ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮಕ್ಕೆ ಊರಿಗೆ ತೆರಳುವ ಪ್ರಯಾಣಿಕರಿಗೆ ನೈಋತ್ಯ ರೈಲ್ವೆ ಸಿಹಿಸುದ್ದಿ ನೀಡಿದೆ. ಹಬ್ಬದ ಸಂದರ್ಭದಲ್ಲಿ ರೈಲುಗಳಲ್ಲಿ ಉಂಟಾಗುವ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಬೆಂಗಳೂರು ಮತ್ತು ಬೆಳಗಾವಿ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಲಾಗಿದೆ. ನವೆಂಬರ್ 7ರಿಂದ 10ರವರೆಗೆ ಈ ವಿಶೇಷ ರೈಲುಗಳು ಸಂಚರಿಸಲಿದ್ದು, ಉಭಯ ನಗರಗಳ ಪ್ರಯಾಣಿಕರಿಗೆ ಅನುಕೂಲವಾಗಲಿದೆ.
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಬೆಳಗಾವಿಗೆ ತೆರಳುವವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು-ಬೆಳಗಾವಿ ನಡುವೆ ಒಟ್ಟು ನಾಲ್ಕು ಟ್ರಿಪ್‌ಗಳ ವಿಶೇಷ ರೈಲು ಸಂಚಾರ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಿಂದ ಬೆಳಗಾವಿಗೆ ಎರಡು ಟ್ರಿಪ್ ಹಾಗೂ ಬೆಳಗಾವಿಯಿಂದ ಬೆಂಗಳೂರಿಗೆ ಎರಡು ಟ್ರಿಪ್ ರೈಲುಗಳು ಸಂಚರಿಸಲಿವೆ.
ಬೆಂಗಳೂರಿನಿಂದ ಬೆಳಗಾವಿಗೆ ರೈಲು ವೇಳಾಪಟ್ಟಿ
ಬೆಂಗಳೂರಿನಿಂದ ಬೆಳಗಾವಿಗೆ ತೆರಳುವ ವಿಶೇಷ ರೈಲು ನವೆಂಬರ್ 7 ಮತ್ತು 9ರಂದು ರಾತ್ರಿ 7 ಗಂಟೆಗೆ ಹೊರಡಲಿದೆ. ಮರುದಿನ ಬೆಳಗ್ಗೆ 8.25ಕ್ಕೆ ಬೆಳಗಾವಿ ನಿಲ್ದಾಣವನ್ನು ತಲುಪಲಿದೆ. ಹೀಗಾಗಿ ಹಬ್ಬದ ಸಂದರ್ಭದಲ್ಲಿ ಬೆಳಗಾವಿ ಹಾಗೂ ಮಾರ್ಗಮಧ್ಯದ ಪ್ರದೇಶಗಳಿಗೆ ತೆರಳುವ ಪ್ರಯಾಣಿಕರಿಗೆ ಈ ರೈಲು ಸಹಕಾರಿಯಾಗಲಿದೆ.
ಬೆಳಗಾವಿಯಿಂದ ಬೆಂಗಳೂರಿಗೆ ರೈಲು ವೇಳಾಪಟ್ಟಿ
ಇನ್ನು ಬೆಳಗಾವಿಯಿಂದ ಬೆಂಗಳೂರಿಗೆ ಬರುವ ವಿಶೇಷ ರೈಲು ನವೆಂಬರ್ 8 ಮತ್ತು 10ರಂದು ಸಂಜೆ 5.30ಕ್ಕೆ ಹೊರಡಲಿದೆ. ಮರುದಿನ ಬೆಳಗ್ಗೆ 5 ಗಂಟೆಗೆ ಬೆಂಗಳೂರು ತಲುಪಲಿದೆ. ಇದರಿಂದ ಹಬ್ಬ ಮುಗಿಸಿ ಬೆಂಗಳೂರಿಗೆ ಮರಳುವ ಪ್ರಯಾಣಿಕರಿಗೂ ಅನುಕೂಲವಾಗಲಿದೆ.
ಪ್ರಮುಖ ನಿಲ್ದಾಣಗಳಲ್ಲಿ ನಿಲುಗಡೆ
ಈ ವಿಶೇಷ ರೈಲು ಬೆಂಗಳೂರು, ತುಮಕೂರು, ದಾವಣಗೆರೆ, ಹಾವೇರಿ ಹಾಗೂ ಹುಬ್ಬಳ್ಳಿ ಮಾರ್ಗವಾಗಿ ಸಂಚರಿಸಲಿದೆ. ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಹುಬ್ಬಳ್ಳಿ ಮತ್ತು ಧಾರವಾಡ ಸೇರಿದಂತೆ ಪ್ರಮುಖ ರೈಲು ನಿಲ್ದಾಣಗಳಲ್ಲಿ ನಿಲುಗಡೆ ನೀಡಲಾಗಿದೆ.





