ಚಾಮರಾಜನಗರ, ಜನವರಿ 29: 2018ರಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ (ಎ1) ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಿ ಹನೂರು ತಹಶೀಲ್ದಾರ್ ಚೈತ್ರಾ ಗುರುವಾರ ಆದೇಶ ಹೊರಡಿಸಿದ್ದಾರೆ. ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗುವ ಹಾಗೂ ಗಲಭೆ ಸಂಭವಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಸುಳ್ವಾಡಿ ವಿಷ ಪ್ರಸಾದ ದುರಂತವು ರಾಜ್ಯದ ಇತಿಹಾಸದಲ್ಲೇ ಅತ್ಯಂತ ಭೀಕರ ಘಟನೆಯಾಗಿ ದಾಖಲಾದ ಪ್ರಕರಣವಾಗಿದೆ. 2018ರಲ್ಲಿ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಕಿಚ್ಚಗುತ್ತಿ ಮಾರಮ್ಮ ದೇವಾಲಯದಲ್ಲಿ ಗೋಪುರ ನಿರ್ಮಾಣದ ಶಂಕುಸ್ಥಾಪನಾ ಕಾರ್ಯಕ್ರಮದ ಸಂದರ್ಭದಲ್ಲಿ ವಿತರಿಸಲಾದ ವಿಷಮಿಶ್ರಿತ ಪ್ರಸಾದ ಸೇವನೆಯಿಂದ ಬರೋಬ್ಬರಿ 17 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದಲ್ಲದೆ 100ಕ್ಕೂ ಹೆಚ್ಚು ಭಕ್ತರು ಗಂಭೀರವಾಗಿ ಅಸ್ವಸ್ಥಗೊಂಡಿದ್ದರು.
ಈ ಪ್ರಕರಣದ ತನಿಖೆಯನ್ನು ದಕ್ಷಿಣ ವಲಯ ಐಜಿಪಿ ಶರತ್ ಚಂದ್ರ ಅವರ ಮಾರ್ಗದರ್ಶನದಲ್ಲಿ ಕೊಳ್ಳೇಗಾಲ ಡಿಎಸ್‌ಪಿ ಪುಟ್ಟಮಾದಯ್ಯ ನೇತೃತ್ವದಲ್ಲಿ ಮೂವರು ವಿಶೇಷ ತಂಡಗಳು ನಡೆಸಿದ್ದವು. ತನಿಖೆಯ ವೇಳೆ ವಿಷಪ್ರಾಶನದಲ್ಲಿ ಭಾಗಿಯಾಗಿದ್ದ ರಾಜಮ್ಮ ಅವರ ಹೇಳಿಕೆಯ ಆಧಾರದ ಮೇಲೆ ಹನೂರು ತಾಲೂಕಿನ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಒಟ್ಟು ಆರು ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ದೇವಾಲಯದ ಟ್ರಸ್ಟಿಗಳಾದ ಚಿನ್ನಪ್ಪಿ, ಮಹದೇವ್ ಅಲಿಯಾಸ್ ಮಾದೇಶ್ ಮತ್ತು ಇಮ್ಮಡಿ ಮಹದೇವಸ್ವಾಮಿ ಸೇರಿದಂತೆ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.
ಈ ಪೈಕಿ ಎ1 ಆರೋಪಿ ಇಮ್ಮಡಿ ಮಹದೇವಸ್ವಾಮಿ ಇತ್ತೀಚೆಗೆ ಜಾಮೀನು ಪಡೆದು ಹೊರಬಂದಿದ್ದು, ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠದಲ್ಲಿ ಆಯೋಜಿಸಿದ್ದ ಲಿಂಗೈಕ್ಯ ಶ್ರೀ ಮಹದೇವಸ್ವಾಮಿಗಳ ವಾರ್ಷಿಕ ಆರಾಧನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಂದಾಗಿದ್ದರು. ಆದರೆ ಈ ವಿಚಾರ ತಿಳಿದ ತಕ್ಷಣವೇ ಸುಳ್ವಾಡಿ ಪ್ರಕರಣದ ಸಂತ್ರಸ್ತ ಕುಟುಂಬಗಳು, ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದರು.
“ಆರೋಪಿ ಮಠದ ಆವರಣಕ್ಕೆ ಪ್ರವೇಶಿಸಿದಲ್ಲಿ ಗಲಭೆ ಸಂಭವಿಸುವ ಸಾಧ್ಯತೆ ಇದೆ. ಇದರಿಂದ ಭಕ್ತಾಧಿಗಳ ಪ್ರಾಣಾಪಾಯ, ಮಠದ ಆಸ್ತಿಗೆ ಹಾನಿ ಹಾಗೂ ಸಾರ್ವಜನಿಕ ಶಾಂತಿಗೆ ಧಕ್ಕೆಯಾಗಬಹುದು,” ಎಂದು ಆತಂಕ ವ್ಯಕ್ತಪಡಿಸಿದ ಸಂತ್ರಸ್ತರು ಹಾಗೂ ಭಕ್ತರು ಹನೂರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿದ ತಹಶೀಲ್ದಾರ್ ಚೈತ್ರಾ, ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟ ಹಾಗೂ ಶ್ರೀ ಸಾಲೂರು ಬೃಹನ್ಮಠದ ಆವರಣ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸುವಂತೆ ಆದೇಶ ಹೊರಡಿಸಿದರು.
ಈ ಆದೇಶದ ಹಿನ್ನೆಲೆಯಲ್ಲಿ ಪೊಲೀಸರು ಇಮ್ಮಡಿ ಮಹದೇವಸ್ವಾಮಿಯನ್ನು ಬೆಟ್ಟದಿಂದ ಹಿಂದಕ್ಕೆ ಕಳುಹಿಸಿ ಬೆಂಗಳೂರಿಗೆ ವಾಪಸ್ ಕಳಿಸಿದ್ದಾರೆ. ಸದ್ಯ ಮಲೆ ಮಹದೇಶ್ವರ ಬೆಟ್ಟ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.





