ಬೆಂಗಳೂರು, ಆ.24: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಾಹನಗಳ ಓಡಾಟ ಹೆಚ್ಚಾಗುತ್ತಾಲೇ ಇದೆ. ಈ ಹೆಚ್ಚುತ್ತಿರುವ ವಾಹನಗಳಿಂದ ಟ್ರಾಫಿಕ್ ಜಾಮ್‌ಗಳು ಹೆಚ್ಚಾಗುತ್ತಿವೆ. ಹೆಚ್ಚುತ್ತಿರುವ ಟ್ರಾಫಿಕ್ ಜಾಮ್‌ನಿಂದ ತಪ್ಪಿಸಿಕೊಳ್ಳಲು ಫುಟ್‌ಪಾತ್‌ಗಳ ಮೇಲೆ ವಾಹನ ಚಲಾಯಿಸುವ ಸವಾರರಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಫುಟ್‌ಪಾತ್ ಮೇಲೆ ವಾಹನ ಚಲಾಯಿಸುವವರಿಗೆ ವಿಧಿಸಲಾಗುತ್ತಿರುವ ದಂಡವನ್ನು ಈಗಿರುವ ರೂ. 500ರಿಂದ ರೂ. 5,000ಕ್ಕೆ ಹೆಚ್ಚಿಸುವಂತೆ ಸಾರಿಗೆ ಇಲಾಖೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಸದ್ಯ ಫುಟ್‌ಪಾತ್ ಮೇಲೆ ವಾಹನ ಚಲಾಯಿಸಿದರೆ 500 ರೂ. ದಂಡ ವಿಧಿಸಲಾಗುತ್ತಿದೆ. ಇದನ್ನು ಬರೋಬ್ಬರಿ 10 ಪಟ್ಟು ಹೆಚ್ಚಿಸಿ ರೂ. 5,000ಕ್ಕೆ ನಿಗದಿಪಡಿಸುವಂತೆ ಸಾರಿಗೆ ಇಲಾಖೆ ಪ್ರಸ್ತಾವನೆ ನೀಡಿದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಈ ಕ್ರಮ ಕೈಗೊಳ್ಳಲು ಸರ್ಕಾರ ಚಿಂತನೆ ನಡೆಸಿದೆ.
ಬೆಂಗಳೂರಿನಲ್ಲಿ ಪೀಕ್ ಅವರ್‌ಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾದಾಗ, ಕೆಲ ದ್ವಿಚಕ್ರ ವಾಹನ ಸವಾರರು ಟ್ರಾಫಿಕ್ ತಪ್ಪಿಸಿಕೊಳ್ಳುವ ಉದ್ದೇಶದಿಂದ ಫುಟ್‌ಪಾತ್‌ಗಳ ಮೇಲೆ ವಾಹನ ಚಲಾಯಿಸುತ್ತಿದ್ದಾರೆ. ಇದರಿಂದ ಪಾದಚಾರಿಗಳಿಗೆ ತೀವ್ರ ತೊಂದರೆಯಾಗುವುದರ ಜೊತೆಗೆ ಅಪಘಾತದ ಆತಂಕವೂ ಎದುರಾಗಿದೆ. ಫುಟ್‌ಪಾತ್‌ಗಳು ಪಾದಚಾರಿಗಳ ಸುರಕ್ಷಿತ ಸಂಚಾರಕ್ಕಾಗಿ ಮೀಸಲಾಗಿದ್ದರೂ, ಕೆಲವು ಸವಾರರು ನಿಯಮ ಉಲ್ಲಂಘಿಸಿ ಅವುಗಳನ್ನು ವಾಹನ ಸಂಚಾರಕ್ಕೆ ಬಳಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಸಾರಿಗೆ ಸಚಿವ ಭೈರತಿ ಸುರೇಶ್ ಅವರಿಗೆ ಪತ್ರ ಬರೆದು, ಫುಟ್‌ಪಾತ್ ಮೇಲೆ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು. ಪ್ರಸ್ತುತ ಇರುವ ರೂ. 500 ದಂಡವನ್ನು ರೂ. 5,000ಕ್ಕೆ ಹೆಚ್ಚಿಸುವಂತೆ ಅವರು ಪತ್ರದಲ್ಲಿ ಒತ್ತಾಯಿಸಿದ್ದರು.
ಸಚಿವರ ಮನವಿಯ ಬೆನ್ನಲ್ಲೇ ಸಾರಿಗೆ ಇಲಾಖೆ ದಂಡದ ಮೊತ್ತವನ್ನು ಹೆಚ್ಚಿಸುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಸರ್ಕಾರ ಈ ಪ್ರಸ್ತಾವನೆಗೆ ಅನುಮೋದನೆ ನೀಡಿದರೆ, ಫುಟ್‌ಪಾತ್ ಮೇಲೆ ವಾಹನ ಚಲಾಯಿಸುವ ಸವಾರರಿಗೆ ಭಾರಿ ದಂಡ ಬೀಳಲಿದೆ.
ಟ್ರಾಫಿಕ್ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಪಾದಚಾರಿಗಳ ಸುರಕ್ಷತೆಯನ್ನು ಹೆಚ್ಚಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಸರ್ಕಾರದ ಅಂತಿಮ ನಿರ್ಧಾರ ಹೊರಬಿದ್ದ ಬಳಿಕ ಹೊಸ ದಂಡದ ಮೊತ್ತ ಜಾರಿಗೆ ಬರಲಿದೆ ಎಂದು ತಿಳಿದು ಬಂದಿದೆ.
