ಮಂಡ್ಯ: ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಂಡ್ಯದ ಗಣಂಗೂರು ಟೋಲ್ ಪ್ಲಾಜಾ ಬಳಿ ರೈತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ರೈತರು ಟೋಲ್ ಪ್ಲಾಜಾ ಮುತ್ತಿಗೆಗೆ ಮುಂದಾಗಿ, ಮೈಸೂರು–ಬೆಂಗಳೂರು ದಶಪಥ ಹೆದ್ದಾರಿ ಹಾಗೂ ಸರ್ವೀಸ್ ರಸ್ತೆಯಲ್ಲಿ ಧರಣಿ ನಡೆಸಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ತಳ್ಳಾಟ, ನೂಕಾಟ ನಡೆದಿದ್ದು, ಕರ್ತವ್ಯದಲ್ಲಿದ್ದ ಹೋಂಗಾರ್ಡ್ ಪೇದೆಯೊಬ್ಬರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗಣಂಗೂರು ಟೋಲ್ ಬಳಿ ರೈತರ ಆಕ್ರೋಶ
ಕಬ್ಬು ಬೆಳೆಗಾರರ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು ಮತ್ತು ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನೀಡಬೇಕು ಎಂಬ ಪ್ರಮುಖ ಬೇಡಿಕೆಯೊಂದಿಗೆ ರೈತರು ಗಣಂಗೂರು ಟೋಲ್ ಬಳಿ ಜಮಾಯಿಸಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತ ಸಂಘದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.
ಪ್ರತಿಭಟನಾಕಾರರು ಟೋಲ್ ಪ್ಲಾಜಾ ಕಡೆಗೆ ತೆರಳಿ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಅವರನ್ನು ತಡೆಯಲು ಮುಂದಾಗಿದ್ದು, ರೈತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಹೆದ್ದಾರಿಯ ಸರ್ವೀಸ್ ರಸ್ತೆಯನ್ನು ಬಂದ್ ಮಾಡಿ ಧರಣಿ ಕುಳಿತಿದ್ದ ರೈತರನ್ನು ತೆರವುಗೊಳಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ಪೊಲೀಸರ ಕ್ರಮಕ್ಕೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದೆ.
ಮೈ–ಬೆಂ ದಶಪಥ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿ
ರೈತರು ಟೋಲ್ ಪ್ಲಾಜಾ ಮುಂಭಾಗದ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದರಿಂದ ಮೈಸೂರು–ಬೆಂಗಳೂರು ದಶಪಥ ಹೆದ್ದಾರಿ ಹಾಗೂ ಸರ್ವೀಸ್ ರಸ್ತೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ರಸ್ತೆ ಬಂದ್ ಆಗಿದ್ದರಿಂದ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು ಮತ್ತು ವಾಹನ ಸವಾರರು ಪರದಾಡುವಂತಾಗಿದೆ.
ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಂಡ ಹಿನ್ನೆಲೆ ಪ್ರಯಾಣಿಕರು ತೊಂದರೆ ಅನುಭವಿಸಿದ್ದಾರೆ. ಪ್ರತಿಭಟನೆಯಿಂದ ಉಂಟಾದ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಪೊಲೀಸರು ಪ್ರಯತ್ನಿಸಿದ್ದಾರೆ. ಪ್ರತಿಭಟನಾಕಾರರು ರಸ್ತೆ ತಡೆ ಮುಂದುವರಿಸಿದರೆ ವಾಹನ ಸಂಚಾರದ ಮೇಲೆ ಮತ್ತಷ್ಟು ಪರಿಣಾಮ ಬೀರುವ ಸಾಧ್ಯತೆ ಹಿನ್ನೆಲೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ತಳ್ಳಾಟದಲ್ಲಿ ಅಸ್ವಸ್ಥಗೊಂಡ ಹೋಂಗಾರ್ಡ್
ಟೋಲ್ ಪ್ಲಾಜಾಕ್ಕೆ ಮುತ್ತಿಗೆ ಹಾಕುವ ಪ್ರಯತ್ನದ ವೇಳೆ ರೈತರು ಮತ್ತು ಪೊಲೀಸರ ನಡುವೆ ತಳ್ಳಾಟ, ನೂಕಾಟ ನಡೆದಿದೆ. ಈ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೋಂಗಾರ್ಡ್ ಪೇದೆಯೊಬ್ಬರು ಅಸ್ವಸ್ಥಗೊಂಡಿದ್ದಾರೆ.. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಹೋಂಗಾರ್ಡ್ ಅಸ್ವಸ್ಥಗೊಂಡ ಘಟನೆಯಿಂದ ಪ್ರತಿಭಟನಾ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ಕೈಮೀರಿ ಹೋಗದಂತೆ ಪೊಲೀಸರು ಪ್ರತಿಭಟನಾಕಾರರಿಗೆ ಶಾಂತಿಯುತವಾಗಿ ಹೋರಾಟ ಮುಂದುವರಿಸುವಂತೆ ಮನವಿ ಮಾಡಿದ್ದಾರೆ. ಪ್ರತಿಭಟನಾಕಾರರ ಬೇಡಿಕೆಗಳನ್ನು ಆಲಿಸುವುದರ ಜೊತೆಗೆ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಂದರೆಯಾಗದಂತೆ ಸಹಕರಿಸುವಂತೆ ಮನವಿ ಮಾಡಲಾಗಿದೆ.
ಪ್ರತಿಭಟನಾ ಸ್ಥಳಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ
ರೈತರ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಗಣಂಗೂರು ಟೋಲ್ ಬಳಿಗೆ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದ್ದಾರೆ. ರೈತರ ಬೇಡಿಕೆಗಳನ್ನು ಆಲಿಸಿ, ಪರಿಸ್ಥಿತಿ ಶಾಂತವಾಗಿರುವಂತೆ ನೋಡಿಕೊಳ್ಳಲು ಮನವಿ ಮಾಡಿದ್ದಾರೆ.





