ಮೈಸೂರು: ಮೈಸೂರು ನಗರದ ಹೊರವಲಯದಲ್ಲಿರುವ ಹಳೆಯ ಕೇಸರೆಯ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಒಂದರ ಹಿಂದೆ ಒಂದಾಗಿ ನಾಲ್ಕು ಗೋದಾಮುಗಳು ಬೆಂಕಿಗೆ ಆಹುತಿಯಾಗಿವೆ. ಮೈಸೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲೇ ಈ ಗೋದಾಮುಗಳು ಇರುವುದರಿಂದ, ಬೆಂಕಿ ವೇಗವಾಗಿ ಹರಡಿದಿದೆ..
ಘಟನೆಯಲ್ಲಿ ಹಳೆಯ ಹಾಗೂ ಬಳಕೆಯಲ್ಲಿಲ್ಲದ ವಸ್ತುಗಳನ್ನು ಸಂಗ್ರಹಿಸಿ ಇಡಲಾಗಿದ್ದ ಗೋದಾಮುಗಳು ಸಂಪೂರ್ಣವಾಗಿ ಹೊತ್ತಿ ಉರಿದಿವೆ. ಪ್ಲಾಸ್ಟಿಕ್ ವಸ್ತುಗಳು, ಹಳೆಯ ಪೀಠೋಪಕರಣಗಳು, ಕಬ್ಬಿಣದ ಸಾಮಗ್ರಿಗಳು ಸೇರಿದಂತೆ ಅನೇಕ ವಸ್ತುಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ.
ಬೆಂಕಿ ಕಾಣಿಸಿಕೊಂಡ ತಕ್ಷಣವೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಮಾಹಿತಿ ಪಡೆದ ಕೆಲವೇ ನಿಮಿಷಗಳಲ್ಲಿ ಮೈಸೂರು ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಿಂದ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದವು. ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹಲವು ಗಂಟೆಗಳ ಕಾಲ ಹರಸಾಹಸ ಪಟ್ಟಿದ್ದಾರೆ.
ಗೋದಾಮುಗಳ ಸುತ್ತಮುತ್ತ ದಟ್ಟ ಹೊಗೆ ಆವರಿಸಿದ್ದರಿಂದ ಮೈಸೂರು–ಬೆಂಗಳೂರು ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಪ್ರಾಥಮಿಕ ತನಿಖೆಯ ಪ್ರಕಾರ, ಕುಡಿದ ಮತ್ತಿನಲ್ಲಿ ಕೆಲ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಅಗ್ನಿ ಅವಘಡದ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ಹಾಗೂ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಈ ಘಟನೆ ಮೈಸೂರಿನ ಎನ್‌ಆರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ..





