ವಿಜಯನಗರ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ!

Untitled design (17)

ಬೆಂಗಳೂರು: ನಗರದ ವಿಜಯನಗರ ಮೆಟ್ರೋ ನಿಲ್ದಾಣದಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಮೆಟ್ರೋ, ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ 45 ವರ್ಷದ ವ್ಯಕ್ತಿಯೊಬ್ಬರು ಹಳಿಗೆ ಹಾರಿದ್ದು, ಕೆಲಕಾಲ ಭಯದ ವಾತಾವರಣ ನಿರ್ಮಾಣವಾಗಿತ್ತು. ಮೆಟ್ರೋ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ವ್ಯಕ್ತಿಯ ಪ್ರಾಣ ಉಳಿದಿದ್ದು, ಸಂಭವಿಸಬಹುದಾಗಿದ್ದ ಮತ್ತೊಂದು ಅನಾಹುತ ತಪ್ಪಿದೆ.

ವಿಜಯನಗರ ನಿವಾಸಿ ಜಾನ್ ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಸುಮಾರು 1.41ರ ವೇಳೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ರೈಲು ಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಹಳಿಗೆ ಹಾರಿದ ಜಾನ್ ಅವರನ್ನು ಗಮನಿಸಿದ ಮೆಟ್ರೋ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ.

ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಉಳಿದ ಜೀವ!

ವ್ಯಕ್ತಿ ಹಳಿಗೆ ಬಿದ್ದಿರುವುದನ್ನು ಗಮನಿಸಿದ ಮೆಟ್ರೋ ಸಿಬ್ಬಂದಿ ಕೂಡಲೇ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿದ್ದಾರೆ. ಬಳಿಕ ಹಳಿಗೆ ಇಳಿದು ರಕ್ಷಣಾ ಕಾರ್ಯಾಚರಣೆ ನಡೆಸಿ, ಜಾನ್ ಅವರನ್ನು ಸುರಕ್ಷಿತವಾಗಿ ಹೊರಕ್ಕೆ ಕರೆತಂದಿದ್ದಾರೆ. ಸಿಬ್ಬಂದಿ ತಕ್ಷಣ ಸ್ಪಂದಿಸಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ರಕ್ಷಿಸಲ್ಪಟ್ಟ ಜಾನ್ ಅವರನ್ನು ತಕ್ಷಣ ವಿಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ಮಾನಸಿಕ ಖಿನ್ನತೆಯ ಹಿನ್ನೆಲೆ ಇತ್ತು ಎನ್ನಲಾಗಿದ್ದು, ಘಟನೆಯ ನಿಖರ ಕಾರಣದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ವ್ಯತ್ಯಯ

ಈ ಘಟನೆಯ ಹಿನ್ನೆಲೆಯಲ್ಲಿ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲುಗಳ ಸಂಚಾರದಲ್ಲಿ ಕೆಲಕಾಲ ವ್ಯತ್ಯಯ ಉಂಟಾಗಿದೆ. ಇದರಿಂದ ಪ್ರಯಾಣಿಕರು ತೊಂದರೆ ಅನುಭವಿಸಿದ್ದು, ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ವಿಷಯ ತಿಳಿಯುತ್ತಿದ್ದಂತೆ ಗೋವಿಂದರಾಜನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. 

 

Exit mobile version