ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗದಲ್ಲಿ ಒಂದೇ ರಾತ್ರಿಯಲ್ಲಿ ಎಂಟು ಕೆಳಹಂತದ ಸೇತುವೆಗಳು ಜಲಾವೃತವಾಗಿವೆ. ಇದರಿಂದ 16 ಗ್ರಾಮಗಳ ಸಂಪರ್ಕ ಕಡಿತಗೊಂಡಿದ್ದು, ಜನರು ಪರ್ಯಾಯ ಮಾರ್ಗಗಳ ಮೂಲಕ ಸಂಚರಿಸುತ್ತಿದ್ದಾರೆ.
ವೇದಗಂಗಾ, ದೂದಗಂಗಾ, ಮತ್ತು ಕೃಷ್ಣಾ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ, ಇದರಿಂದ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕುಗಳಲ್ಲಿನ ಕೆಲವು ಪ್ರಮುಖ ಸೇತುವೆಗಳು ಮುಳುಗಡೆಯಾಗಿವೆ. ಜಲಾವೃತವಾದ ಸೇತುವೆಗಳು:
-
ನಿಪ್ಪಾಣಿ ತಾಲೂಕು (ವೇದಗಂಗಾ ನದಿ): ಅಕ್ಕೋಳ-ಸಿದ್ನಾಳ, ಜತ್ರಾಟ-ಭೀವಶಿ, ಬಾರವಾಡ-ಕುನ್ನೂರ.
-
ದೂದಗಂಗಾ ನದಿ: ಕಾರದಗಾ-ಬೋಜ್, ಬೋಜವಾಡಿ-ಕುನ್ನೂರ, ಮಲ್ಲಿಕವಾಡ-ದತ್ತವಾಡ.
-
ಕೃಷ್ಣಾ ನದಿ: ಯಕ್ಸಂಬಾ-ದತ್ತವಾಡ, ಕಲ್ಲೋಳ-ಯಡೂರ, ಬಾವನಸೌದತ್ತಿ-ಮಾಂಜರಿ.
ಕೃಷ್ಣಾ ನದಿಯ ಒಳಹರಿವು 67,000 ಕ್ಯೂಸೆಕ್‌ಗೆ ಏರಿಕೆಯಾಗಿದ್ದು, ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಜನರು ಮುಳುಗಿರುವ ಸೇತುವೆಗಳನ್ನು ದಾಟದಂತೆ ಪೊಲೀಸ್ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿದೆ, ಮತ್ತು ಸೇತುವೆಗಳ ಎರಡೂ ತುದಿಗಳಲ್ಲಿ ಬ್ಯಾರಿಕೇಡ್‌ಗಳನ್ನು ಒಡ್ಡಲಾಗಿದೆ.
ನದಿಗಳ ತೀರದಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಮತ್ತು ಸ್ಥಳೀಯ ಆಡಳಿತದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪರ್ಯಾಯ ಮಾರ್ಗಗಳನ್ನು ಬಳಸಿಕೊಂಡು ಸಂಚಾರವನ್ನು ಮುಂದುವರಿಸಲು ಜಿಲ್ಲಾಡಳಿತ ಸಲಹೆ ನೀಡಿದೆ.