ಚೆನ್ನೈ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರಿನಲ್ಲಿರುವ ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ (TEPL) ಕಾರ್ಖಾನೆಯಲ್ಲಿ ಭೀಕರ ದುರಂತ ಸಂಭವಿಸಿದೆ. ಕಾರ್ಖಾನೆಯ ತ್ಯಾಜ್ಯ ನೀರು ಸಂಸ್ಕರಣಾ ಘಟಕದ (ETP) ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ವಿಷಾನಿಲ ಸೇವಿಸಿ ಮೂವರು ಗುತ್ತಿಗೆ ಕಾರ್ಮಿಕರು ಮೃತಪಟ್ಟಿದ್ದಾರೆ. ಸೋಮವಾರ ಸಂಜೆ ನಡೆದ ಈ ದುರ್ಘಟನೆ ಕೈಗಾರಿಕಾ ವಲಯದಲ್ಲಿ ಆತಂಕ ಮೂಡಿಸಿದೆ.
ಮೃತರನ್ನು ಹೊಸೂರಿನ ನಿವಾಸಿ ಕಾವೇರಿ (30) ಹಾಗೂ ಧರ್ಮಪುರಿ ಜಿಲ್ಲೆಯ ನಿವಾಸಿಗಳಾದ ಬಿ. ಅಕ್ಮಲ್ (28) ಮತ್ತು ಎಂ. ಸಾರಥಿ ಕುಮಾರ್ (28) ಎಂದು ಗುರುತಿಸಲಾಗಿದೆ. ಆಪಲ್ ಐಫೋನ್ಗಳಿಗೆ ಅಗತ್ಯವಿರುವ ಬಿಡಿಭಾಗಗಳನ್ನು ತಯಾರಿಸುವ ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಈ ದುರಂತ ಸಂಭವಿಸಿದೆ.
ಟ್ಯಾಂಕ್ ಸ್ವಚ್ಛಗೊಳಿಸುವಾಗ ವಿಷಾನಿಲ ಸೋರಿಕೆ
ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾರ್ಖಾನೆಯಲ್ಲಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕದ (Effluent Treatment Plant – ETP) ಟ್ಯಾಂಕ್ನಲ್ಲಿ ಕೆಸರು ಮತ್ತು ಮಣ್ಣು ಸಂಗ್ರಹವಾಗಿತ್ತು. ಇದನ್ನು ಸ್ವಚ್ಛಗೊಳಿಸುವ ಕೆಲಸಕ್ಕಾಗಿ ಮೂವರು ಕಾರ್ಮಿಕರು ಟ್ಯಾಂಕ್ನೊಳಗೆ ಇಳಿದಿದ್ದರು. ಈ ವೇಳೆ ಟ್ಯಾಂಕ್ನೊಳಗೆ ವಿಷಾನಿಲ ಹೊರಸೂಸಿದ ಪರಿಣಾಮ ಕಾರ್ಮಿಕರು ಉಸಿರಾಡಲು ಸಾಧ್ಯವಾಗದೆ ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ.
ವಿಷಾನಿಲ ಸೇವನೆಯಿಂದ ಆಮ್ಲಜನಕದ ಕೊರತೆ ಉಂಟಾಗಿ ಮೂವರು ಕಾರ್ಮಿಕರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಹೊಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಅಷ್ಟರಲ್ಲೇ ಮೂವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಘಟನೆಯ ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕೃಷ್ಣಗಿರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ. ಟ್ಯಾಂಕ್ನೊಳಗೆ ಯಾವ ರೀತಿಯ ವಿಷಾನಿಲ ಉತ್ಪತ್ತಿಯಾಗಿತ್ತು ಮತ್ತು ದುರಂತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯಬೇಕಿದೆ.
ತನಿಖೆಗೆ ಕೈಗಾರಿಕಾ ಸಚಿವರ ಭರವಸೆ
ಈ ದುರಂತಕ್ಕೆ ತಮಿಳುನಾಡಿನ ಕೈಗಾರಿಕಾ ಸಚಿವೆ ವಿರುಧೈ ಮಗಲ್ ಕೀರ್ತನಾ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕಾರ್ಮಿಕರ ಸಾವಿನ ಕುರಿತು ಸಮಗ್ರ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.
ಅಲ್ಲದೆ, ಮೃತ ಕಾರ್ಮಿಕರ ಕುಟುಂಬಗಳಿಗೆ ಅಗತ್ಯವಿರುವ ಎಲ್ಲ ನೆರವು ಒದಗಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಘಟನೆಯನ್ನು ತುರ್ತಾಗಿ ನಿರ್ವಹಿಸುವುದರ ಜೊತೆಗೆ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಮತ್ತು ಸಹಾಯ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.





