ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮತ್ತು ನಟ ಧನ್ವೀರ್ ಗೌಡ ನಡುವಿನ ವಿವಾದ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ವಿಜಯಲಕ್ಷ್ಮಿ ಅವರ ಮ್ಯಾನೇಜರ್ ನಾಗರಾಜ್‌ಗೆ ದೂರವಾಣಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ನಿಜ ಎಂದು ನಟ ಧನ್ವೀರ್ ಆರ್‌ಆರ್ ನಗರ ಪೊಲೀಸರ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ಅವರ ಕುರಿತು ನಾನು ಮಾತನಾಡಿಲ್ಲ ಎಂದು ಹೇಳಿದ್ದಾರೆ.
ವಿವಾದಕ್ಕೆ ಸಂಬಂಧಿಸಿದಂತೆ ಆರ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾದ ಧನ್ವೀರ್ ಅವರನ್ನು ಠಾಣೆಯ ಇನ್‌ಸ್ಪೆಕ್ಟರ್ ಕುಮಾರಸ್ವಾಮಿ ವಿಚಾರಣೆ ನಡೆಸಿದರು. ಈ ವೇಳೆ ನಾಗರಾಜ್‌ಗೆ ಕರೆ ಮಾಡಿ ನಿಂದಿಸಿರುವುದನ್ನು ಒಪ್ಪಿಕೊಂಡ ಧನ್ವೀರ್, ತಮ್ಮ ವರ್ತನೆಗೆ ಕ್ಷಮೆ ಕೋರಿದ್ದಾರೆ ಎಂದು ತಿಳಿದುಬಂದಿದೆ.
ನಾಗರಾಜ್‌ಗೆ ಬೈದಿದ್ದು ನಿಜ ಎಂದ ಧನ್ವೀರ್
ಪೊಲೀಸರ ವಿಚಾರಣೆ ವೇಳೆ ಮಾತನಾಡಿರುವ ಧನ್ವೀರ್, ವಿಜಯಲಕ್ಷ್ಮಿ ಅವರ ಮ್ಯಾನೇಜರ್ ನಾಗರಾಜ್‌ಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಈ ವಿಚಾರದಲ್ಲಿ ತಮ್ಮಿಂದ ತಪ್ಪಾಗಿದೆ ಎಂದು ಹೇಳಿ ಕ್ಷಮಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ನಾನು ನಾಗರಾಜ್‌ಗೆ ಕರೆ ಮಾಡಿ ಬೈದಿದ್ದು ಸತ್ಯ. ಅವಾಚ್ಯ ಶಬ್ದಗಳನ್ನು ಬಳಸಿರುವುದೂ ನಿಜ. ನನ್ನಿಂದ ತಪ್ಪಾಗಿದೆ, ದಯವಿಟ್ಟು ಕ್ಷಮಿಸಿ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.
ಇದೇ ವೇಳೆ ನಾಗರಾಜ್ ಮತ್ತು ವಿಜಯಲಕ್ಷ್ಮಿ ತಮ್ಮ ಮನೆಗೆ ಬಂದು ಗಲಾಟೆ ಮಾಡಿದ್ದರು. ಅಲ್ಲದೆ, ತಮ್ಮ ತಂದೆ-ತಾಯಿಯವರನ್ನು ಅವಾಚ್ಯವಾಗಿ ನಿಂದಿಸಿದ್ದರು. ಇದರಿಂದ ಆಕ್ರೋಶಗೊಂಡು ನಾಗರಾಜ್‌ಗೆ ಬೈದಿದ್ದಾಗಿ ಧನ್ವೀರ್ ವಿಚಾರಣೆ ವೇಳೆ ಸಮರ್ಥಿಸಿಕೊಂಡಿದ್ದಾರೆ ಎನ್ನಲಾಗಿದೆ.
ಡಿಕೆಶಿ, ಝೈದ್ ಖಾನ್ ಬಗ್ಗೆ ಮಾತನಾಡಿಲ್ಲ!
ಇನ್ನು ಈ ವಿವಾದದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಚಿವ ಜಮೀರ್ ಅಹಮದ್ ಖಾನ್ ಅವರ ಪುತ್ರ ಝೈದ್ ಖಾನ್ ಕುರಿತು ಮಾತನಾಡಿಲ್ಲ ಎಂದು ಧನ್ವೀರ್ ಹೇಳಿದ್ದಾರೆ.
ಆಡಿಯೋ ಮತ್ತು ವಿಡಿಯೋದಲ್ಲಿ ಕೇಳಿಬರುತ್ತಿರುವ ಕೆಲವು ಮಾತುಗಳು ತಮ್ಮದಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಡಿಕೆ ಶಿವಕುಮಾರ್ ಹಾಗೂ ಝೈದ್ ಖಾನ್ ಬಗ್ಗೆ ತಾವು ಯಾವುದೇ ಹೇಳಿಕೆ ನೀಡಿಲ್ಲ ಎಂದಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಎಐ ತಂತ್ರಜ್ಞಾನ ಬಳಸಿ ಸೃಷ್ಟಿಸಿರುವುದಾಗಿ ಆರೋಪಿಸಿದ್ದಾರೆ.
ಹಣಕಾಸಿನ ವಿಚಾರವೇ ಗಲಾಟೆಗೆ ಕಾರಣ?
ಧನ್ವೀರ್ ಮತ್ತು ವಿಜಯಲಕ್ಷ್ಮಿ ನಡುವಿನ ಸಂಘರ್ಷಕ್ಕೆ ಹಣಕಾಸಿನ ವಿಚಾರವೇ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಪೊಲೀಸರ ಮುಂದೆ ಪ್ರತಿಕ್ರಿಯಿಸಿರುವ ಧನ್ವೀರ್, ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಲೆಕ್ಕ ನೀಡಲು ತಾವು ಸಿದ್ಧರಿದ್ದೇವೆ. ಆದರೆ, ಸಂಬಂಧಪಟ್ಟವರು ಲೆಕ್ಕ ಕೇಳಲು ಅಥವಾ ಚರ್ಚೆಗೆ ಬರಲು ಮುಂದಾಗುತ್ತಿಲ್ಲ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.
ತಮ್ಮ ವಿರುದ್ಧ ಕೆಟ್ಟ ಹೆಸರು ತರಲು ಉದ್ದೇಶಪೂರ್ವಕವಾಗಿ ಆಡಿಯೋ ಸೃಷ್ಟಿಸಲಾಗಿದೆ ಎಂಬ ಆರೋಪವನ್ನೂ ಅವರು ಮಾಡಿದ್ದಾರೆ. ಈ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ಗೊಂದಲವೇ ಇಬ್ಬರ ನಡುವಿನ ವಾಗ್ವಾದಕ್ಕೆ ಕಾರಣವಾಗಿದೆ ಎಂದು ಧನ್ವೀರ್ ಹೇಳಿದ್ದಾರೆ.
ಎಫ್‌ಐಆರ್ ರದ್ದತಿಗೆ ಹೈಕೋರ್ಟ್ ಮೊರೆ
ಈ ಪ್ರಕರಣದಲ್ಲಿ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಧನ್ವೀರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಪೊಲೀಸರ ಮುಂದೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿತ್ತು. ಈ ಹಿನ್ನೆಲೆ ಅವರು ಆರ್‌ಆರ್ ನಗರ ಪೊಲೀಸ್ ಠಾಣೆಗೆ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ.





