ವಿಚ್ಛೇದನದ ಬಳಿಕ ದುನಿಯಾ ವಿಜಯ್ ಹೇಳಿದ್ದೇನು?

Web Photo Editor 2026 07 31T143756.100

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ಅವರ ಪತ್ನಿ ನಾಗರತ್ನ ನಡುವಿನ ಸುದೀರ್ಘ ವೈವಾಹಿಕ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚ್ಛೇದನ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ದುನಿಯಾ ವಿಜಯ್ ಹಾಗೂ ನಾಗರತ್ನ ಅವರಿಗೆ ವಿಚ್ಛೇದನ ಮಂಜೂರು ಮಾಡಿದೆ. ಇದೇ ವೇಳೆ ನಾಗರತ್ನ ಅವರಿಗೆ ₹2 ಕೋಟಿ ಜೀವನಾಂಶ ನೀಡುವಂತೆ ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದೆ.

ನ್ಯಾಯಾಲಯದ ಆದೇಶ ಹೊರಬಂದ ಬಳಿಕ ದುನಿಯಾ ವಿಜಯ್ ಅವರು ತಮ್ಮ ಅಭಿಮಾನಿಗಳು ಹಾಗೂ ಮಾಧ್ಯಮ ಮಿತ್ರರಿಗೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ನ್ಯಾಯಾಲಯದ ಆದೇಶವನ್ನು ಗೌರವದಿಂದ ಸ್ವೀಕರಿಸಿರುವುದಾಗಿ ತಿಳಿಸಿರುವ ಅವರು, ಕಾನೂನಿನ ಮೇಲಿನ ತಮ್ಮ ನಂಬಿಕೆ ಮತ್ತಷ್ಟು ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ನ್ಯಾಯಮೂರ್ತಿಗಳಾದ ಡಿ.ಕೆ. ಸಿಂಗ್ ಹಾಗೂ ಶಾಂತಿಭೂಷಣ್ ಅವರಿದ್ದ ವಿಭಾಗೀಯ ಪೀಠದ ಆದೇಶಕ್ಕೆ ತಲೆಬಾಗುವುದಾಗಿ ವಿಜಯ್ ತಿಳಿಸಿದ್ದಾರೆ. ಪ್ರಕರಣದಲ್ಲಿ ತಮ್ಮ ಪರವಾಗಿ ವಾದಿಸಿದ ಹಿರಿಯ ಕೌನ್ಸಿಲ್ ಶ್ರೀವತ್ಸ ಹಾಗೂ ವಕೀಲರಾದ ಯುಕ್ತ ಅನಿಲ್ ಅವರಿಗೆ ಕೂಡ ಅವರು ಧನ್ಯವಾದ ಸಲ್ಲಿಸಿದ್ದಾರೆ.

ವಿಚ್ಛೇದನ ವಿಚಾರವಾಗಿ ಇನ್ನು ಮುಂದೆ ಮಾಧ್ಯಮಗಳಲ್ಲಾಗಲಿ ಅಥವಾ ಸಾರ್ವಜನಿಕವಾಗಿಯಾಗಲಿ ಯಾವುದೇ ರೀತಿಯ ಚರ್ಚೆ ನಡೆಸಲು ತಾವು ಬಯಸುವುದಿಲ್ಲ ಎಂದು ವಿಜಯ್ ಸ್ಪಷ್ಟಪಡಿಸಿದ್ದಾರೆ. ತಮ್ಮ ಹೆಣ್ಣುಮಕ್ಕಳು ಈಗ ವಯಸ್ಕರಾಗಿದ್ದು, ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನ ಹೊಂದಿದ್ದಾರೆ. ಹೀಗಾಗಿ ವೈಯಕ್ತಿಕ ದಾಂಪತ್ಯ ವಿಚಾರದಿಂದ ಅವರಿಗೆ ಯಾವುದೇ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ್ದಾರೆ.

