ತೆಕ್ಕಲಕೋಟೆ: ಬಳ್ಳಾರಿ ಜಿಲ್ಲೆಯ ತೆಕ್ಕಲಕೋಟೆಯ ರಾಷ್ಟ್ರೀಯ ಹೆದ್ದಾರಿ 150A ಬೈರಾಪುರ ಬಳಿ ಶನಿವಾರ ರಾತ್ರಿ ನಡೆದ ಭೀಕರ ಅಪಘಾತದಲ್ಲಿ ಕೆಕೆಆರ್‌ಟಿಸಿ ಬಸ್ ಒಂದು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 12 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಚೌಡಸಂದ್ರ ಗ್ರಾಮದ ಬಾಲನಾಯಕ (46) ಮತ್ತು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶ್ವೇತಾ (42) ಎಂದು ಗುರುತಿಸಲಾಗಿದೆ.
ಗಾಯಗೊಂಡವರನ್ನು ಬಳ್ಳಾರಿಯ ಟ್ರಾಮಾ ಕೇರ್ ಸೆಂಟರ್‌ಗೆ ಮತ್ತು ಸಿರುಗುಪ್ಪ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಮೃತದೇಹಗಳನ್ನು ಸಿರುಗುಪ್ಪ ತಾಲೂಕು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.
ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.
ರಸ್ತೆ ಗುಂಡಿಗಳಿಂದ ಬಸ್ ಸ್ಟೇರಿಂಗ್ ಕಟ್ಟಾಗಿ ಟಿಪ್ಪರ್‌ಗೆ ಡಿಕ್ಕಿ: ತಪ್ಪಿದ ಅನಾಹುತ
ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹೊರ ಹೊಲಯದಲ್ಲಿ, ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ವಾಯುವ್ಯ ಕರ್ನಾಟಕ ಬಸ್‌ವೊಂದು ರಸ್ತೆಯ ಗುಂಡಿಗೆ ಇಳಿದ ಕಾರಣ ಸ್ಟೇರಿಂಗ್ ಕಟ್ ಆಗಿ, ಪಕ್ಕದಲ್ಲಿ ನಿಂತಿದ್ದ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ. ಈ ಘಟನೆ ಶನಿವಾರ ರಾತ್ರಿ ನಡೆದಿದ್ದು, ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
ನರಗುಂದದಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಬಸ್, ರಾಷ್ಟ್ರೀಯ ಹೆದ್ದಾರಿಯ ಗುಂಡಿಗೆ ಇಳಿದಾಗ ಸ್ಟೇರಿಂಗ್ ಬಾರ್ ಕಟ್ ಆಗಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿ, ಬಸ್ ಪಕ್ಕದಲ್ಲಿ ನಿಂತಿದ್ದ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ. ಬಸ್‌ನ ವೇಗವು ನಿಯಂತ್ರಿತವಾಗಿತ್ತು ಎಂಬ ಕಾರಣದಿಂದ ದೊಡ್ಡ ಪ್ರಮಾಣದ ದುರಂತ ತಪ್ಪಿದೆ. ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಪ್ರಾಣಹಾನಿಯಾಗಿಲ್ಲ.
ನವಲಗುಂದ ಪೊಲೀಸ್ ಠಾಣೆಯಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.