ಹಾಸನ: ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ವಿರುದ್ಧ ಮಾಡಿರುವ ಲಂಚದ ಆರೋಪ ಇದೀಗ ರಾಜಕೀಯ ಹಾಗೂ ಆಡಳಿತ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿರುವ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ತಮ್ಮ ವಿರುದ್ಧ ಮೊದಲ ದಿನದಿಂದಲೂ ಟಾರ್ಗೆಟ್ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಇಂತಹ ಆರೋಪಗಳಿಗೆ ತಾವು ಹೆದರುವುದಿಲ್ಲ, ಎಲ್ಲವನ್ನೂ ಎದುರಿಸಲು ಸಿದ್ಧರಿದ್ದೇವೆ ಎಂದು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.
ಕುಮಾರಸ್ವಾಮಿ ಅವರ ಆರೋಪಗಳಿಗೆ ಸಂಬಂಧಿಸಿದಂತೆ ಮಾತನಾಡಿದ ಜಿಲ್ಲಾಧಿಕಾರಿ, ತಮ್ಮ ವಿರುದ್ಧ ಮಾಡಲಾಗುತ್ತಿರುವ ಆರೋಪಗಳು ಆಧಾರರಹಿತವಾಗಿವೆ ಎಂದು ಹೇಳಿದ್ದಾರೆ. ಅಧಿಕಾರಿಗಳು ತಮ್ಮ ಕೆಲಸ ಮಾಡುವುದನ್ನು ಬಿಟ್ಟು ಈ ರೀತಿಯ ಆರೋಪ ಮತ್ತು ಮಾನಸಿಕ ಕಿರುಕುಳವನ್ನು ಎದುರಿಸಬೇಕಾದ ಪರಿಸ್ಥಿತಿ ಏಕೆ ನಿರ್ಮಾಣವಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ.
‘ಡೇ 1ರಿಂದಲೂ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ’
ತಮ್ಮ ವಿರುದ್ಧ ಮೊದಲ ದಿನದಿಂದಲೂ ಟಾರ್ಗೆಟ್ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಲತಾಕುಮಾರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನೂ ಮುಂದೆ ಯಾವ ರೀತಿಯ ಆರೋಪಗಳು ಬರುತ್ತವೆಯೋ ಗೊತ್ತಿಲ್ಲ. ಆದರೆ, ಇಂತಹ ಆರೋಪಗಳಿಗೆ ತಾವು ಹೆದರುವುದಿಲ್ಲ. ಎಲ್ಲದಕ್ಕೂ ಸಿದ್ಧರಾಗಿಯೇ ಕರ್ತವ್ಯಕ್ಕೆ ಬಂದಿದ್ದೇವೆ. ಇಂತಹ ಸವಾಲುಗಳನ್ನು ಎದುರಿಸಲು ತರಬೇತಿಯೂ ಇದೆ ಎಂದು ಹೇಳಿದ್ದಾರೆ.
ಕುಮಾರಸ್ವಾಮಿ ಮಾಡಿರುವ ಆರೋಪಗಳೆಲ್ಲವೂ ಸಂಪೂರ್ಣ ಸುಳ್ಳು ಎಂದು ತಳ್ಳಿಹಾಕಿರುವ ಅವರು, ಮಹಿಳಾ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ತೇಜೋವಧೆ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಇಂತಹ ಆರೋಪಗಳನ್ನು ಸಾರ್ವಜನಿಕರು ನಂಬಬಾರದು ಎಂದು ಮನವಿ ಮಾಡಿದ್ದಾರೆ.
ಸೈಬರ್ ಕ್ರೈಂ ವಿಭಾಗಕ್ಕೆ ದೂರು, ಎಫ್ಐಆರ್ ದಾಖಲು
ತಮ್ಮ ವಿರುದ್ಧ ಹರಿದಾಡುತ್ತಿರುವ ಆರೋಪಗಳಿಗೆ ಸಂಬಂಧಿಸಿದಂತೆ ಈಗಾಗಲೇ ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ ಸಂಬಂಧ ಎಫ್ಐಆರ್ ಕೂಡ ದಾಖಲಾಗಿದೆ ಎಂದು ಹೇಳಿದ್ದಾರೆ.
ಸುಳ್ಳು ಆರೋಪಗಳಿಗೆ ಪ್ರತಿಯೊಂದಕ್ಕೂ ಉತ್ತರ ನೀಡಲು ಸಾಧ್ಯವಿಲ್ಲ. ಆದರೆ, ಸಾರ್ವಜನಿಕ ವಲಯದಲ್ಲಿ ಇಂತಹ ಆರೋಪಗಳು ಹರಿದಾಡುತ್ತಿರುವುದರಿಂದ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕಾಗಿದೆ. ಹಿರಿಯರು ಅಥವಾ ಜನಪ್ರತಿನಿಧಿಗಳು ಅಧಿಕಾರಿಗಳ ವಿರುದ್ಧ ಈ ರೀತಿಯ ಆರೋಪಗಳನ್ನು ಮಾಡಿದಾಗ ಯಾವ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ.
ಇದಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿದ ಪಿಡಿಎಫ್ ದಾಖಲೆಯನ್ನು ಯಾರು ಬಿಡುಗಡೆ ಮಾಡಿದ್ದಾರೆ ಎಂಬುದನ್ನು ಪತ್ತೆಹಚ್ಚಿ, ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿಯೂ ಹೇಳಿದ್ದಾರೆ. ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸುವುದಕ್ಕೆ ಅವಕಾಶ ನೀಡಬೇಕು. ಕೆಲಸ ಮಾಡುವುದನ್ನು ಬಿಟ್ಟು ಇಂತಹ ಆರೋಪಗಳ ಮೂಲಕ ಅಧಿಕಾರಿಗಳಿಗೆ ಏಕೆ ಹಿಂಸೆ ನೀಡಲಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ.
ಕುಮಾರಸ್ವಾಮಿ ಮಾಡಿದ್ದೇನು ಆರೋಪ?
ಇದಕ್ಕೂ ಮೊದಲು ಹಾಸನ ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ಅವರ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ವಿರುದ್ಧ ಲಂಚದ ಆರೋಪ ಮಾಡಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ (ಪಿಎ) ಶಶಿಕಿರಣ್ ಅವರದ್ದು ಎನ್ನಲಾದ ವಾಟ್ಸಪ್ ಚಾಟ್ಗಳನ್ನು ಬಿಡುಗಡೆ ಮಾಡಿದ್ದರು. ಕ್ರಷರ್ ವ್ಯವಹಾರಕ್ಕೆ ಸಂಬಂಧಿಸಿದ ವಿಚಾರಗಳ ಕುರಿತು ಚಾಟ್ಗಳಲ್ಲಿ ಮಾಹಿತಿ ಇದೆ ಎಂದು ಪ್ರತಿಪಾದಿಸಿದ್ದ ಕುಮಾರಸ್ವಾಮಿ, ಈ ವ್ಯವಹಾರದಲ್ಲಿ ₹75 ಲಕ್ಷ ಲಂಚದ ಆರೋಪವನ್ನೂ ಮಾಡಿದ್ದರು.





