ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ಮೇ ತಿಂಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ವರುಣನ ಆರ್ಭಟ ತೀವ್ರಗೊಂಡಿದೆ. ಕೆಲ ದಿನಗಳ ಕಾಲ ಬಿಡುವು ಕೊಟ್ಟಿದ್ದ ಮಳೆ ಈಗ ಮತ್ತೆ ತನ್ನ ರೌದ್ರರೂಪ ತೋರಿಸುತ್ತಿದೆ. ವಾಯುಭಾರ ಕುಸಿತದಿಂದಾಗಿ ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರ ಸೈಕ್ಲೋನ್ ಎಫೆಕ್ಟ್ ಕರ್ನಾಟಕದ ಮೇಲೂ ಪರಿಣಾಮ ಬೀರುತ್ತಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಯೆಲ್ಲೋ ಅಲರ್ಟ್ ಘೋಷಣೆ
ಕೇಂದ್ರ ಹವಾಮಾನ ಇಲಾಖೆಯು ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಗುಡುಗು ಮಿಂಚಿನೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಮತ್ತು ಕೊಡಗು ಜಿಲ್ಲೆಗಳಲ್ಲೂ ಮಳೆಯ ಆರ್ಭಟ ಮುಂದುವರೆದಿದೆ. ಈ ಜಿಲ್ಲೆಗಳಿಗೆ ಮುಂಜಾಗೃತ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆಯು ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಿದೆ. ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿ.ಮೀ. ಇದ್ದು, ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಮೀನುಗಾರಿಕೆಗೆ ತೆರಳದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಬೆಂಗಳೂರಿನಲ್ಲೂ ಮಳೆಯ ಸಾಧ್ಯತೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗುವ ಸಂಭವವಿದೆ. ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಇಂದು ಭಾರೀ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ಮುನ್ಸೂಚ ನೀಡಿದೆ. ಈ ಮಳೆಯಿಂದ ಜನಜೀವನದ ಮೇಲೆ ತೀವ್ರ ಪರಿಣಾಮ ಬೀರಬಹುದು ಎಂದು ಎಚ್ಚರಿಕೆ ನೀಡಲಾಗಿದೆ.
ರಾಜ್ಯಾದ್ಯಂತ ಮಳೆಯ ಎಚ್ಚರಿಕೆ
ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಮಳೆಯ ಎಚ್ಚರಿಕೆ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯ ಸೂಚನೆ ಇದೆ. ಇತರ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಬೀದರ್, ಬಾಗಲಕೋಟೆ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಮತ್ತು ಯಾದಗಿರಿಯಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯನ್ನು ಗಂಭೀರವಾಗಿ ಪರಿಗಣಿಸಿ, ಜನರು ಸುರಕ್ಷಿತ ಸ್ಥಳಗಳಲ್ಲಿ ಉಳಿಯುವುದು ಮುಖ್ಯ. ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ತುಂಬುವ ಸಾಧ್ಯತೆ ಇದ್ದು, ಪ್ರಯಾಣಿಕರು ಎಚ್ಚರಿಕೆಯಿಂದ ಇರಬೇಕು. ಜಿಲ್ಲಾಡಳಿತಗಳು ತುರ್ತು ಸಂದರ್ಭಗಳಿಗೆ ಸಿದ್ಧವಾಗಿರುವಂತೆ ಸೂಚನೆ ನೀಡಲಾಗಿದೆ.