ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಪ್ರತಿಭಟನೆ ನಡೆಸಲು ಸಜ್ಜಾಗಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಪ್ರತಿಭಟನೆಯಿಂದ ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆ ಹಿನ್ನೆಲೆ ದೆಹಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಸುಮಾರು 23,000 ಪೊಲೀಸರನ್ನು ಭದ್ರತಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಮೆಟ್ರೋ ಸಂಚಾರದ ಮೇಲೆ ನಿರ್ಬಂಧಗಳು, ರೈಲುಗಳ ರದ್ದು ಸೇರಿದಂತೆ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿಯ ಪ್ರಮುಖ ಪ್ರದೇಶಗಳಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಸಾರ್ವಜನಿಕರ ಸುರಕ್ಷತೆ, ಸಂಚಾರ ವ್ಯವಸ್ಥೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಅಧಿಕಾರಿಗಳು ಹಲವು ನಿರ್ಬಂಧಗಳನ್ನು ಜಾರಿಗೊಳಿಸಲು ಸಿದ್ಧತೆ ನಡೆಸಿದ್ದಾರೆ.
ರೈಲು ಸಂಚಾರಕ್ಕೆ ಅಡ್ಡಿ; ಹಲವು ಮೇಲ್, ಎಕ್ಸ್ಪ್ರೆಸ್ ರೈಲು ರದ್ದು
CJP ಪ್ರತಿಭಟನೆಯ ಹಿನ್ನೆಲೆ ದೆಹಲಿ ಮತ್ತು ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣಗಳಿಗೆ ಬರುವ ರೈಲುಗಳ ಸಂಚಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಅಕ್ಟೋಬರ್ 10ರ ಮುಂಜಾನೆ 4 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಿಗದಿಯಾಗಿದ್ದ ಹಲವು ಮೇಲ್ ಮತ್ತು ಎಕ್ಸ್ಪ್ರೆಸ್ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ.
ಅಕ್ಟೋಬರ್ 9ರ ಮಧ್ಯಾಹ್ನ 2 ಗಂಟೆಯ ಬಳಿಕ ತಮ್ಮ ಮೂಲ ನಿಲ್ದಾಣಗಳಿಂದ ಹೊರಟು, ಅಕ್ಟೋಬರ್ 10ರಂದು ನಿಗದಿತ ಅವಧಿಯಲ್ಲಿ ದೆಹಲಿ ತಲುಪಬೇಕಿದ್ದ ಕೆಲವು ರೈಲುಗಳ ಸಂಚಾರವನ್ನೂ ಮೂಲ ನಿಲ್ದಾಣದಿಂದಲೇ ರದ್ದುಗೊಳಿಸಲಾಗಿದೆ. ಇದರಿಂದ ದೆಹಲಿಗೆ ಪ್ರಯಾಣಿಸಲು ಯೋಜಿಸಿರುವ ಸಾವಿರಾರು ಪ್ರಯಾಣಿಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ.
ರೈಲು ನಿಲ್ದಾಣಗಳ ಸುತ್ತಮುತ್ತ ವಾಹನ ದಟ್ಟಣೆ ಹೆಚ್ಚಾಗುವ ಆತಂಕವೂ ಎದುರಾಗಿದೆ. ಹೀಗಾಗಿ ಪ್ರಯಾಣಿಕರು ರೈಲು ನಿಲ್ದಾಣಕ್ಕೆ ತೆರಳುವ ಮೊದಲು ತಮ್ಮ ರೈಲಿನ ಸ್ಥಿತಿಗತಿ, ಹೊರಡುವ ಸಮಯ ಹಾಗೂ ರದ್ದತಿ ಕುರಿತು ಅಧಿಕೃತ ಮಾಹಿತಿಯನ್ನು ಪರಿಶೀಲಿಸುವಂತೆ ಸೂಚಿಸಲಾಗಿದೆ.
