ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯ ಆರ್ಭಟ ಮುಂದುವರಿದಿದೆ. ಪಶ್ಚಿಮ ಘಟ್ಟಗಳಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ತುಂಗಾ ಮತ್ತು ಭದ್ರಾ ನದಿಗಳು ಅಪಾಯದ ಮಟ್ಟವನ್ನು ಮೀರಿ ಉಕ್ಕಿ ಹರಿಯುತ್ತಿವೆ. ಶೃಂಗೇರಿಯಲ್ಲಿ ನೆರೆ ಆತಂಕ ಸೃಷ್ಟಿಯಾಗಿದ್ದು, ಶೃಂಗೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಮುಂಜಾಗ್ರತೆಯಾಗಿ ಶಾಲೆಗಳು ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.
ಶೃಂಗೇರಿಯಲ್ಲಿ ತುಂಗಾ ನದಿಯ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದ್ದು, ಶಾರದಾ ಮಠಕ್ಕೆ ಸಂಪರ್ಕಿಸುವ ಪರ್ಯಾಯ ಮಾರ್ಗ ಜಲಾವೃತವಾಗಿದೆ. ಗಾಂಧಿ ಮೈದಾನದಂತಹ ಪಾರ್ಕಿಂಗ್ ಪ್ರದೇಶಗಳಲ್ಲಿ ನದಿಯ ನೀರು ನುಗ್ಗುವ ಆತಂಕ ಎದುರಾಗಿದೆ. ಶೃಂಗೇರಿ ದೇವಾಲಯದ ಸಮೀಪವಿರುವ ಕಪ್ಪೆ ಶಂಕರ ದೇವಾಲಯ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಮಳೆಯ ತೀವ್ರತೆ ಮುಂದುವರಿದರೆ ಶಾರದಾ ಮಠದ ಸುತ್ತಮುತ್ತಲಿನ ಇನ್ನಷ್ಟು ಪ್ರದೇಶಗಳು ಜಲಾವೃತವಾಗುವ ಸಾಧ್ಯತೆ ಇದೆ. ಜಿಲ್ಲಾಡಳಿತವು ಸ್ಥಳೀಯರಿಗೆ ಮತ್ತು ಪ್ರವಾಸಿಗರಿಗೆ ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಿದೆ.
ಗುಡ್ಡ ಕುಸಿತದಿಂದ ರಾಷ್ಟ್ರೀಯ ಹೆದ್ದಾರಿ 169 ಸ್ಥಗಿತ
ಕೆರೆಕಟ್ಟೆ ಸಮೀಪದ ಶೃಂಗೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿತದಿಂದ ರಸ್ತೆಗೆ ಮಣ್ಣು ಮತ್ತು ಕಲ್ಲುಬಂಡೆಗಳು ಬಿದ್ದಿವೆ. ಇದರಿಂದ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪೊಲೀಸರು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಮತ್ತು ಸ್ಥಳೀಯರು ರಸ್ತೆಯ ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ, ನಿರಂತರ ಮಳೆಯಿಂದ ತೆರವು ಕಾರ್ಯ ಕಷ್ಟಕರವಾಗಿದೆ. ರಸ್ತೆಯ ಇಕ್ಕೆಲಗಳಲ್ಲಿ ಗುಡ್ಡ ಕುಸಿತ ತಡೆಗಟ್ಟಲು ಇರಿಸಲಾಗಿದ್ದ ಕಬ್ಬಿಣದ ತಡೆಗೋಡೆಗಳೂ ಕುಸಿತಕ್ಕೆ ಒಳಗಾಗಿವೆ.
ಭದ್ರಾ ನದಿಯೂ ಅಪಾಯದ ಮಟ್ಟದಲ್ಲಿ
ಕಳಸ ಭಾಗದಲ್ಲಿ ಭಾರೀ ಮಳೆಯಿಂದ ಭದ್ರಾ ನದಿಯೂ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ. ಕಳಸ-ಹೊರನಾಡು ರಸ್ತೆಯ ಹೆಬ್ಬೊಲೆಯ ಸೇತುವೆ ಜಲಾವೃತವಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಎನ್.ಆರ್.ಪುರ, ಮತ್ತು ಮೂಡಿಗೆರೆ ತಾಲೂಕುಗಳಲ್ಲಿಯೂ ಭಾರೀ ಮಳೆಯಿಂದಾಗಿ ರಸ್ತೆಗಳು ಮತ್ತು ಕೃಷಿಭೂಮಿಗಳು ಜಲಾವೃತವಾಗಿವೆ. ಜಿಲ್ಲೆಯಾದ್ಯಂತ ಸರಾಸರಿ 32.3 ಮಿಮೀ ಮಳೆಯಾಗಿದ್ದು, ಸಾಮಾನ್ಯ 8.5 ಮಿಮೀಗಿಂತ ಹೆಚ್ಚಾಗಿದೆ.
ಮಳೆಯಿಂದ ಆಗಿರುವ ಹಾನಿ
ಚಿಕ್ಕಮಗಳೂರು ತಾಲೂಕಿನ ದೇವದಾನ ಗ್ರಾಮದಲ್ಲಿ ಬಿರುಗಾಳಿ ಸಹಿತ ಮಳೆಯಿಂದ ಮರವೊಂದು ಷರೀಫ್ ಎಂಬುವರ ಮನೆಯ ಮೇಲೆ ಬಿದ್ದು, ಮನೆ ಸಂಪೂರ್ಣ ಜಖಂಗೊಂಡಿದೆ. ದವಸ ಧಾನ್ಯ, ಗೃಹೋಪಯೋಗಿ ವಸ್ತುಗಳು ನಾಶವಾಗಿವೆ. ಶೌರ್ಯ ವಿಪತ್ತು ನಿರ್ವಹಣಾ ತಂಡವು ಮರವನ್ನು ತೆರವುಗೊಳಿಸಿದೆ. ಜಿಲ್ಲೆಯಾದ್ಯಂತ ಮರಗಳು ಧರೆಗುರುಳಿ, ವಿದ್ಯುತ್ ಕಂಬಗಳು ಕುಸಿದಿರುವುದರಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕೆಲವು ಪ್ರದೇಶಗಳಲ್ಲಿ ಕೃಷಿಭೂಮಿಗಳು ಮತ್ತು ತೋಟಗಳಿಗೆ ಗಂಭೀರ ಹಾನಿಯಾಗಿದೆ.