ಬಳ್ಳಾರಿ: ಪ್ರಿಯಕರ ಮದುವೆಗೆ ಒಪ್ಪದ ಹಿನ್ನೆಲೆಯಲ್ಲಿ ಮನನೊಂದು ಮಹಿಳೆಯೊಬ್ಬರು ಕಣ್ಣೀರಿಡುತ್ತಲೇ ವಿಡಿಯೋ ಮಾಡುತ್ತಾ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬಳ್ಳಾರಿಯ ಹುಸೇನ್ ನಗರದಲ್ಲಿ ನಡೆದಿದೆ. ಮುನ್ನಿ (23) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಗುರುತಿಸಲಾಗಿದೆ.
ಮುನ್ನಿಗೆ ಈಗಾಗಲೇ ಮದುವೆಯಾಗಿದ್ದು, ಮಕ್ಕಳಿದ್ದಾರೆ. ಆದರೆ ಕೆಲವು ವೈಯಕ್ತಿಕ ಕಾರಣಗಳಿಂದ ಪತಿಯಿಂದ ದೂರವಿದ್ದು, ಪ್ರತ್ಯೇಕವಾಗಿ ಜೀವನ ನಡೆಸುತ್ತಿದ್ದಳು ಎನ್ನಲಾಗಿದೆ. ಈ ನಡುವೆ ಮೊಹಮ್ಮದ್ ಶೇಖ್ ಎಂಬ ಯುವಕನೊಂದಿಗೆ ಪರಿಚಯವಾಗಿದ್ದು, ಆ ಸ್ನೇಹ ಕ್ರಮೇಣ ಪ್ರೀತಿಯಾಗಿ ಬದಲಾಗಿದೆ ಎಂದು ತಿಳಿದುಬಂದಿದೆ. ಪರಸ್ಪರ ಸಂಪರ್ಕದಲ್ಲಿದ್ದು, ನಿರಂತರವಾಗಿ ಭೇಟಿ ಮಾಡುತ್ತಿದ್ದರು ಎನ್ನಲಾಗಿದೆ.
ಮುನ್ನಿ, ಮೊಹಮ್ಮದ್ ಶೇಖ್ ಅವರನ್ನು ಮದುವೆಯಾಗುವಂತೆ ಒತ್ತಾಯಿಸಲು ಆರಂಭಿಸಿದ್ದಾಳೆ. ಆದರೆ ಈ ವಿಚಾರದಲ್ಲಿ ಯುವಕ ನಿರಾಕರಿಸಿದ್ದಾನೆ ಎನ್ನಲಾಗಿದೆ. ಇದೇ ವಿಚಾರವಾಗಿ ಇಬ್ಬರ ನಡುವೆ ತೀವ್ರ ಜಗಳಗಳು ನಡೆದಿದ್ದು, ಇದರಿಂದ ಮಾನಸಿಕವಾಗಿ ಕುಗ್ಗಿಹೋಗಿದ್ದಳು ಎಂದು ಹೇಳಲಾಗುತ್ತಿದೆ.
ಘಟನೆ ನಡೆದ ದಿನ, ಮುನ್ನಿ ತನ್ನ ಮನೆಯಲ್ಲೇ ಒಬ್ಬಳೇ ಇದ್ದ ಸಂದರ್ಭ ಈ ನಿರ್ಧಾರ ತೆಗೆದುಕೊಂಡಿದ್ದಾಳೆ. ಆತ್ಮಹತ್ಯೆಗೂ ಮುನ್ನ ತನ್ನ ಮೊಬೈಲ್ ಫೋನ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಿದ್ದು, ಅದರಲ್ಲಿ ಕಣ್ಣೀರಿಡುತ್ತಲೇ ತನ್ನ ನೋವು, ಪ್ರಿಯಕರನ ನಿರಾಕರಿಸಿದ್ದ ಬಗ್ಗೆ ಹೇಳಿಕೊಂಡಿದ್ದಾಳೆ. ಆ ಬಳಿಕ ಮನೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ವಿಡಿಯೋ ವಿಷಯ ತಿಳಿದು ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಸಾವಿಗೆ ಮೊಹಮ್ಮದ್ ಶೇಖ್ ಕಾರಣ ಎಂದು ಆರೋಪಿಸಿದ್ದಾರೆ. ಅವರ ಪ್ರಕಾರ, ಮದುವೆಯ ಭರವಸೆ ನೀಡಿ ಬಳಿಕ ನಿರಾಕರಿಸಿದ ಕಾರಣದಿಂದಲೇ ಮುನ್ನಿ ಇಂತಹ ನಿರ್ಧಾರಕ್ಕೆ ಬಂದಿದ್ದಾಳೆ. ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.
ಮಾಹಿತಿ ಪಡೆದ ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವಿಡಿಯೋ ಹಾಗೂ ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.