ಮಕ್ಕಳ ಭವಿಷ್ಯ ಹಾಗೂ ಅವರ ಹಿತದೃಷ್ಟಿಯಿಂದ ನ್ಯಾಯಾಲಯ ನೀಡಿರುವ ಆದೇಶವನ್ನು ಆತ್ಮಸಾಕ್ಷಿಯಿಂದ ಸ್ವೀಕರಿಸಿರುವುದಾಗಿ ತಿಳಿಸಿರುವ ವಿಜಯ್, ಇನ್ನು ಮುಂದೆ ಹೊಸ ಬದುಕಿನ ಪ್ರಯಾಣದತ್ತ ಹೆಜ್ಜೆ ಇಡುತ್ತಿರುವುದಾಗಿ ಹೇಳಿದ್ದಾರೆ. ಅಭಿಮಾನಿಗಳ ಆಶೀರ್ವಾದ ಮತ್ತು ಹಾರೈಕೆ ಮುಂದೆಯೂ ತಮ್ಮೊಂದಿಗಿರಲಿ ಎಂದು ಮನವಿ ಮಾಡಿದ್ದಾರೆ.

ದುನಿಯಾ ವಿಜಯ್ ಹಾಗೂ ನಾಗರತ್ನ ಅವರು 1999ರಲ್ಲಿ ವಿವಾಹವಾಗಿದ್ದರು. ಈ ದಂಪತಿಗೆ ಇಬ್ಬರು ಹೆಣ್ಣುಮಕ್ಕಳು ಹಾಗೂ ಒಬ್ಬ ಗಂಡು ಮಗ ಸೇರಿದಂತೆ ಮೂವರು ಮಕ್ಕಳಿದ್ದಾರೆ. ದಾಂಪತ್ಯ ಜೀವನದಲ್ಲಿ ಹಲವು ವರ್ಷಗಳಿಂದ ಸಮಸ್ಯೆಗಳು ಉಂಟಾಗಿದ್ದು, ಈ ವಿಚಾರ ಹಲವು ಬಾರಿ ಸಾರ್ವಜನಿಕವಾಗಿ ಚರ್ಚೆಗೆ ಬಂದಿತ್ತು.

2013ರಲ್ಲಿ ದುನಿಯಾ ವಿಜಯ್ ಮೊದಲ ಬಾರಿಗೆ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಒಂದು ವರ್ಷದ ಬಳಿಕ ಆ ಅರ್ಜಿಯನ್ನು ಹಿಂಪಡೆದಿದ್ದರು. ನಂತರ 2018ರಲ್ಲಿ ಮಾನಸಿಕ ಕ್ರೌರ್ಯದ ಆಧಾರದ ಮೇಲೆ ಮತ್ತೊಮ್ಮೆ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ಹಲವು ವರ್ಷಗಳ ಕಾಲ ಮುಂದುವರಿದಿತ್ತು.

2024ರಲ್ಲಿ ಕೌಟುಂಬಿಕ ನ್ಯಾಯಾಲಯವು ವಿಜಯ್ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ದುನಿಯಾ ವಿಜಯ್ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ವಿಭಾಗೀಯ ಪೀಠ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿ ವಿಚ್ಛೇದನಕ್ಕೆ ಅನುಮತಿ ನೀಡಿದೆ. ಜೊತೆಗೆ ನಾಗರತ್ನ ಅವರಿಗೆ ₹2 ಕೋಟಿ ಜೀವನಾಂಶ ನೀಡುವಂತೆ ಆದೇಶಿಸಿದೆ.

ಇದರೊಂದಿಗೆ ಹಲವು ವರ್ಷಗಳಿಂದ ಮುಂದುವರಿದಿದ್ದ ದುನಿಯಾ ವಿಜಯ್–ನಾಗರತ್ನ ಅವರ ದಾಂಪತ್ಯ ವಿವಾದಕ್ಕೆ ಕಾನೂನುಬದ್ಧ ಅಂತ್ಯ ಸಿಕ್ಕಂತಾಗಿದೆ.

Exit mobile version