ಬೆಳ್ತಂಗಡಿ: ಧರ್ಮಸ್ಥಳದ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನು ಉಡುಪಿ ಪೊಲೀಸರು ಇಂದು ಆತನ ಉಜಿರೆಯ ನಿವಾಸದಿಂದ ವಶಕ್ಕೆ ಪಡೆದಿದ್ದಾರೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಹೇಳನ ಮಾಡಿರುವ ಆರೋಪದ ಮೇಲೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ವಶಕ್ಕೆ ಪಡೆದು ಆತನದ್ದೇ ಕಾರಿನಲ್ಲಿ ಕರೆದೊಯ್ದಿದ್ದಾರೆ.
ಈ ವೇಳೆ ತಿಮರೋಡಿಯ ಬೆಂಬಲಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಘೋಷಣೆ ಕೂಗಿ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಬಂಧನದ ಸಂದರ್ಭದಲ್ಲಿ ಮಹೇಶ್ ಶೆಟ್ಟಿ, “ನನ್ನ ಜೀವಕ್ಕೆ ಏನಾದರೂ ಅಪಾಯವಾದರೆ, ಅದಕ್ಕೆ ರಾಜ್ಯ ಸರ್ಕಾರ ಮತ್ತು ಬಿಜೆಪಿಯೇ ಕಾರಣವಾಗುತ್ತದೆ,” ಎಂದು ಕೂಗಾಡಿದ್ದಾರೆ.
ಏನಿದು ಪ್ರಕರಣ?
ಆಗಸ್ಟ್ 16ರಂದು ಮಹೇಶ್ ಶೆಟ್ಟಿ ತಿಮರೋಡಿಯ ಫೇಸ್‌ಬುಕ್ ಪೇಜ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ತೇಜೋವಧೆ ಮಾಡಿರುವ ಆರೋಪವಿದೆ. ಈ ಕುರಿತು ಉಡುಪಿ ಗ್ರಾಮಾಂತರ ಬಿಜೆಪಿ ಮಂಡಲಾಧ್ಯಕ್ಷ ರಾಜೀವ ಕುಲಾಲ್ ದೂರು ಸಲ್ಲಿಸಿದ್ದರು. ದೂರಿನ ಆಧಾರದ ಮೇಲೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ತಿಮರೋಡಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 352 ಮತ್ತು 353(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.





