ಬೆಂಗಳೂರು: ಈಶಾನ್ಯ ಮಾನ್ಸೂನ್ ಮಾರುತಗಳ ಪ್ರಭಾವದಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆ ಮುನ್ಸೂಚನೆ ನೀಡಿದಂತೆ ಸಂಜೆಯಾಗುತ್ತಿದ್ದಂತೆಯೇ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ಏಕಾಏಕಿ ಸುರಿದ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಈ ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಐದು ದಿನಗಳ ಕಾಲ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನ ಮೆಜೆಸ್ಟಿಕ್, ಕಾರ್ಪೊರೇಷನ್, ಯಶವಂತಪುರ, ಮೈಸೂರು ಬ್ಯಾಂಕ್ ಸರ್ಕಲ್, ಮಲ್ಲೇಶ್ವರಂ, ರಾಜಾಜಿನಗರ ಸೇರಿದಂತೆ ನಗರದ ಹಲವು ಬಡಾವಣೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಮಳೆಯ ಪರಿಣಾಮ ಪ್ರಮುಖ ರಸ್ತೆಗಳಲ್ಲಿ ನೀರು ಸಂಗ್ರಹವಾಗಿದ್ದು, ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ.
ಮೆಜೆಸ್ಟಿಕ್ ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣದ ಸುತ್ತಮುತ್ತಲಿನ ರಸ್ತೆಗಳಲ್ಲೂ ನೀರು ನಿಂತಿದೆ. ಊರಿಗೆ ತೆರಳಲು ಬಸ್ ಹಾಗೂ ರೈಲು ನಿಲ್ದಾಣಗಳಿಗೆ ಬಂದಿದ್ದ ಪ್ರಯಾಣಿಕರು ಮತ್ತು ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಉದ್ಯೋಗಿಗಳು ಪರದಾಡುವಂತಾಗಿದೆ. ಮಳೆಯಿಂದಾಗಿ ವಾಹನಗಳ ಸಂಚಾರ ನಿಧಾನಗೊಂಡಿದ್ದು, ಪ್ರಯಾಣಿಕರು ತೊಂದರೆ ಅನುಭವಿಸಿದ್ದಾರೆ.
ಬೆಂಗಳೂರು ಹೊರವಲಯದ ಚಂದಾಪುರ ಸಮೀಪದ ಕಿತ್ತಾಗನಹಳ್ಳಿ ಕ್ರಾಸ್ ಬಳಿ ಸುರಿದ ಭಾರಿ ಮಳೆಯಿಂದಾಗಿ ಚಂದಾಪುರ-ಹೊಸೂರು ಸಂಪರ್ಕ ರಸ್ತೆಯಲ್ಲಿ ಅಪಾರ ಪ್ರಮಾಣದ ನೀರು ನಿಂತಿದೆ. ಕಳೆದ ಒಂದು ಗಂಟೆಯಿಂದ ಸುರಿದ ಮಳೆಯಿಂದ ಹೆದ್ದಾರಿ ಪ್ರದೇಶ ಜಲಾವೃತಗೊಂಡಿದ್ದು, ರಸ್ತೆಯು ಕೆರೆಯಂತಾಗಿದೆ. ಇದರಿಂದ ವಾಹನ ಸವಾರರು ಹಾಗೂ ಪಾದಚಾರಿಗಳು ಸಂಚರಿಸಲು ತೀವ್ರ ತೊಂದರೆ ಎದುರಿಸಿದ್ದಾರೆ.
ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ಗಂಟೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.
ಬಿರುಗಾಳಿಯ ಪರಿಣಾಮ ಮರದ ಕೊಂಬೆಗಳು ಮುರಿದು ಬೀಳುವ ಹಾಗೂ ವಿದ್ಯುತ್ ಕಂಬಗಳು ಧರೆಗುರುಳುವ ಅಪಾಯವಿದೆ. ಇದರಿಂದ ವಿದ್ಯುತ್ ಪೂರೈಕೆಯಲ್ಲಿಯೂ ವ್ಯತ್ಯಯ ಉಂಟಾಗಬಹುದು ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.
ಭಾರಿ ಮಳೆ ಮತ್ತು ಬಿರುಗಾಳಿಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ. ವಿಶೇಷವಾಗಿ ವಾಹನ ಸವಾರರು ಮರಗಳ ಕೆಳಗೆ ವಾಹನ ನಿಲ್ಲಿಸಬಾರದು ಅಥವಾ ಆಶ್ರಯ ಪಡೆಯಬಾರದು. ವಿದ್ಯುತ್ ಕಂಬಗಳು, ತಂತಿಗಳು ಹಾಗೂ ದುರ್ಬಲ ಕಟ್ಟಡಗಳ ಸಮೀಪ ಸಂಚರಿಸುವಾಗ ಎಚ್ಚರಿಕೆ ವಹಿಸಬೇಕು.
ಮುಂದಿನ ದಿನಗಳಲ್ಲಿಯೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಗಮನಿಸಿ ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಮುಖ್ಯವಾಗಿದೆ.





