ಬೆಂಗಳೂರು ಆಗಸ್ಟ್ 12: ರಸ್ತೆ ಗುಂಡಿಯಿಂದಾಗಿ ಬೈಕ್‌ನಿಂದ ಕೆಳಗೆ ಬಿದ್ದ ಮಹಿಳೆಯ ಮೇಲೆ ಹಿಂಬದಿಯಿಂದ ಬಂದ ಗೂಡ್ಸ್ ವಾಹನ ಹರಿದು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹೆಬ್ಬಗೋಡಿ ಸಮೀಪದ ಅನಂತ ನಗರದಲ್ಲಿ ನಡೆದಿದೆ.
ಮೃತರನ್ನು ಕೇರಳ ಮೂಲದ ಮೇಧಾ (32) ಎಂದು ಗುರುತಿಸಲಾಗಿದೆ. ಅವರು ಎಲೆಕ್ಟ್ರಾನಿಕ್ ಸಿಟಿಯ ಭವಿಷ್ಯ ನಿಧಿ ಕಚೇರಿಯಲ್ಲಿ ಉದ್ಯೋಗಿಯಾಗಿದ್ದರು ಎಂದು ತಿಳಿದುಬಂದಿದೆ.
ಮೇಧಾ ಅವರು ಸ್ನೇಹಿತ ಅಜಯ್ ಗುರು ಅವರೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಮುಂದೆ ಸಾಗುತ್ತಿದ್ದ ಕಾರೊಂದು ಏಕಾಏಕಿ ಬ್ರೇಕ್ ಹಾಕಿದೆ. ಇದರಿಂದ ಬೈಕ್ ಸವಾರ ನಿಯಂತ್ರಣ ಕಳೆದುಕೊಂಡಿದ್ದು, ಹಿಂಬದಿಯಲ್ಲಿ ಕುಳಿತಿದ್ದ ಮೇಧಾ ರಸ್ತೆಗೆ ಬಿದ್ದಿದ್ದಾರೆ. ಇದೇ ವೇಳೆ ಹಿಂದಿನಿಂದ ಬಂದ ಗೂಡ್ಸ್ ವಾಹನ ಅವರ ಮೇಲೆ ಹರಿದಿದೆ. ಗಂಭೀರವಾಗಿ ಗಾಯಗೊಂಡ ಮೇಧಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರಸ್ತೆ ಗುಂಡಿಗಳೇ ಅಪಘಾತಕ್ಕೆ ಕಾರಣ?
ಅನಂತ ನಗರದ ಪ್ರಮುಖ ರಸ್ತೆಯು ಸಂಪೂರ್ಣವಾಗಿ ಹಳ್ಳ-ಗುಂಡಿಗಳಿಂದ ಕೂಡಿದ್ದು, ವಾಹನ ಸವಾರರು ಪ್ರತಿನಿತ್ಯ ಅಪಾಯ ಎದುರಿಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ರಸ್ತೆ ಅವ್ಯವಸ್ಥೆಯಿಂದಾಗಿ ಈ ಭಾಗದಲ್ಲಿ ಪದೇಪದೇ ಅಪಘಾತಗಳು ಸಂಭವಿಸುತ್ತಿವೆ ಎನ್ನಲಾಗಿದೆ.
ಶಾಲಾ-ಕಾಲೇಜು ವಿದ್ಯಾರ್ಥಿಗಳು ಕೂಡ ಇದೇ ರಸ್ತೆಯನ್ನು ಬಳಸುತ್ತಿದ್ದು, ಗುಂಡಿಗಳಲ್ಲಿ ಬಿದ್ದು ಕೈಕಾಲು ಮುರಿದುಕೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆಗಳೂ ನಡೆದಿವೆ ಎಂದು ನಿವಾಸಿಗಳು ತಿಳಿಸಿದ್ದಾರೆ. ಇದೀಗ ರಸ್ತೆ ಅವ್ಯವಸ್ಥೆಗೆ ಮತ್ತೊಂದು ಅಮಾಯಕ ಜೀವ ಬಲಿಯಾಗಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಮೇಧಾ ಸಾವಿಗೆ ನಿವಾಸಿಗಳ ಕಂಬನಿ
ಯುವತಿ ಮೇಧಾ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಅನಂತನಗರ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳೀಯರು ಕ್ಯಾಂಡಲ್ ಮಾರ್ಚ್ ನಡೆಸಿ, ಮೇಧಾ ಅವರ ಸಾವಿಗೆ ಸಂತಾಪ ಸೂಚಿಸಿದರು. ಬಳಿಕ ಮೌನಾಚರಣೆ ನಡೆಸಿ ಮೃತ ಯುವತಿಯ ಆತ್ಮಕ್ಕೆ ಶಾಂತಿ ಕೋರಿದರು.
ರಸ್ತೆಯನ್ನು ತಕ್ಷಣ ದುರಸ್ತಿಪಡಿಸಿ, ಹಳ್ಳ-ಗುಂಡಿಗಳನ್ನು ಮುಚ್ಚಬೇಕು. ಇಂತಹ ಅವ್ಯವಸ್ಥೆಯಿಂದ ಮತ್ತಷ್ಟು ಅಮಾಯಕ ಜೀವಗಳು ಬಲಿಯಾಗುವುದನ್ನು ತಡೆಯಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.
ವಿಶೇಷವಾಗಿ ಎಲೆಕ್ಟ್ರಾನಿಕ್ ಸಿಟಿ ಸುತ್ತಮುತ್ತಲಿನ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ವಾಹನ ಸವಾರರು ಹಾಗೂ ಪಾದಚಾರಿಗಳ ಸುರಕ್ಷತೆಗಾಗಿ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
