ಬೆಳಗಾವಿ (ಆ. 12): ಬೆಳಗಿನ ಜಾವ ವಾಯುವಿಹಾರಕ್ಕೆ ತೆರಳಿದ್ದ ಮಹಿಳೆಯೊಬ್ಬರು ಸೇತುವೆ ಕಾಮಗಾರಿಗಾಗಿ ತೋಡಲಾಗಿದ್ದ ಆಳವಾದ ಗುಂಡಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಬೈಲಹೊಂಗಲ ತಾಲೂಕಿನ ಹೊಸೂರ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಮಲ್ಲವ್ವ ಸುರೇಶ ವಿವೇಕಿ (44) ಎಂದು ಗುರುತಿಸಲಾಗಿದೆ. ಬೈಲಹೊಂಗಲ-ಮುನವಳ್ಳಿ ಮುಖ್ಯ ರಸ್ತೆಯ ದೊಡ್ಡಹಳ್ಳದ ಬಳಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಇದಕ್ಕಾಗಿ ಆಳವಾದ ಗುಂಡಿಯನ್ನು ತೋಡಲಾಗಿತ್ತು. ಗುಂಡಿಯಲ್ಲಿ ನೀರು ಸಂಗ್ರಹವಾಗಿತ್ತು ಎನ್ನಲಾಗಿದೆ.
ಬೆಳಗಿನ ಜಾವ ವಾಯುವಿಹಾರಕ್ಕೆ ತೆರಳಿದ್ದ ಮಲ್ಲವ್ವ ಅವರು ಕಾಮಗಾರಿ ಸ್ಥಳದಲ್ಲಿ ಆಯತಪ್ಪಿ ಗುಂಡಿಗೆ ಬಿದ್ದಿದ್ದಾರೆ. ಆಳವಾದ ಗುಂಡಿಯಲ್ಲಿದ್ದ ನೀರಿನಲ್ಲಿ ಮುಳುಗಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸುರಕ್ಷತಾ ಕ್ರಮ ಕೈಗೊಳ್ಳದ ಆರೋಪ
ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಸೂಕ್ತ ಬ್ಯಾರಿಕೇಡ್, ಎಚ್ಚರಿಕೆ ಫಲಕ ಹಾಗೂ ಅಗತ್ಯ ಸುರಕ್ಷತಾ ವ್ಯವಸ್ಥೆ ಮಾಡಿರಲಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಗುತ್ತಿಗೆದಾರರು ಮತ್ತು ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯವೇ ಮಹಿಳೆಯ ಸಾವಿಗೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಕಾಮಗಾರಿ ಸ್ಥಳದಲ್ಲಿ ತಕ್ಷಣ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಶವ ಸಾಗಿಸುತ್ತಿದ್ದ ವಾಹನದೊಂದಿಗೆ ಪ್ರತಿಭಟನೆ ನಡೆಸಿದರು.
ಸ್ಥಳಕ್ಕೆ ಆಗಮಿಸಿದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕಾಮಗಾರಿ ಸ್ಥಳದಲ್ಲಿನ ಅವ್ಯವಸ್ಥೆಯನ್ನು ಪರಿಶೀಲಿಸಿದರು. ಬಳಿಕ ಗುರುವಾರ ಬೆಳಗ್ಗೆ ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆಸಿ ಗ್ರಾಮಸ್ಥರ ಬೇಡಿಕೆಗಳ ಕುರಿತು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ಅಂತ್ಯಸಂಸ್ಕಾರಕ್ಕೆ ಅವಕಾಶ ಮಾಡಿಕೊಡಲಾಯಿತು.
ಈ ಸಂಬಂಧ ಮುರಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸೂಕ್ತ ಬಂದೋಬಸ್ತ್ ಏರ್ಪಡಿಸಿದ್ದರು.
ಕಾಮಗಾರಿ ಸ್ಥಳಗಳಲ್ಲಿ ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳದಿದ್ದರೆ ಇಂತಹ ದುರಂತಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಎಚ್ಚರಿಕೆ ವಹಿಸಬೇಕೆಂಬ ಆಗ್ರಹ ಕೇಳಿಬಂದಿದೆ.




