ಉತ್ತರ ಕರ್ನಾಟಕದ ಜನಪ್ರಿಯ ಹಿರಿಯ ರಂಗಕಲಾವಿದ, ಚಲನಚಿತ್ರ ಹಾಸ್ಯ ನಟ ರಾಜು ತಾಳಿಕೋಟೆ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೃದಯಾಘಾತದಿಂದ ಬಳಲುತ್ತಿದ್ದ ಅವರು ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದಿಂದ ಕನ್ನಡ ಚಿತ್ರರಂಗ ಮತ್ತು ಉತ್ತರ ಕರ್ನಾಟಕದ ರಂಗಭೂಮಿ ಕಂಬನಿ ಮಿಡಿಯುತ್ತಿದೆ.
ರಾಜು ತಾಳಿಕೋಟೆ ಅವರ ಮೂಲ ಹೆಸರು ರಾಜೇಸಾಬ ಮಕ್ತುಮಸಾಬ್ ತಾಳಿಕೋಟೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ ಅವರು, ನಟನಾಗಿ ಖ್ಯಾತಿ ಗಳಿಸಿದ ನಂತರ ತಾಳಿಕೋಟಿ ನಗರದಲ್ಲಿ ವಾಸವಾಗಿದ್ದರು. ಅವರು ಖಾಸ್ಕತೇಶ್ವರ ನಾಟಕ ಮಂಡಳಿಯ ಮಾಲೀಕರಾಗಿದ್ದುದರ ಜೊತೆಗೆ, ಧಾರವಾಡದ ಪ್ರಸಿದ್ಧ ರಂಗಾಯಣ ಸಂಸ್ಥೆಯ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.