ಬೆಂಗಳೂರು: ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆಯ ಪ್ರಮಾಣದಲ್ಲಿ ವ್ಯತ್ಯಾಸ ಕಂಡುಬರುತ್ತಿದೆ. ಅಕ್ಟೋಬರ್ 8ರಂದು ಕರಾವಳಿ ಕರ್ನಾಟಕದ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿತೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಮುನ್ಸೂಚನೆ ನೀಡಲಾಗಿದೆ. ಇದೇ ವೇಳೆ ಅಕ್ಟೋಬರ್ 9ರಂದು ದಕ್ಷಿಣ ಒಳನಾಡಿನ ಆರು ಜಿಲ್ಲೆಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಅಕ್ಟೋಬರ್ 8ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯಲಿದೆ. ಈ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆ ಇದೆ.
ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 8ರಂದು ಮಳೆಯ ಸಾಧ್ಯತೆ ತುಸು ಹೆಚ್ಚಾಗಿದೆ. ಮೈಸೂರು, ಚಾಮರಾಜನಗರ, ಕೊಡಗು, ಹಾಸನ ಹಾಗೂ ಮಂಡ್ಯ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮತ್ತೊಂದೆಡೆ ಬಳ್ಳಾರಿ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.
ಅಕ್ಟೋಬರ್ 9ರಂದು 6 ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ
ಅಕ್ಟೋಬರ್ 9ರಂದು ರಾಜ್ಯದ ದಕ್ಷಿಣ ಒಳನಾಡಿನ ಆರು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ. ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಇದರ ಜೊತೆಗೆ ತುಮಕೂರು, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಕೋಲಾರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯಲಿದೆ.
ಕರಾವಳಿಯಲ್ಲೂ ಮಳೆಯ ಸಾಧ್ಯತೆ
ಅಕ್ಟೋಬರ್ 9ರಂದು ಕರಾವಳಿ ಕರ್ನಾಟಕದಲ್ಲೂ ಮಳೆಯ ನಿರೀಕ್ಷೆಯಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಅಂದು ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.





