ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತಿಕಾರವಾಗಿ ಉಡುಪಿಯಲ್ಲಿ ಗುರುವಾರ ರಾತ್ರಿ ಆಟೋ ಚಾಲಕ ಅಬ್ಬೂಬಕ್ಕರ್ ಎಂಬವರ ಮೇಲೆ ನಡೆದ ಕೊಲೆ ಯತ್ನದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಅವರಿಂದ ವಿವರವಾದ ಮಾಹಿತಿ ಕಲೆಹಾಕಿದ್ದಾರೆ.
ಈ ಘಟನೆಯ ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಜಿಲ್ಲೆಯ ಪ್ರಸ್ತುತ ಪರಿಸ್ಥಿತಿ ಮತ್ತು ಪೊಲೀಸ್ ಇಲಾಖೆ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಪಡೆದರು. ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಸಚಿವರು, ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆಯಿಂದ ತಕ್ಷಣದ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ಘಟನೆಯ ತನಿಖೆಯನ್ನು ತ್ವರಿತಗೊಳಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲು ಸೂಚಿಸಿದ್ದಾರೆ.





