ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹೆರೆಕೋಡಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ಇಂದು ಬೆಳಿಗ್ಗೆ ಉಪಹಾರ ಸೇವಿಸಿದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದಾರೆ. ಈ ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದೆ.
ಶಾಲೆಯಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಇಂದು ಬೆಳಿಗ್ಗೆ ಉಪಹಾರಕ್ಕೆ ಉಪ್ಪಿಟ್ಟು ನೀಡಲಾಗಿತ್ತು. ಉಪ್ಪಿಟ್ಟು ಸೇವಿಸಿದ ಕೆಲವೇ ಕ್ಷಣಗಳಲ್ಲಿ ವಿದ್ಯಾರ್ಥಿಗಳು ವಾಂತಿ, ತಲೆಸುತ್ತು ಮತ್ತು ಇತರ ಆರೋಗ್ಯ ಸಮಸ್ಯೆಗಳಿಂದ ಬಳಲತೊಡಗಿದರು. ತಕ್ಷಣವೇ 30ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿರುವುದರಿಂದ ಅವರನ್ನು ಐಸಿಯುಗೆ ಸ್ಥಳಾಂತರಿಸಿ ತೀವ್ರ ಚಿಕಿತ್ಸೆ ನೀಡಲಾಗುತ್ತಿದೆ.
ಶಾಲಾ ಆಡಳಿತ ಮಂಡಳಿಯು ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದು, ಉಪಹಾರದ ಗುಣಮಟ್ಟ ಮತ್ತು ಆಹಾರದ ಸಿದ್ಧತೆಯ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಪೊಲೀಸರು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಆಹಾರದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಿದ್ದಾರೆ.





