ಬೆಂಗಳೂರು: ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಭಾಷಣ ಓದದೆ ಹೊರನಡೆದ ಬೆನ್ನಲ್ಲೇ, ಕಾಂಗ್ರೆಸ್ ಶಾಸಕರು ಅವರನ್ನು ಅಡ್ಡಗಟ್ಟಿದ ಘಟನೆಯನ್ನು ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ಖಂಡಿಸಿದ್ದಾರೆ. ಇದು ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಒಂದು ಕರಾಳ ದಿನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಆರ್. ಅಶೋಕ್, ರಾಜ್ಯಪಾಲರು ಸಂವಿಧಾನದ ಅಡಿಯಲ್ಲಿ ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ. ಭಾಷಣದ ಪ್ರತಿಯನ್ನು ಓದದೆ ಹೊರಹೋಗುವ ಸಂಪೂರ್ಣ ಅಧಿಕಾರ ಸಂವಿಧಾನ ಅವರಿಗೆ ನೀಡಿದೆ. ಇದರಲ್ಲಿ ತಪ್ಪೇನಿದೆ ? ಆದರೆ, ಅವರನ್ನು ದಾರಿಯಲ್ಲಿ ಅಡ್ಡಗಟ್ಟಿ ಅಗೌರವ ತೋರುವುದು ಕಾಂಗ್ರೆಸ್ ಪಕ್ಷದ ಗೂಂಡಾಗಿರಿಯನ್ನು ಪ್ರದರ್ಶಿಸುತ್ತದೆ ಎಂದು ಕಿಡಿಕಾರಿದರು.
ರಾಜ್ಯಪಾಲರಿಗೆ ಅಡ್ಡಿಪಡಿಸಿದ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಕಾಂಗ್ರೆಸ್‌ನ ಇತರ ಶಾಸಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಶೋಕ್ ಒತ್ತಾಯಿಸಿದ್ದಾರೆ. ಸದನದ ಘನತೆಗೆ ಕುಂದು ತಂದವರನ್ನು ಶಾಸಕ ಸ್ಥಾನದಿಂದ ಹೊರಹಾಕಬೇಕು. ಈ ಬಗ್ಗೆ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಅಧಿಕೃತ ಪತ್ರ ಬರೆದು ದೂರು ನೀಡಲಾಗುವುದು ಎಂದು ತಿಳಿಸಿದರು. ಇದೇ ವೇಳೆ, ಸರ್ಕಾರದ ಅನೇಕ ಬಿಲ್‌ಗಳಿಗೆ ರಾಜ್ಯಪಾಲರು ಸಹಿ ಹಾಕುವಾಗ ಸರಿ ಇದ್ದರು, ಈಗ ಕೇಂದ್ರವನ್ನು ಟೀಕಿಸುವ ಸಾಲುಗಳನ್ನು ಓದದಿದ್ದಾಗ ಕೆಟ್ಟವರಾದರಾ ? ಎಂದು ಕಾಂಗ್ರೆಸ್‌ಗೆ ನೇರ ಪ್ರಶ್ನೆ ಹಾಕಿದರು.
ಕಾಂಗ್ರೆಸ್ ಸರ್ಕಾರವು ಲೋಕಭವನವನ್ನು (ರಾಜಭವನ) ಕಾಂಗ್ರೆಸ್ ಭವನವನ್ನಾಗಿ ಮಾಡಲು ಹೊರಟಿದೆ. ದೆಹಲಿಯ ಹೈಕಮಾಂಡ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು ಇಂತಹ ಕುತಂತ್ರಗಳನ್ನು ನಡೆಸಲಾಗುತ್ತಿದೆ ಎಂದು ಅಶೋಕ್ ಆರೋಪಿಸಿದರು.
ಇನ್ನೊಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ಕಾಂಗ್ರೆಸ್ ಸರ್ಕಾರವು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ. ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಮತ್ತು ದ್ವೇಷದ ರಾಜಕಾರಣಕ್ಕಾಗಿ ಪವಿತ್ರವಾದ ಸದನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ನರೇಗಾ ಯೋಜನೆಯಲ್ಲಿ ಕೇಂದ್ರ ತಂದ ಸುಧಾರಣೆಗಳನ್ನು ಸಹಿಸಲಾಗದೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ ಎಂದು ಟೀಕಿಸಿದರು. 140 ಶಾಸಕರ ಸಂಖ್ಯಾಬಲದ ದರ್ಪದಿಂದ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ ಎಂದು ಬಿ.ಬೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.





