ಕಲಬುರಗಿ: ನಗರದ ಅಂಬೇಡ್ಕರ್ ವಸತಿ ನಿಲಯದಲ್ಲಿ ಮತ್ತೊಂದು ಆಘಾತಕಾರಿ ಘಟನೆ ಸಂಭವಿಸಿದೆ. ಹಾಸ್ಟೆಲ್ನ ನಾಲ್ಕನೇ ಮಹಡಿಯಿಂದ ಬಿದ್ದು 25 ವರ್ಷದ ವಿದ್ಯಾರ್ಥಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಮೃತರನ್ನು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕುಂದನೂರು ಗ್ರಾಮದ ನಿವಾಸಿ ಮುಜಾಹೀದ್ ಪಟೇಲ್ (25) ಎಂದು ಗುರುತಿಸಲಾಗಿದೆ. ಈ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಪ್ರಶ್ನೆ ಇದೀಗ ಎದ್ದಿದೆ.
ಮುಜಾಹೀದ್ ಪಟೇಲ್ ಅವರು ಕಲಬುರಗಿಯ ಪ್ರತಿಷ್ಠಿತ ಕಾಲೇಜೊಂದರಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು. ಅಂಬೇಡ್ಕರ್ ವಸತಿ ನಿಲಯದಲ್ಲಿ ವಾಸವಿದ್ದ ಅವರು, ತಡರಾತ್ರಿ ಹಾಸ್ಟೆಲ್ನ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಮೃತಪಟ್ಟಿರುವುದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆ ಹಾಗೂ ಸ್ಥಳ ಪರಿಶೀಲನೆಯ ಬಳಿಕವಷ್ಟೇ ಸಾವಿನ ಹಿಂದಿನ ನೈಜ ಕಾರಣ ತಿಳಿದುಬರಬೇಕಿದೆ.
ಇನ್ನು ವಿದ್ಯಾರ್ಥಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಪೋಷಕರು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಗನ ಸಾವಿನ ಸುದ್ದಿ ಕೇಳಿ ಕುಟುಂಬಸ್ಥರು ತೀವ್ರ ದುಃಖದಲ್ಲಿದ್ದಾರೆ. ಹಾಸ್ಟೆಲ್ ಆವರಣದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಹಲ್ಲೆ ಪ್ರಕರಣದ ಬೆನ್ನಲ್ಲೇ ಮತ್ತೊಂದು ದುರಂತ!
ಅಂಬೇಡ್ಕರ್ ವಸತಿ ನಿಲಯದಲ್ಲಿ ಮೊನ್ನೆಯಷ್ಟೇ ಮತ್ತೊಬ್ಬ ವಿದ್ಯಾರ್ಥಿಯನ್ನು ಬೆತ್ತಲೆಗೊಳಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ವರದಿಯಾಗಿತ್ತು. ಈ ಘಟನೆ ಇನ್ನೂ ಮಾಸುವ ಮುನ್ನವೇ ಇದೀಗ ಮತ್ತೊಬ್ಬ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.
ಒಂದರ ಹಿಂದೆ ಒಂದರಂತೆ ನಡೆಯುತ್ತಿರುವ ಘಟನೆಗಳಿಂದ ಹಾಸ್ಟೆಲ್ ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಪ್ರಶ್ನೆಗಳು ಎದ್ದಿವೆ. ವಿದ್ಯಾರ್ಥಿ ಮುಜಾಹೀದ್ ಪಟೇಲ್ ನಾಲ್ಕನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದಿದ್ದಾರೆಯೇ? ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ? ಅಥವಾ ಇದರ ಹಿಂದೆ ಬೇರೇನಾದರೂ ಕಾರಣವಿದೆಯೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.





