ಬೆಳಗಾವಿ: ರಾಜ್ಯದಲ್ಲಿ ಹೃದಯಾಘಾತದಿಂದ ಜೀವ ಕಳೆದುಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಾಸನ, ಶಿವಮೊಗ್ಗ, ಮತ್ತು ವಿಜಯಪುರದಲ್ಲಿ ಇತ್ತೀಚೆಗೆ ಹೃದಯಾಘಾತಕ್ಕೆ ಸಂಬಂಧಿಸಿದ ಘಟನೆಗಳು ವರದಿಯಾಗಿದ್ದವು. ಈಗ ಬೆಳಗಾವಿಯಲ್ಲಿ ಕರ್ತವ್ಯ ನಿರತ ಸಹಾಯಕ ಪೊಲೀಸ್ ಉಪನಿರೀಕ್ಷಕ (ಎಎಸ್‌ಐ) ಮೀರಾ ನಾಯಕ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಹೌದು, ಹುಬ್ಬಳ್ಳಿಯ ಎಪಿಎಂಸಿ ಪೊಲೀಸ್ ಠಾಣೆಯ ಎಎಸ್‌ಐ ಆಗಿದ್ದ ಮೀರಾ ನಾಯಕ ಅವರು ಗೋಕಾಕದ ಮಹಾಲಕ್ಷ್ಮಿದೇವಿ ಜಾತ್ರೆಯ ಭದ್ರತೆಗಾಗಿ ನಿಯೋಜನೆಗೊಂಡಿದ್ದರು. ಈ ಸಂದರ್ಭದಲ್ಲಿ ಅವರು ಗೋಕಾಕನ ಎಸ್‌ಸಿ-ಎಸ್‌ಟಿ ಬಾಲಕರ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದರು. ಆದರೆ, ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಮೀರಾ ನಾಯಕ ಅವರಿಗೆ ಎದೆಯಲ್ಲಿ ತೀವ್ರ ನೋವು ಕಾಣಿಸಿಕೊಂಡಿತು. ಕೂಡಲೇ ಅವರಿಗೆ ತೀವ್ರ ಹೃದಯಾಘಾತವಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದರು.
ಮೀರಾ ನಾಯಕ ಅವರ ಮೃತದೇಹವನ್ನು ಗೋಕಾಕ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಈ ಘಟನೆಯಿಂದ ಪೊಲೀಸ್ ಇಲಾಖೆಯಲ್ಲಿ ಶೋಕದ ವಾತಾವರಣ ಮನೆಮಾಡಿದೆ.