ಮೆಟ್ರೋ ಸಂಚಾರದ ಮೇಲೂ ನಿರ್ಬಂಧ
ಪ್ರತಿಭಟನೆಯ ಹಿನ್ನೆಲೆ ದೆಹಲಿಯ ಮೆಟ್ರೋ ಸೇವೆಗಳ ಮೇಲೂ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ವರದಿಯಾಗಿದೆ. ಪ್ರತಿಭಟನೆ ನಡೆಯುವ ಪ್ರದೇಶಗಳು ಹಾಗೂ ಅದರ ಸುತ್ತಮುತ್ತಲಿನ ಸ್ಥಳಗಳಲ್ಲಿ ಜನಸಂದಣಿ ನಿಯಂತ್ರಿಸಲು ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಭದ್ರತಾ ವ್ಯವಸ್ಥೆ ಬಲಪಡಿಸಲಾಗಿದೆ.
ಮೆಟ್ರೋ ನಿಲ್ದಾಣಗಳ ಪ್ರವೇಶ, ನಿರ್ಗಮನ ಹಾಗೂ ಪ್ರಯಾಣಿಕರ ಸಂಚಾರದ ಮೇಲೆ ವಿಧಿಸಲಾಗಿರುವ ನಿರ್ಬಂಧಗಳು ಸಾರ್ವಜನಿಕರ ಪ್ರಯಾಣದ ಮೇಲೆ ಪರಿಣಾಮ ಬೀರಬಹುದು. ಆದ್ದರಿಂದ ದೆಹಲಿಯಲ್ಲಿ ಪ್ರಯಾಣಿಸುವವರು ತಮ್ಮ ಪ್ರಯಾಣದ ಮಾರ್ಗವನ್ನು ಮುಂಚಿತವಾಗಿ ಯೋಜಿಸಿಕೊಳ್ಳುವುದು ಸೂಕ್ತವಾಗಿದೆ.
ಜಂತರ್ ಮಂತರ್ನಲ್ಲಿ ಪ್ರತಿಭಟನೆಗೆ ಅನುಮತಿ ನಿರಾಕರಣೆ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು CJP ಮುಂದಾಗಿತ್ತು. ಆದರೆ, ಪ್ರತಿಭಟನೆಗೆ ಅನುಮತಿ ನೀಡಲು ನಿರಾಕರಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಪ್ರತಿಭಟನೆ ನಡೆಸಲು ಅನುಮತಿ ಕೋರಿ ಕನಿಷ್ಠ 10 ದಿನಗಳ ಮುಂಚಿತವಾಗಿ ಅರ್ಜಿ ಸಲ್ಲಿಸಬೇಕೆಂಬ ನಿಯಮವಿದೆ. ಆದರೆ, ಈ ನಿಯಮವನ್ನು ಪಾಲಿಸಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಜೊತೆಗೆ, ಹಿಂದಿನ ಪ್ರತಿಭಟನೆಯ ಸಂದರ್ಭದಲ್ಲಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಆರೋಪವೂ ಇದೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಪ್ರತಿಭಟನೆಗೆ ಅನುಮತಿ ನಿರಾಕರಿಸಲಾಗಿದೆ ಎಂಬುದು ಪೊಲೀಸರ ಸ್ಪಷ್ಟನೆಯಾಗಿದೆ. ಪ್ರತಿಭಟನೆಗೆ ಅನುಮತಿ ಸಿಗದಿದ್ದರೂ ಪರಿಸ್ಥಿತಿ ನಿಯಂತ್ರಣದಲ್ಲಿಡಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
23 ಸಾವಿರ ಪೊಲೀಸರ ನಿಯೋಜನೆ; ಭದ್ರತೆಗೆ ಆದ್ಯತೆ
ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿಯಾದ್ಯಂತ ಸುಮಾರು 23,000 ಪೊಲೀಸರನ್ನು ನಿಯೋಜಿಸಿರುವುದಾಗಿ ವರದಿಯಾಗಿದೆ. ಪ್ರಮುಖ ರಸ್ತೆ, ರೈಲು ನಿಲ್ದಾಣಗಳು ಹಾಗೂ ಪ್ರತಿಭಟನೆಗೆ ಸಂಬಂಧಿಸಿದ ಪ್ರದೇಶಗಳಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ.





