಡಲಾಗಿದ್ದು, ಎರಡು ದಿನಗಳ ಕಾಲ ಯಾವುದೇ ಚಿತ್ರೀಕರಣ ನಡೆಯದಂತೆ ಸಹಕಾರ ನೀಡಲು ನಿರ್ಧರಿಸಲಾಗಿದೆ ಎಂದರು.
ಈ ಕಾರ್ಯಕ್ರಮದ ಜವಾಬ್ದಾರಿಯನ್ನು ಹಿರಿಯ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರಿಗೆ ವಹಿಸಲಾಗಿದೆ. ಕಾರ್ಯಕ್ರಮಕ್ಕೆ ಸಂಬಂಧಿಸಿದ ಎಲ್ಲ ವ್ಯವಸ್ಥೆಗಳನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯೇ ನೋಡಿಕೊಳ್ಳಲಿದೆ. ಕನ್ನಡ ಚಿತ್ರರಂಗದ ಪರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜಯಮಾಲ ಧನ್ಯವಾದ ಸಲ್ಲಿಸಿದರು.
ಈ ಬಾರಿಯ 416ನೇ ಮೈಸೂರು ದಸರಾ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆಯಿದೆ. ಸುಮಾರು 15 ಲಕ್ಷ ಜನರು ದಸರಾ ಸಂಭ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇರುವುದರಿಂದ ಭದ್ರತೆಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕಲಾವಿದರಿಗೆ ಅರಮನೆ ವೀಕ್ಷಣೆಗೆ ವಿಶೇಷ ವ್ಯವಸ್ಥೆ ಮಾಡಲಾಗಿದ್ದು, ಅಂಬಾರಿ ಬಸ್‌ನಲ್ಲಿ ಸಂಚರಿಸುವ ಅವಕಾಶದ ಜೊತೆಗೆ ಅರಮನೆಯಲ್ಲಿ ಸುಮಾರು 150 ಕಲಾವಿದರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಅರಮನೆ ಮುಂಭಾಗದಲ್ಲೂ ಕಲಾವಿದರಿಗೆ ಕುಳಿತುಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದ್ದು, ಅವರ ಭದ್ರತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಕಳೆದ 45 ವರ್ಷಗಳಿಂದ ನಡೆಯುತ್ತಿದ್ದ ಚಲನಚಿತ್ರೋತ್ಸವ ಈ ಬಾರಿ ನಡೆಯುವುದಿಲ್ಲ ಎಂದು ಸಾ.ರಾ. ಗೋವಿಂದು ತಿಳಿಸಿದರು. ಅದರ ಬದಲಿಗೆ ಕಲಾವಿದರಿಗೆ ಸಹಾಯಧನ ನೀಡುವ ಕುರಿತು ಸಲಹೆ ನೀಡಲಾಗಿದೆ ಎಂದರು. ಇದೇ ವೇಳೆ ಹಿರಿಯ ನಟ ಅನಂತನಾಗ್ ಅವರಿಂದ ದಸರಾ ಉದ್ಘಾಟನೆ ಮಾಡಿಸುವ ಆಶಯವಿದ್ದು, ಈ ಕುರಿತು ಮುಂದಿನ ದಿನಗಳಲ್ಲಿ ಮಾತುಕತೆ ನಡೆಸಲಾಗುವುದು ಎಂದು ಹೇಳಿದರು.
ಹಿರಿಯ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಮಾತನಾಡಿ, ದಸರಾ ಸಂಭ್ರಮಕ್ಕೆ ಚಿತ್ರರಂಗಕ್ಕೆ ವಿಶೇಷ ಆಹ್ವಾನ ನೀಡಲಾಗಿದೆ. ಮುಖ್ಯಮಂತ್ರಿ ಅವರು ಚಿತ್ರರಂಗದ ಎಲ್ಲರೂ ದಸರಾಗೆ ಆಗಮಿಸಬೇಕು ಎಂದು ಆಹ್ವಾನಿಸಿದ್ದಾರೆ. ನಟರು, ನಟಿಯರು, ನಿರ್ದೇಶಕರು ಮತ್ತು ನಿರ್ಮಾಪಕರಿಗೆ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲ ಅವರು ವೈಯಕ್ತಿಕವಾಗಿ ಕರೆ ಮಾಡಿ ಆಹ್ವಾನಿಸುತ್ತಿದ್ದಾರೆ ಎಂದರು.
ಈ ಬಾರಿ ದಸರಾ ಚಿತ್ರರಂಗಕ್ಕೂ ಹಬ್ಬದ ಸಂಭ್ರಮವಾಗಲಿದೆ. ಹಿರಿಯ ಮತ್ತು ಕಿರಿಯ ಕಲಾವಿದರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದು, ಸ್ಯಾಂಡಲ್‌ವುಡ್ ತಾರೆಯರ ಸಮಾಗಮಕ್ಕೆ ದಸರಾ ಸಾಕ್ಷಿಯಾಗಲಿದೆ. ಚಿತ್ರರಂಗದಲ್ಲಿ ಒಗ್ಗಟ್ಟು ಇಲ್ಲ ಎಂಬ ಮಾತು ಸರಿಯಲ್ಲ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ರಾಕ್‌ಲೈನ್ ವೆಂಕಟೇಶ್ ಸ್ಪಷ್ಟಪಡಿಸಿದರು. ಚಿತ್ರರಂಗಕ್ಕೆ ಸರ್ಕಾರ ನೀಡಿರುವ ಪ್ರಾಮುಖ್ಯತೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಧನ್ಯವಾದ ಸಲ್ಲಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಎಂ.ಜಿ. ರಾಮಮೂರ್ತಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು, ಹಿರಿಯ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ಭಾ.ಮ. ಹರೀಶ್, ಉಪಾಧ್ಯಕ್ಷರಾದ ಸುಂದರರಾಜ್ ಹಾಗೂ ಕೆ. ಮಂಜು, ಕಾರ್ಯದರ್ಶಿ ಎ. ಗಣೇಶ್, ಹಿರಿಯ ನಟ ದೊಡ್ಡಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.





